ಹೊಸದಿಗಂತ ವರದಿ ಚಿತ್ರದುರ್ಗ:
ವಿವಿಧ ಕಾಲೇಜುಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅತಿಥಿ ಉಪನ್ಯಾಸಕರ ನೇಮಕಾತಿ ಮಾಡುವಂತೆ ಒತ್ತಾಯಿಸಿ ಪದವಿ ಕಾಲೇಜುಗಳ ವಿದ್ಯಾರ್ಥಿ, ವಿದ್ಯಾರ್ಥಿನಿಯರು ಆಲ್ ಇಂಡಿಯಾ ಡೆಮಾಕ್ರಟಿಕ್ ಸ್ಟೂಡೆಂಟ್ ಆರ್ಗನೈಸೇಷನ್ (ಎಐಡಿಎಸ್‌ಓ) ನೇತೃತ್ವದಲ್ಲಿ ಶನಿವಾರ ಪ್ರತಿಭಟನೆ ನಡೆಸಿದರು. ತರಗತಿಗಳನ್ನು ಬಹಿಷ್ಕರಿಸಿ ಹೊರ ನಡೆದ ವಿದ್ಯಾರ್ಥಿ ಸಮೂಹ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿದರು.
ರಾಜ್ಯದಲ್ಲಿ ಪದವಿ ಕಾಲೇಜುಗಳು ಆರಂಭವಾಗಿ ಎರಡು ತಿಂಗಳು ಕಳೆದರೂ ಸರ್ಕಾರಿ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರಿಲ್ಲದೆ ವಿದ್ಯಾರ್ಥಿಗಳು ಪರಿತಪಿಸುವಂತಾಗಿದೆ. ಈ ಶೈಕ್ಷಣಿಕ ಗೊಂದಲವನ್ನು ಪರಿಹರಿಸುವಂತೆ ಆಗ್ರಹಿಸಿ ನಗರದ ಸರ್ಕಾರಿ ವಿಜ್ಞಾನ ಕಾಲೇಜು, ಸರ್ಕಾರಿ ಕಲಾ (ಸ್ವಾಯತ್ತ) ಕಾಲೇಜು ಹಾಗೂ ಸರ್ಕಾರಿ ಮಹಿಳಾ ಪದವಿ ಕಾಲೇಜಿನ ವಿದ್ಯಾರ್ಥಿಗಳು ತರಗತಿಗಳನ್ನು ಬಹಿಷ್ಕರಿಸಿ ಪ್ರತಿಭಟನೆ ನಡೆಸಿದರು.
ಪದವಿ ವಿದ್ಯಾರ್ಥಿಗಳು ಎದುರಿಸುತ್ತಿರುವ ಸಮಸ್ಯೆಯನ್ನು ಪರಿಹರಿಸಲು ಆಗ್ರಹಿಸಿ ಇಂದು ರಾಜ್ಯದಾದ್ಯಂತ ಎಐಡಿಎಸ್‌ಓ ವಿದ್ಯಾರ್ಥಿ ಸಂಘಟನೆಯು ಪದವಿ ತರಗತಿಗಳ ಬಹಿಷ್ಕಾರಕ್ಕೆ ಕರೆ ನೀಡಿತ್ತು. ಈ ಹಿನ್ನೆಲೆಯಲ್ಲಿ ಕಾಲೇಜಿನ ಎದುರುಗಡೆ ಸೇರಿದ ವಿದ್ಯಾರ್ಥಿಗಳು ಗೇಟ್ ಹಾಕಿ, ಗೇಟುಗಳ ಮೇಲೆ ತಮ್ಮ ಬೇಡಿಕೆಗಳ ಫಲಕಗಳನ್ನಿಟ್ಟು ಪ್ರತಿಭಟನೆ ನಡೆಸಿದರು.
ಈಗಾಗಲೇ ಖಾಸಗಿ ಕಾಲೇಜುಗಳಲ್ಲಿ ತರಗತಿಗಳು ಸರಾಗವಾಗಿ ನಡೆಯುತ್ತಿದ್ದು ಆಂತರಿಕ ಪರೀಕ್ಷೆಗಳನ್ನು ಮುಗಿಸಿ ಅಲ್ಲಿನ ಸೆಮಿಸ್ಟರ್ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಾರೆ. ಆದರೆ ಸರ್ಕಾರಿ ಕಾಲೇಜಿನ ವಿದ್ಯಾರ್ಥಿಗಳು ಮಾತ್ರ ಪ್ರತಿದಿನ ೩೦-೪೦ ಕಿಲೋ ಮೀಟರ್ ಪ್ರಯಾಣ ಮಾಡಿ ಬಂದು ಕೇವಲ ಖಾಲಿ ಬೋರ್ಡ್ ಹಾಗೂ ಗೋಡೆ ನೋಡಿ ಮನೆಗೆ ಮರಳುತ್ತಿದ್ದಾರೆ ಎಂದು ದೂರಿದರು.
ಪಾಠ ಮಾಡೋಕೆ ಶಿಕ್ಷಕರನ್ನು ಕೊಡಿ ಎಂದು ರಸ್ತೆಗಿಳಿದ ವಿದ್ಯಾರ್ಥಿಗಳು
