ಹೊಸದಿಗಂತ ವರದಿ, ಮಂಡ್ಯ :
ರೈತರ ಜಮೀನನ್ನು ಅಕ್ರಮವಾಗಿ ವಕ್ಫ್ ಕಬಳಿಕೆ ಮಾಡುತ್ತಿರುವ ಬಗ್ಗೆ ವಿಧಾನ ಮಂಡಲದ ಅಧಿವೇಶನದಲ್ಲಿ ನಿಲುವಳಿ ಸೂಚನೆಯಲ್ಲಿ ಚರ್ಚೆಗೆ ಕೈಗೆತ್ತಿಕೊಳ್ಳುವಂತೆ ಒತ್ತಡ ಹಾಕಲಾಗುವುದು ಎಂದು ವಿಪಕ್ಷ ನಾಯಕ ಆರ್.ಅಶೋಕ್ ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ತುಷ್ಟೀಕರಣದ ರಾಜಕಾರಣ ಮಾಡುತ್ತಿದೆ. ಒಂದು ವರ್ಗದವರಿಗೆ ಬೆಣ್ಣೆ ಮತ್ತೊಂದು ವರ್ಗದವರಿಗೆ ಸುಣ್ಣದ ಮಾದರಿಯಲ್ಲಿ ಆಡಳಿತ ನಡೆಸುತ್ತಿದೆ. ಮುಸ್ಲೀಮರಿಗೆ ಪೂರ್ತಿ ಅಧಿಕಾರ ನೀಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಆಂಧ್ರಪ್ರದೇಶ ಸರ್ಕಾರದ ಮಾದರಿಯಲ್ಲಿ ಕರ್ನಾಟಕದಲ್ಲೂ ಸಹ ವಕ್ಫ್ ಮಂಡಳಿಯನ್ನು ರದ್ದುಪಡಿಸಬೇಕು ಎಂದು ಒತ್ತಾಯಿಸಿ ಸದನದಲ್ಲಿ ಹೋರಾಟ ಮಾಡುವುದಾಗಿ ತಿಳಿಸಿದರಲ್ಲದೆ, ವಕ್ಫ್ ಮಂಡಳಿ ವಿರುದ್ದ ನಿರ್ಣಯ ಕೈಗೊಳ್ಳುವಂತೆ ಪ್ರಧಾನಿ ನರೇಂದ್ರ ಮೋದಿಯವರನ್ನೂ ಒತ್ತಾಯಿಸಲಾಗುವುದು ಎಂದು ಹೇಳಿದರು.
ಸಾವಿನ ಭಾಗ್ಯ :
ಹಾಸನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಮಾವೇಶ ಮಾಡುತ್ತಿದ್ದಾರೆ. ರಾಜ್ಯದಲ್ಲಿ ಬಾಣಂತಿಯರ ಸಾವಿನ ಸಂಖ್ಯೆ ಹೆಚ್ಚಾಗಿದೆ. ಸಾವಿನ ಭಾಗ್ಯ ನೀಡುತ್ತಿದೆ. 111 ಮಂದಿ ಶಿಶುಗಳ ಮಾರಣ ಹೋಮ ನಡೆದಿದೆ. ಒಂದು ಕಡೆ ಸರ್ಕಾರಿ ಆಸ್ಪತ್ರೆಗಳಲ್ಲಿ ಓಷಧಿಗಳ ಕೊರತೆಯ ಜೊತೆಗೆ ಕಳಪೆ ಔಷಧಗಳು ಸರ್ಕಾರಿ ಆಸ್ಪತ್ರೆಗಳಿಗೆ ಸರಬರಾಜಾಗುತ್ತಿವೆ. ಇದು ಮೆಡಿಕಲ್ ಮಾಫಿಯಾವಾಗಿದೆ. ಈ ಬಗ್ಗೆಯೂ ಸದನದಲ್ಲಿ ಚರ್ಚೆ ನಡೆಸಲಾಗುವುದು ಎಂದು ತಿಳಿಸಿದರು.