ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರು ಅಭಿವೃದ್ಧಿ ಸಚಿವ ಕೃಷ್ಣಭೈರೇಗೌಡ ಅವರ ಕಟ್ಟುನಿಟ್ಟಿನ ಸೂಚನೆ ಮೇರೆಗೆ, ಜಿಬಿಎ (GBA) ಅಧಿಕಾರಿಗಳು ರಾಜಧಾನಿಯಲ್ಲಿ ಫುಟ್ಪಾತ್ ಒತ್ತುವರಿ ತೆರವು ಕಾರ್ಯಾಚರಣೆಯನ್ನು ಇಂದಿನಿಂದ ಅಧಿಕೃತವಾಗಿ ಆರಂಭಿಸಿದ್ದಾರೆ. ಜಿಬಿಎ ವ್ಯಾಪ್ತಿಯ ಎಲ್ಲಾ 5 ನಗರ ಪಾಲಿಕೆಗಳಲ್ಲಿ ಈ ಬಿಗಿ ಕ್ರಮ ಜರುಗಿಸಲಾಗುತ್ತಿದ್ದು, ಫುಟ್ಪಾತ್ ಆಕ್ರಮಿಸಿಕೊಂಡಿದ್ದ ಹೋಟೆಲ್, ಕೆಫೆ ಹಾಗೂ ಸಣ್ಣಪುಟ್ಟ ಅಂಗಡಿ ಮುಂಗಟ್ಟುಗಳಿಗೆ ಅಧಿಕಾರಿಗಳು ಬಿಸಿ ಮುಟ್ಟಿಸಿದ್ದಾರೆ. ಕೆಲವು ಕಡೆಗಳಲ್ಲಿ ಬೀದಿ ವ್ಯಾಪಾರಿಗಳು ಜಾಗ ಬಿಡಲು ನಿರಾಕರಿಸಿ ಹೈಡ್ರಾಮಾ ಸೃಷ್ಟಿಸಿದ ಘಟನೆಗಳೂ ನಡೆದಿವೆ.
ಸಚಿವ ಕೃಷ್ಣಭೈರೇಗೌಡ ಸ್ಪಷ್ಟನೆ
ಈ ಕುರಿತು ವಿಕಾಸಸೌಧದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಸಚಿವ ಕೃಷ್ಣಭೈರೇಗೌಡ, ಸುಪ್ರೀಂ ಕೋರ್ಟ್ ಆದೇಶದ ಅನ್ವಯವೇ ಈ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಸ್ಪಷ್ಟಪಡಿಸಿದ್ದಾರೆ. ಫುಟ್ಪಾತ್ ಒತ್ತುವರಿಯಿಂದಾಗಿ ಸಾರ್ವಜನಿಕರಿಗೆ ತೊಂದರೆಯಾಗುತ್ತಿದ್ದು, ಅಪಘಾತಗಳ ಸಂಖ್ಯೆ ಹೆಚ್ಚುತ್ತಿದೆ ಎಂದು ಸಾರ್ವಜನಿಕರು ದೂರು ನೀಡಿದ್ದರು.
ಸಚಿವರ ಪ್ರಮುಖ ಹೇಳಿಕೆ: “ಬೆಂಗಳೂರಿನಲ್ಲಿ ಒಟ್ಟು 15,000 ಕಿ.ಮೀ. ಫುಟ್ಪಾತ್ ಇದ್ದು, ಸದ್ಯಕ್ಕೆ ಹೆಚ್ಚು ಜನಸಂದಣಿ ಇರುವ ಕೇವಲ ಶೇ. 15ರಷ್ಟು, ಅಂದರೆ 2,000 ಕಿ.ಮೀ. ವ್ಯಾಪ್ತಿಯನ್ನು ಮಾತ್ರ ತೆರವುಗೊಳಿಸಲು ಸೂಚಿಸಲಾಗಿದೆ.”
ನಾಗರಿಕರ ಸುರಕ್ಷತೆಯ ದೃಷ್ಟಿಯಿಂದ ಈ ಕಾರ್ಯಾಚರಣೆ ಅತ್ಯಗತ್ಯವಾಗಿದೆ ಎಂದು ಅವರು ತಿಳಿಸಿದ್ದಾರೆ.



