ಹೊಸದಿಗಂತ ಡಿಜಿಟಲ್ ಡೆಸ್ಕ್:
ಪ್ರಧಾನಿ ನರೇಂದ್ರ ಮೋದಿ ಇತ್ತೀಚೆಗೆ ಚಾಲನೆ ನೀಡಿದ್ದ ಕೇರಳದ ಮೊದಲ ವಂದೇ ಭಾರತ್ ಎಕ್ಸ್ಪ್ರೆಸ್ ರೈಲಿನ ಮೇಲೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದಾರೆ. ಇದರಿಂದ ಕಿಟಕಿಯ ಗಾಜುಗಳು ಜಖಂಗೊಂಡಿವೆ. ರೈಲ್ವೆ ಅಧಿಕಾರಿಗಳು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಸೋಮವಾರದಂದು ಸಂಜೆ 5 ಗಂಟೆಗೆ ಉತ್ತರ ಕೇರಳ ಜಿಲ್ಲೆಯ ತಿರುನಾವಯ ಮತ್ತು ತಿರೂರ್ ನಡುವೆ ಹಾದು ಹೋಗುತ್ತಿದ್ದಾಗ ಅಪರಿಚಿತ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ್ದಾರೆ. ರೈಲು ಕಾಸರಗೋಡಿನಿಂದ ತಿರುವನಂತಪುರಕ್ಕೆ ಸಂಚರಿಸುವ ವೇಳೆ ದಾಳಿ ಮಾಡಲಾಗಿದೆ ಎಂದು ರೈಲ್ವೆ ಅಧಿಕಾರಿಗಳು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಘಟನೆಯಲ್ಲಿ ಯಾರೂ ಗಾಯಗೊಂಡಿಲ್ಲ. ಆದರೆ ದುಷ್ಕರ್ಮಿಗಳ ಕಲ್ಲೇಟಿಗೆ ಒಂದು ಕೋಚ್ನ ವಿಂಡ್ಶೀಲ್ಡ್ ಹಾನಿಯಾಗಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂದು ದಕ್ಷಿಣ ರೈಲ್ವೇ ತಿಳಿಸಿದೆ. ದೂರಿನ ಆಧಾರದ ಮೇಲೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಏಪ್ರಿಲ್ 25 ರಂದು ತಿರುವನಂತಪುರಂ ಸೆಂಟ್ರಲ್ ನಿಲ್ದಾಣದಲ್ಲಿ ಕೇರಳದ ಮೊದಲ ವಂದೇ ಭಾರತ್ ಎಕ್ಸ್ಪ್ರೆಸ್ಗೆ ಚಾಲನೆ ನೀಡಿದ್ದರು. ಕಳೆದ ಮೂರು ತಿಂಗಳಲ್ಲಿ ರೈಲಿಗೆ ಕಲ್ಲು ತೂರಾಟ ನಡೆದ ಮೂರನೇ ಘಟನೆ ಇದಾಗಿದೆ.