ಹೊಸದಿಗಂತ ಡಿಜಿಟಲ್ ಡೆಸ್ಕ್ :
ಮೀಸಲಾತಿ ಕಡಿತ ಖಂಡಿಸಿ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದಲ್ಲಿ ಬಂಜಾರಾ ಸಮುದಾಯದವರು ನಡೆಸುತ್ತಿದ್ದ ಪ್ರತಿಭಟನೆ ತೀವ್ರ ಸ್ವರೂಪ ಪಡೆದಿದ್ದು, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಮನೆಯ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ.
ಒಳಮೀಸಲಾತಿ ವಿಂಗಡಣೆಗೆ ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಸಮ್ಮತಿಸಿರುವುದನ್ನು ವಿರೋಧಿಸಿ ಬಂಜಾರಾ ಸಮಾಜ ಇಂದು ಶಿಕಾರಿಪುರದಲ್ಲಿ ಪ್ರತಿಭಟನೆಗೆ ಕರೆ ಕೊಟ್ಟಿತ್ತು. ಪ್ರತಿಭಟನೆಯ ವೇಳೆ ಉದ್ರಿಕ್ತರ ಗುಂಪು ಯಡಿಯೂರಪ್ಪ ನಿವಾಸದ ಮೇಲೆ ಕಲ್ಲು ತೂರಾಟ ನಡೆಸಿದೆ. ಅಲ್ಲದೆ ಬಿಜೆಪಿಯ ಫ್ಲೆಕ್ಸ್, ಬ್ಯಾನರ್‌ಗಳನ್ನು ಸಹ ಹರಿದು ಆಕ್ರೋಶ ವ್ಯಕ್ತಪಡಿಸಿದೆ.
ಉದ್ರಿಕ್ತರ ಗುಂಪನ್ನು ನಿಯಂತ್ರಿಸಲು ಮುಂದಾದ ಪೊಲೀಸರ ಮೇಲೂ ಕಲ್ಲು ತೂರಾಟ ನಡೆದಿದೆ. ಒಟ್ಟಾರೆ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ಪೊಲೀಸರು ಪ್ರತಿಭಟನಾಕಾರರನ್ನು ಚದುರಿಸಲು ಹರಸಾಹಸ ಪಟ್ಟಿದ್ದಾರೆ.