ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯ ಸರ್ಕಾರದ ಕುರಿತು ರಾಜ್ಯಪಾಲರ ನಡೆ ವಿರುದ್ಧ ಹೋರಾಟಕ್ಕೆ ಕಾಂಗ್ರೆಸ್ ಹೈಕಮಾಂಡ್ ನಾಯಕರು ಕರೆ ನೀಡಿದ್ದಾರೆ.
ದೆಹಲಿಯಲ್ಲಿ ಹೈಕಮಾಂಡ್ ನಾಯಕರಾದ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ, ಕೆ.ಸಿ. ವೇಣುಗೋಪಾಲ್, ರಣದೀಪ್ ಸಿಂಗ್ ಸುರ್ಜೇವಾಲಾ ಅವರೊಂದಿಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸಮಾಲೋಚನೆ ನಡೆಸಿದ್ದಾರೆ.
ರಾಜ್ಯದಲ್ಲಿ ಪ್ರಸ್ತುತ ರಾಜಕೀಯ ಪರಿಸ್ಥಿತಿ ಬಗ್ಗೆ ಚರ್ಚೆ ನಡೆಸಿದ್ದೇವೆ ಎಂದು ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ಸುರ್ಜೇವಾಲಾ ಹೇಳಿದ್ದಾರೆ.
ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರ್ನಾಟಕ ಗವರ್ನರ್ ಬಿಜೆಪಿ ಕೈಗೊಂಬೆಯಾಗಿ ಕೆಲಸ ಮಾಡುತ್ತಿದ್ದಾರೆ. ಹಿಂದುಳಿದ ವರ್ಗಕ್ಕೆ ಸೇರಿದ ಸಿದ್ದರಾಮಯ್ಯ ವಿರುದ್ಧ ಷಡ್ಯಂತ್ರ ನಡೆಯುತ್ತಿದೆ. ಬಿಜೆಪಿ, ಜೆಡಿಎಸ್ ನಾಯಕರು ಹೇಳಿದಂತೆ ರಾಜ್ಯಪಾಲರು ನಡೆದುಕೊಳ್ಳುತ್ತಿದ್ದಾರೆ. ಕಾಂಗ್ರೆಸ್ ಪಕ್ಷದ ಎಲ್ಲಾ ನಾಯಕರು ಸಿದ್ದರಾಮಯ್ಯನವರ ಬೆನ್ನಿಗೆ ಇದ್ದೇವೆ ಎಂದು ಹೇಳಿದ್ದಾರೆ.
ಜನರಿಂದ ಆಯ್ಕೆಯಾದ ಸರ್ಕಾರವನ್ನು ಅಸ್ಥಿರಗೊಳಿಸಲು ಯತ್ನ ನಡೆದಿದೆ. ಸರ್ಕಾರದ ಬಗ್ಗೆ ರಾಜ್ಯಪಾಲರ ನಡೆ ವಿರುದ್ಧ ಹೋರಾಟ ನಡೆಸಲಾಗುವುದು ಎಂದು ಹೇಳಿದ್ದಾರೆ.
ಡಿಸಿಎಂ ಡಿ.ಕೆ. ಶಿವಕುಮಾರ್ ಮಾತನಾಡಿ, ರಾಜ್ಯದ ಬೆಳವಣಿಗೆ ಬಗ್ಗೆ ನಾಯಕರೊಂದಿಗೆ ಚರ್ಚೆ ನಡೆಸಿದ್ದು, ಇಡೀ ಪಕ್ಷ ಸಿದ್ಧರಾಮಯ್ಯ ಅವರ ಬೆನ್ನಿಗೆ ನಿಂತಿದೆ ಎಂದು ಹೇಳಿದ್ದಾರೆ.