August 14, 2026
Friday, August 14, 2026
spot_img

ರಸ್ತೆ, ಚರಂಡಿಯಲ್ಲಿ ರಾಷ್ಟ್ರಧ್ವಜ ಬೀಳುವುದನ್ನು ತಡೆಯಲು ಖಡಕ್ ಕ್ರಮ: ಅಧಿಕಾರಿಗಳಿಗೆ ಹಿಂದೂ ಜನಜಾಗೃತಿ ಸಮಿತಿ ಆಗ್ರಹ

ಹೊಸದಿಗಂತ ಡಿಜಿಟಲ್ ಡೆಸ್ಕ್:


ಸ್ವಾತಂತ್ರ್ಯ ದಿನಾಚರಣೆ ಸಂದರ್ಭದಲ್ಲಿ ರಾಷ್ಟ್ರಧ್ವಜಕ್ಕೆ ಆಗುವ ಅನಾದರವನ್ನು ತಡೆಯಲು ಹಾಗೂ ಪ್ಲಾಸ್ಟಿಕ್ ರಾಷ್ಟ್ರಧ್ವಜಗಳ ಮಾರಾಟದ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಹಿಂದೂ ಜನಜಾಗೃತಿ ಸಮಿತಿ ಆಗ್ರಹಿಸಿದೆ.


ಸಮಿತಿಯು ಕಳೆದ 16 ವರ್ಷಗಳಿಂದ ’ರಾಷ್ಟ್ರಧ್ವಜವನ್ನು ಗೌರವಿಸಿ’ ಎಂಬ ಜಾಗೃತಿ ಅಭಿಯಾನವನ್ನು ಯಶಸ್ವಿಯಾಗಿ ನಡೆಸಿಕೊಂಡು ಬರುತ್ತಿದೆ. ಈ ಬಾರಿಯೂ ರಾಷ್ಟ್ರಧ್ವಜದ ಪಾವಿತ್ರ್ಯ ಕಾಪಾಡುವ ಉದ್ದೇಶದಿಂದ ಸಮಿತಿ ವತಿಯಿಂದ ವಿವಿಧ ಸರ್ಕಾರಿ ಅಧಿಕಾರಿಗಳಿಗೆ ಪ್ರತ್ಯೇಕವಾಗಿ ಮನವಿ ಪತ್ರ ಸಲ್ಲಿಸಲಾಗಿದೆ.
ಜಿಲ್ಲಾಧಿಕಾರಿಗಳು ಹಾಗೂ ತಹಸೀಲ್ದಾರ್ ಅವರಿಗೆ ಸಲ್ಲಿಸಿದ ಮನವಿಯಲ್ಲಿ, ಹೈಕೋರ್ಟ್ ಆದೇಶದಂತೆ ಜಿಲ್ಲೆಯಲ್ಲಿ ರಾಷ್ಟ್ರ ಧ್ವಜ ಗೌರವ ಕೃತಿ ಸಮಿತಿ ರಚಿಸಬೇಕು, ನಿಷೇಧಿತ ಪ್ಲಾಸ್ಟಿಕ್ ಧ್ವಜ ಮಾರಾಟ ಮಾಡುವವರ ವಿರುದ್ಧ ತಕ್ಷಣ ಕ್ರಮ ಕೈಗೊಳ್ಳಬೇಕು ಮತ್ತು ಶಾಲಾ-ಕಾಲೇಜುಗಳಲ್ಲಿ ಧ್ವಜ ಗೌರವ ಅಭಿಯಾನಕ್ಕೆ ಸೂಚನೆ ನೀಡಬೇಕು ಎಂದು ಆಗ್ರಹಿಸಲಾಗಿದೆ.


ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಸಲ್ಲಿಸಿದ ಮನವಿಯಲ್ಲಿ, ಸರ್ಕಾರದ ಸುಗ್ರೀವಾಜ್ಞೆ ಹಾಗೂ ಧ್ವಜ ಸಂಹಿತೆಯನ್ನು ಉಲ್ಲಂಘಿಸಿ ಪ್ಲಾಸ್ಟಿಕ್ ಧ್ವಜ ಮಾರಾಟ ಮಾಡುವ ಅಂಗಡಿಕಾರರು, ವ್ಯಕ್ತಿಗಳು ಮತ್ತು ಸಂಸ್ಥೆಗಳ ವಿರುದ್ಧ ಕಟ್ಟುನಿಟ್ಟಿನ ಕಾನೂನು ಕ್ರಮ ಜರುಗಿಸಲು ವಿನಂತಿಸಲಾಗಿದೆ.


