ಯಡಿಯೂರಪ್ಪ ಮನೆ ಮೇಲೆ ಕಲ್ಲು ತೂರಾಟ: ಗುಪ್ತಚರ ಇಲಾಖೆ ಯಾವ ಬಿಲದಲ್ಲಿ ಗೆಣಸನ್ನು ಹುಡುಕುತ್ತಿತ್ತು ?, ಸರಣಿ ಟ್ವೀಟ್ ಮಾಡಿದ ಕಾಂಗ್ರೆಸ್!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಒಳಮೀಸಲಾತಿ ಕಲ್ಪಿಸುವ ರಾಜ್ಯ ಸರ್ಕಾರದ ನಿರ್ಧಾರದ ನಂತರ ಬಂಜಾರ ಸಮುದಾಯದವರು ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ ಮನೆ ಮೇಲೆ ಕಲ್ಲು ತೂರಾಟ ನಡೆಸಿದ ಕುರಿತು ಕಾಂಗ್ರೆಸ್‌ ಸತತ ಟ್ವೀಟ್ ಮಾಡುವ ಮೂಲಕ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದೆ.

ಬಂಜಾರಾ ಸೇರಿದಂತೆ ಹಲವು ಸಮುದಾಯಗಳು ಸರ್ಕಾರದ ವಿರುದ್ದ ಸಿಡಿದು ನಿಲ್ಲುವ ಮೂಲಕ ಬಿಜೆಪಿಯ ಅವನತಿಗೆ ಮುನ್ನುಡಿ ಬರೆಯುವುದು ನಿಶ್ಚಿತ ಎಂದು ರಾಜ್ಯ ಕಾಂಗ್ರೆಸ್ ಟೀಕಿಸಿದೆ.ಸಿಎಂ ಬೊಮ್ಮಾಯಿ ಅವರೇ, ಸಾಧನೆ, ಯೋಜನೆ ತೋರಿಸದೆ, ಮೂಗಿಗೆ ತುಪ್ಪ ಸವರುವ ರಾಜಕಾರಣವನ್ನು ಜನತೆ ತಿರಸ್ಕರಿಸಿದ್ದಾರೆ ಎಂದು ಟಾಂಗ್ ನೀಡಿದೆ.

ಮತ್ತೆ ಮುಂದುವರಿಸಿ ಗೃಹಸಚಿವರ ವಿರುದ್ಧ ವಾಗ್ದಾಳಿ ನಡೆಸಿದ ಕಾಂಗ್ರೆಸ್, ಗೃಹಸಚಿವರ ತವರು ಜಿಲ್ಲೆಯಲ್ಲಿ ಮಾಜಿ ಸಿಎಂ ಮನೆಗೆ ರಕ್ಷಣೆ ಇಲ್ಲವೆಂದರೆ ಏನರ್ಥ? ಗುಪ್ತಚರ ಇಲಾಖೆ ಯಾವ ಬಿಲದಲ್ಲಿ ಗೆಣಸನ್ನು ಹುಡುಕುತ್ತಿತ್ತು? ಅರಗ ಜ್ಞಾನೇಂದ್ರ ಅವರೇ?ಇದು ಕಾನೂನು ಸುವ್ಯವಸ್ಥೆಯ ವೈಫಲ್ಯವೇ ಅಥವಾ ಷಡ್ಯಂತ್ರವೇ? ಮೀಸಲಾತಿ ಅವಾಂತರಕ್ಕೆ ಹೊಣೆಗಾರರಲ್ಲದ BSYರ ಮನೆ ಮೇಲೆ ದಾಳಿ ಮಾಡಿದ್ದು ಯಾರ “ಸಂತೋಷ”ದ ಕಾರಣಕ್ಕೆ? ಎಂದು ಸಾಲು ಸಾಲು ಪ್ರಶ್ನೆ ಮುಂದಿಟ್ಟಿದೆ.

 

ಬಿ ಎಸ್ ವೈ ಅವರು ಮುಖ್ಯಮಂತ್ರಿಯಲ್ಲ, ಸರ್ಕಾರದ ನಿರ್ಧಾರಗಳಲ್ಲಿ ಅವರ ಪಾತ್ರವಿಲ್ಲ, ಆದರೂ ಸರ್ಕಾರದ ಅವಾಂತರಕ್ಕೆ ಬಿ ಎಸ್ ವೈ ಮನೆ ಮೇಲೆ ದಾಳಿ ಆಗಿದ್ದೇಕೆ? ಗುಪ್ತಚರ ಇಲಾಖೆ, ಪೊಲೀಸ್ ಇಲಾಖೆ ಕಣ್ಮುಚ್ಚಿ ಕುಳಿತಿದ್ದೇಕೆ ಎನ್ನುವುದೇ ಯಕ್ಷಪ್ರಶ್ನೆ. ಬಿ ಎಸ್ ವೈ ಮನೆಯ ಮೇಲಿನ ದಾಳಿಯ ಹಿಂದೆ ಬಿಜೆಪಿಯ “ಸಂತೋಷ ಕೂಟ”ದ ಕೈವಾಡ ಇರುವುದು ನಿಶ್ಚಿತ ಎಂದು ಸರಣಿ ಟ್ವೀಟ್ ಮೂಲಕ ಕಾಂಗ್ರೆಸ್ ಆರೋಪಿಸಿದೆ.

ಕಾನೂನು ಸುವ್ಯವಸ್ಥೆ ಉಲ್ಲಂಘನೆಯ ಪ್ರಕರಣಗಳು, ಗಲಭೆ, ಘರ್ಷಣೆಗಳೆಲ್ಲದರ ಬೀಜ ಬಿತ್ತುವುದು ಗೃಹಸಚಿವರ ತವರು ಜಿಲ್ಲೆ ಶಿವಮೊಗ್ಗದಲ್ಲೇ ಏಕೆ? ತನ್ನ ತವರಿನಲ್ಲಿ, ಅದರಲ್ಲೂ ಮಾಜಿ ಸಿಎಂ ಮನೆ ಬಳಿ ಕಾನೂನು ಸುವ್ಯವಸ್ಥೆ ಕಾಪಾಡಲಾಗದ ಅರಗ ಜ್ಞಾನೇಂದ್ರ ಅವರದ್ದು ಹೊಣೆಗೇಡಿತನವೋ ಅಥವಾ “ಸಂತೋಷ ಕೂಟ”ವನ್ನು ಮೆಚ್ಚಿಸುವ ಷಡ್ಯಂತ್ರವೋ? ಎಂದು ಪ್ರಶ್ನೆ ಮಾಡಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!