ಹೊಸದಿಗಂತ ಡಿಜಿಟಲ್ ಡೆಸ್ಕ್:
ಗಣೇಶ ವಿಸರ್ಜನೆ ವೇಳೆ ಗುಂಪು ಘರ್ಷನೆ ಪ್ರಕರಣ ಮತ್ತೊಂದು ಕಳೆದ ರಾತ್ರಿ ನಡೆದಿದೆ. ಮಂಡ್ಯ ಜಿಲ್ಲೆಯ ಮದ್ದೂರಿನ ಚನ್ನೇಗೌಡ ಬಡಾವಣೆ ನಿವಾಸಿಗಳು ನಿನ್ನೆ ಭಾನುವಾರ ರಾತ್ರಿ ಗಣಪತಿ ವಿಸರ್ಜನೆ ಮೆರವಣಿಗೆ ನಡೆಸುತ್ತಿರುವಾಗ ಕಲ್ಲು ತೂರಾಟ ನಡೆದಿದೆ.
ಮಸೀದಿಯಿಂದಲೇ ಲೈಟ್ ಆಫ್ ಮಾಡಿ ಕಲ್ಲು ತೂರಾಟ ನಡೆಸಿದ್ದಾರೆ ಎಂದು ಮೆರವಣಿಗೆಯಲ್ಲಿದ್ದವರು ಆರೋಪಿಸಿದ್ದಾರೆ. ಬೀದಿಗಳಲ್ಲಿ ಮೆರವಣಿಗೆ ಮೂಲಕ ಗಣಪನನ್ನು ತರುವ ವೇಳೆ ಮಸೀದಿ ಮುಂದೆ ಹಾದುಹೋಗಬೇಕೆನ್ನುವಷ್ಟರಲ್ಲಿ, ದಿಢೀರ್ ಲೈಟ್ ಆಫ್ ಮಾಡಿ ಮಸೀದಿಯಿಂದ ಕಲ್ಲು ತೂರಾಟ ನಡೆಸಿದ್ದಾರೆ. ಅಲ್ಲದೇ ದೊಣ್ಣೆಗಳನ್ನು ಕೂಡ ಎಸೆದಿದ್ದಾರೆ ಎಂದು ಸ್ಥಳದಲ್ಲಿದ್ದವರು ಆರೋಪಿಸಿದ್ದಾರೆ. ಘಟನೆಯಲ್ಲಿ ನಾಲ್ವರು ಹೋಂಗಾರ್ಡ್ಗಳು ಸೇರಿ 8 ಜನರು ಗಾಯಗೊಂಡಿದ್ದಾರೆ.
ಮಸೀದಿ ಬಳಿ ಬಂದಾಗ ಯಾವುದೇ ಘೋಷಣೆ ಕೂಗಬಾರದು. ಮೈಕ್ ಹಾಕಬಾರದು ಎಂದು ಮೊದಲೇ ಎಚ್ಚರಿಕೆ ನೀಡಲಾಗಿತ್ತು. ಅದರಂತೆ ಮೈಕ್ ಆಫ್ ಮಾಡಿ ಮೆರವಣಿಗೆ ಮಾಡಲಾಗುತ್ತಿತ್ತು. ಇದಾದ ಬಳಿಕ ಏಕಾಏಕಿ ಲೈಟ್ ಆಫ್ ಮಾಡಿ ಗಣಪತಿ ಮೆರವಣಿಗೆ ಮೇಲೆ ಮಸೀದಿಯಿಂದ ಕಲ್ಲು ತೂರಾಟ ಮಾಡಲಾಗಿದೆ ಎಂದು ಹಿಂದೂಗಳು ಆರೋಪಿಸಿದ್ದಾರೆ.
ಘಟನೆ ಹಿನ್ನೆಲೆಯಲ್ಲಿ ಪಟ್ಟಣದಾದ್ಯಂತ ಬಿಗಿ ಪೊಲೀಸ್ ಭದ್ರತೆ ಕೈಗೊಳ್ಳಲಾಗಿದ್ದು, ಮುಂಜಾಗ್ರತಾ ಕ್ರಮವಾಗಿ ಪಟ್ಟಣದ ಪ್ರವಾಸಿ ಮಂದಿರ ವೃತ್ತದಿಂದ ಪೇಟೆಯ ರಸ್ತೆಗಳಲ್ಲಿನ ಎಲ್ಲಾ ಅಂಗಡಿಗಳನ್ನು ಪೊಲೀಸರು ಬಂದ್ ಮಾಡಿಸಿದ್ದಾರೆ.