ಶಾಲಾ-ಕಾಲೇಜುಗಳಲ್ಲೂ ಜಾಗೃತಿ

ರಾಷ್ಟ್ರಧ್ವಜದ ಗೌರವದ ಕುರಿತು ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸಲು ಶಾಲಾ-ಕಾಲೇಜುಗಳಲ್ಲಿ ವಿಶೇಷ ಜಾಗೃತಿ ಕಾರ್ಯಕ್ರಮಗಳನ್ನು ನಡೆಸುವಂತೆ ಶಿಕ್ಷಣ ಸಂಸ್ಥೆಗಳಿಗೆ ಮನವಿ ಮಾಡಲಾಗಿದ್ದು, ಕೆನರಾ ಹೈಸ್ಕೂಲ್ ಮತ್ತು ವಿದ್ಯಾ ಸಂಸ್ಥೆಗಳು, ಬಿ ಎಂ ಹಿರಿಯ ಪ್ರೈಮರಿ ಸ್ಕೂಲ್ ಕಾಸರಗೋಡು, ಶ್ರೀ ರಾಷ್ಟ್ರೋತ್ಥಾನ ವಿದ್ಯಾಸಂಸ್ಥೆ ತೊಕ್ಕೊಟ್ಟು, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮಾಡೂರು, ಶ್ರೀ ವಿವೇಕಾನಂದ ಸ್ಕೂಲ್ ವಿದ್ಯಾ ಸಂಸ್ಥೆ ಪೆರ್ಲಡ್ಕ, ಅಂಕುರ್ ಪ್ರೌಢಶಾಲೆ ಕುಳಾಯಿ, ಶ್ರೀ ರಾಮಕೃಷ್ಣ ಪಿ.ಯು ಕಾಲೇಜ್ ಶಿಕ್ಷಣಾಧಿಕಾರಿಗಳಿಗೆ ಹಾಗೂ ಅನೇಕ ಶಾಲಾ ಕಾಲೇಜಿನ ಮಾನ್ಯ ಮುಖ್ಯೋಪಾಧ್ಯಾಯರಿಗೆ ನೀಡಿದ ಮನವಿಯಲ್ಲಿ, ವಿದ್ಯಾರ್ಥಿಗಳು ಪ್ಲಾಸ್ಟಿಕ್, ಕಾಗದದ ಧ್ವಜಗಳನ್ನು ಮತ್ತು ತ್ರಿವರ್ಣ ಮಾಸ್ಕ್‌ಗಳನ್ನು ಖರೀದಿಸದಂತೆ ಜಾಗೃತಿ ಮೂಡಿಸಲು ಹಾಗೂ ಶಾಲಾ-ಕಾಲೇಜುಗಳಲ್ಲಿ ಸಮಿತಿಯ ವತಿಯಿಂದ ’ರಾಷ್ಟ್ರಧ್ವಜವನ್ನು ಗೌರವಿಸಿ!’ ವಿಷಯದ ಕುರಿತು ಉಪನ್ಯಾಸ, ಪ್ರಶ್ನೋತ್ತರ ಸ್ಪರ್ಧೆ, ಕರಪತ್ರ ವಿತರಣೆ ಮತ್ತು ಬಿದ್ದಿರುವ ಧ್ವಜಗಳನ್ನು ಸಂಗ್ರಹಿಸುವ ಕಾರ್ಯಕ್ರಮಗಳನ್ನು ಆಯೋಜಿಸಲು ಅನುಮತಿ ನೀಡುವಂತೆ ಕೋರಲಾಗಿದೆ.

ರಾಷ್ಟ್ರಧ್ವಜದ ಗೌರವವನ್ನು ಕಾಪಾಡುವುದು ಕೇವಲ ಸರ್ಕಾರ ಅಥವಾ ಅಧಿಕಾರಿಗಳ ಜವಾಬ್ದಾರಿಯಲ್ಲ. ಸ್ವಾತಂತ್ರ್ಯ ದಿನದ ಸಂಭ್ರಮದಷ್ಟೇ, ಸಂಭ್ರಮ ಮುಗಿದ ಬಳಿಕ ರಾಷ್ಟ್ರಧ್ವಜವನ್ನು ಗೌರವದಿಂದ ನೋಡಿಕೊಳ್ಳುವುದೂ ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿ ಎಂಬ ಸಂದೇಶವನ್ನು ಕೂಡಾ ಈ ಅಭಿಯಾನ ಮುಂದಿಟ್ಟಿದೆ.

