ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿ ಮುಂಗಾರು ಚುರುಕು ಪಡೆದುಕೊಂಡಿದ್ದು,ಎಲ್ಲೆಡೆ ಉತ್ತಮ ಮಳೆಯಾಗುತ್ತಿದೆ. ಮುಂದಿನ ದಿನಗಳಲ್ಲೂ ಭರ್ಜರಿ ಮಳೆಯಾಗಲಿದೆ. ಜೊತೆಗೆ, ಕರಾವಳಿ ತೀರ ಪ್ರದೇಶದ ಜಿಲ್ಲೆಗಳಲ್ಲಿ ನಾಳೆಯಿಂದ ಗಂಟೆಗೆ 40-50 ಕಿ.ಮೀ. ವೇಗದಲ್ಲಿ ಬೀಸುವ ಬಿರುಗಾಳಿ ಸಮೇತ ಮಳೆಯಾಗಿವ ಸಾಧ್ಯತೆಯಿದ್ದು, ಮೀನುಗಾರಿಕೆಗೆ ತೆರಳದಂತೆ ಹವಾಮಾನ ಇಲಾಖೆ ಸೂಚನೆ ನೀಡಿದೆ.
ಇಂದಿನಿಂದ ಜು.25ರವರೆಗೆ ರಾಜ್ಯದಾದ್ಯಂತ ಬಹುತೇಕ ಕಡೆಗಳಲ್ಲಿ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ. ಅದರಲ್ಲಿಯೂ ಮುಂದಿನ 24 ಘಂಟೆಗಳಲ್ಲಿ ಕರಾವಳಿಯ ಉಡುಪಿ ದಕ್ಷಿಣ ಕನ್ನಡ ಜಿಲ್ಲೆ ಮತ್ತು ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರಿಯಿಂದ ಅತಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಉಳಿದಂತೆ ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ಯಾದಗಿರಿ ಜಿಲ್ಲೆಗಳ ಮತ್ತು ದಕ್ಷಿಣ ಒಳನಾಡಿನ ಹಾಸನ, ಬಳ್ಳಾರಿ ಜಿಲ್ಲೆಯ ಒಂದೆರಡು ಕಡೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಮಾಹಿತಿ ನೀಡಿದೆ.
ರಾಜ್ಯಾದ್ಯಂತ ನಾಳೆ ಒಂದೆರಡು ಕಡೆಗಳಲ್ಲಿ ಬಿರುಗಾಳಿಯು ಘಂಟೆಗೆ 40-50 ಕಿ.ಮೀ. ವೇಗದಲ್ಲಿ ಬೀಸುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಕರ್ನಾಟಕ ಕರಾವಳಿಯಲ್ಲಿ ಬಿರುಗಾಳಿಯು ಗಂಟೆಗೆ 40-45 ಕಿಮೀ ಇಂದ 55 ಕಿಮೀ ವೇಗದಲ್ಲಿ ಬೀಸುವ ವಾತಾವರಣವಿರುತ್ತದೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ.
ಇನ್ನು 25 ನೇ ಜುಲೈ 2023 ರ ಬೆಳಗ್ಗೆವರೆಗಿನ ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳ ಮುನ್ಸೂಚನೆ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಹಗುರ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ. ಕೆಲವೊಮ್ಮೆ ಬಲವಾದ ಮೇಲ್ಮೈ ಗಾಳಿ ಬೀಸುವ ಸಾಧ್ಯತೆ ಇದೆ.