ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ಕರ್ನಾಟಕದಲ್ಲಿ ಗಾಳಿ ಮಳೆ ಜೋರಾಗಿದೆ. ಕಳೆದೊಂದು ವಾರದಿಂದ ಕರಾವಳಿ, ಮಲೆನಾಡು, ಕಲ್ಯಾಣ ಕರ್ನಾಟಕ, ಕಿತ್ತೂರು ಕರ್ನಾಟಕ ಭಾಗದ ಜಿಲ್ಲೆಗಳಲ್ಲಿ ಮಳೆ ಸುರಿಯುತ್ತಿದ್ದು ಜನಜೀವನ ಅಸ್ತವ್ಯಸ್ಥಗೊಂಡಿದೆ. ಹೀಗಾಗಿ ನಾಳೆ ಹಲವು ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಬೆಳಗಾವಿ ಜಿಲ್ಲೆಯಾದ್ಯಂತ ಕಳೆದ ಎರಡು ದಿನಗಳಿಂದ ಬಿಟ್ಟೂ ಬಿಡದೇ ಮಳೆ ಸುರಿಯುತ್ತಿದೆ. ಹೀಗಾಗಿ, ಮಕ್ಕಳ ಸುರಕ್ಷತಾ ದೃಷ್ಟಿಯಿಂದ ಇಂದು ಆ.19ರಮದು ರಜೆ ಘೋಷಣೆ ಮಾಡಲಾಗಿತ್ತು. ನಾಳೆಯೂ ಸಹ ಭಾರೀ ಮಳೆ ಮುನ್ಸೂಚನೆ ನೀಡಲಾಗಿದೆ. ಹೀಗಾಗಿ ನಾಳೆ ಕೂಡ ಬೆಳಗಾವಿ ಜಿಲ್ಲೆಯ ಅಂಗನವಾಡಿ, ಶಾಲಾ ಹಾಗೂ ಪಿಯು ಕಾಲೇಜುಗಳಿಗೆ ರಜೆ ವಿಸ್ತರಣೆ ಮಾಡಲಾಗಿದೆ.
ನಾಳೆ ಹಾವೇರಿ ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಹಾವೇರಿ ಜಿಲ್ಲೆಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ನಾಳೆ ಹಾವೇರಿ ಜಿಲ್ಲೆಯ ಎಲ್ಲಾ ಅಂಗನವಾಡಿ, ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ವಿಜಯ್ ಮಹಾಂತೇಶ್ ಆದೇಶಿಸಿದ್ದಾರೆ.
ಕಲ್ಯಾಣ ಕರ್ನಾಟ ಭಾಗದ ಯಾದಗಿರಿ ಜಿಲ್ಲೆಯಾದ್ಯಂತ ಮಳೆ ಆರ್ಭಟ ಮುಂದುವರಿದಿದೆ. ಹೀಗಾಗಿ ಜಿಲ್ಲೆಯ ಅಂಗನವಾಡಿ, ಶಾಲೆಗಳಿಗೆ ನಾಳೆಯೂ ಸಹ ರಜೆ ಘೋಷಣೆ ಮಾಡಲಾಗಿದೆ. ಧಾರವಾಡ ಜಿಲ್ಲೆಯಲ್ಲೂ ಸಹ ನಿರಂತರವಾಗಿ ಮಳೆಯಾಗುತ್ತಿರುವುದರಿಂದ ಮಕ್ಕಳ ಹಿತದೃಷ್ಟಿಯಿಂದ ನಾಳೆ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಹಾಸನ, ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ.