ಸಮಾಜದಲ್ಲಿ ಭೀತಿ ಸೃಷ್ಟಿಸುವವರ, ಸಾಮರಸ್ಯ ಕದಡುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ: ಸಿಎಂ ಸಿದ್ದರಾಮಯ್ಯ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ರಾಜ್ಯದ ಜನರಲ್ಲಿ ಸುರಕ್ಷತೆಯ ಭಾವ ಮೂಡಿಸಲು ಕೆಲಸ ನಮ್ಮ ಸರ್ಕಾರ ಮಾಡಲಿದೆ. ಈಗಾಗಲೇ ಕೆಲಸ ಪ್ರಾರಂಭವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.

ಎದ್ದೇಳು ಕರ್ನಾಟಕ ಸಂಘಟನೆ’ಯ ಪ್ರತಿನಿಧಿಗಳೊಂದಿಗೆ ಸಂವಾದ ನಡೆಸಿ ಮಾತನಾಡುತ್ತಾ, ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಕೂಡಲೇ ಸಮಾಜದಲ್ಲಿ ಭೀತಿಯ ವಾತಾವರಣ ಸೃಷ್ಟಿಸುವವರು, ಸಾಮಾಜಿಕ ಜಾಲತಾಣಗಳ ಮೂಲಕ ಸಾಮರಸ್ಯ ಕದಡುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುವಂತೆ ಪೊಲೀಸ್‌ ಅಧಿಕಾರಿಗಳಿಗೆ ಕಟ್ಟು ನಿಟ್ಟಿನ ಸೂಚನೆ ನೀಡಿದ್ದೇನೆ. ಇನ್ನು ಮುಂದೆ ರಾಜ್ಯದಲ್ಲಿ ಅನೈತಿಕ ಪೊಲೀಸ್‌ಗಿರಿಗೆ ಅವಕಾಶವಿಲ್ಲ ಎಂದು ತಿಳಿಸಿದರು.

ನಮ್ಮ ಸರ್ಕಾರವು ಜನರ ನಿರೀಕ್ಷೆಗೆ ತಕ್ಕಂತೆ ಕೆಲಸ ಮಾಡಲಿದೆ. ಚುನಾವಣೆ ಸಂದರ್ಭದಲ್ಲಿ ಭರವಸೆ ನೀಡಿದ 5 ಗ್ಯಾರಂಟಿಗಳನ್ನು ಅನುಷ್ಠಾನಗೊಳಿಸಲಾಗುವುದು. ಇದಕ್ಕೆ ವಾರ್ಷಿಕ 59,000 ಕೋಟಿ ರೂ. ಹಣಕಾಸಿನ ಅಗತ್ಯವಿದ್ದು, ಪ್ರಸಕ್ತ ವರ್ಷದ ಬಾಕಿ ಉಳಿದ ತಿಂಗಳುಗಳಿಗೆ 41,000 ಕೋಟಿ ರೂ. ಗಳ ಅಗತ್ಯವಿದೆ ಎಂದು ವಿವರಿಸಿದರು. ಇದೇ ವೇಳೆ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಮರುಪರಿಶೀಲಿಸಿ, ಹೊಸ ನೀತಿ ಜಾರಿ ಜತೆಗೆ ಹಲವು ಜನ ವಿರೋಧಿ ಕಾಯ್ದೆಗಳನ್ನು ರದ್ದುಪಡಿಸಲು ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದು ತಿಳಿಸಿದರು.

ನಿಯೋಗದಲ್ಲಿ ಕರ್ನಾಟಕ ಶೋಷಿತ ಸಮುದಾಯಗಳ ಮಹಾ ಒಕ್ಕೂಟದ ಕೆ.ಎಂ.ರಾಮಚಂದ್ರಪ್ಪ, ನೂರ್ ಶ್ರೀಧರ್, ವಿಜಯಮ್ಮ, ಮಲ್ಲಿಗೆ, ಜೆ.ಎಸ್.ಪಾಟೀಲ್, ಅಬ್ದುಲ್ ಘನಿ ಸೇರಿದಂತೆ 30 ಕ್ಕೂ ಅಧಿಕ ಮಂದಿ ನಾನಾ ಸಂಘಟನೆಗಳ ಪ್ರತಿನಿಧಿಗಳು ನಿಯೋಗದಲ್ಲಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!