ರಾಷ್ಟ್ರಧ್ವಜಕ್ಕೆ ಆಗುವ ಅಗೌರವ ತಡೆಯಲು ಹಿಂದೂ ಜನಜಾಗೃತಿ ಸಮಿತಿ, ಮುಂಬೈ ಉಚ್ಚ ನ್ಯಾಯಾಲಯದಲ್ಲಿ ಈಗಾಗಲೇ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದು, ನ್ಯಾಯಾಲಯವು ಪ್ಲಾಸ್ಟಿಕ್ ರಾಷ್ಟ್ರಧ್ವಜಗಳಿಂದ ಆಗುವ ಅಪಮಾನ ತಡೆಯುವಂತೆ ಸರ್ಕಾರಕ್ಕೆ ಆದೇಶಿಸಿತ್ತು. ನ್ಯಾಯಾಲಯದ ನಿರ್ದೇಶನದಂತೆ ಕೇಂದ್ರ ಮತ್ತು ರಾಜ್ಯ ಗೃಹ ಇಲಾಖೆ ಹಾಗೂ ಶಿಕ್ಷಣ ಇಲಾಖೆಗಳು ಸುತ್ತೋಲೆಗಳನ್ನು ಹೊರಡಿಸಿದ್ದು, ಕೇಂದ್ರ ಸರ್ಕಾರವೂ ಪ್ಲಾಸ್ಟಿಕ್ ನಿಷೇಧಕ್ಕೆ ಕ್ರಮ ಕೈಗೊಂಡಿದೆ. ಅದರಂತೆ, ಪ್ಲಾಸ್ಟಿಕ್ ಧ್ವಜಗಳನ್ನು ತಯಾರಿಸುವುದು ಮತ್ತು ಮಾರಾಟ ಮಾಡುವುದು ಲಾಂಛನಗಳು ಮತ್ತು ಹೆಸರುಗಳ (ಅನುಚಿತ ಬಳಕೆ ತಡೆ) ಕಾಯಿದೆ 1950 ಹಾಗೂ ರಾಷ್ಟ್ರೀಯ ಗೌರವಕ್ಕೆ ಅವಮಾನಗಳ ತಡೆ ಕಾಯ್ದೆ 191ರ ಅಡಿಯಲ್ಲಿ ಕಾನೂನುಬಾಹಿರ ಅಪರಾಧವಾಗಿದೆ.

ರಾಷ್ಟ್ರಧ್ವಜ ಪ್ರತಿಯೊಬ್ಬ ಭಾರತೀಯನ ಹೆಮ್ಮೆ ಮತ್ತು ರಾಷ್ಟ್ರೀಯತೆಯ ಸಂಕೇತವಾಗಿದ್ದು, ಆ.15ರಂದು ದೇಶಾದ್ಯಂತ ತ್ರಿವರ್ಣ ಧ್ವಜವನ್ನು ಗೌರವದಿಂದ ಹಾರಿಸಲಾಗುತ್ತದೆ. ಆದರೆ ಸಂಭ್ರಮ ಮುಗಿದ ಬಳಿಕ ಸಣ್ಣ ಕಾಗದ ಅಥವಾ ಪ್ಲಾಸ್ಟಿಕ್ ಧ್ವಜಗಳು ರಸ್ತೆ, ಚರಂಡಿ ಹಾಗೂ ಕಸದ ತೊಟ್ಟಿಗಳಲ್ಲಿ ಬಿದ್ದಿರುವುದು ಸಾಮಾನ್ಯವಾಗಿ ಕಂಡುಬರುತ್ತದೆ. ಇಂತಹ ಸ್ಥಿತಿ ರಾಷ್ಟ್ರಧ್ವಜಕ್ಕೆ ಅಗೌರವ ಉಂಟುಮಾಡುತ್ತದೆ ಎಂಬುದು ಸಮಿತಿಯ ಅಭಿಪ್ರಾಯವಾಗಿದೆ.

ಈ ಹಿನ್ನೆಲೆಯಲ್ಲಿ ಸಮಿತಿಯು ‘ರಾಷ್ಟ್ರಧ್ವಜವನ್ನು ಗೌರವಿಸಿ’ ಎಂಬ ಜಾಗೃತಿ ಅಭಿಯಾನ ನಡೆಸುತ್ತಿದ್ದು, ಸಾರ್ವಜನಿಕರು ಬಳಸಿದ ರಾಷ್ಟ್ರಧ್ವಜಗಳನ್ನು ಎಲ್ಲೆಂದರಲ್ಲಿ ಎಸೆಯದೆ ಗೌರವಯುತವಾಗಿ ವಿಲೇವಾರಿ ಮಾಡುವಂತೆ ಮನವಿ ಮಾಡಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !