ವಿಜಯಪುರದಲ್ಲಿ ಘಟಾನುಘಟಿ ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ

ಹೊಸದಿಗಂತ ವರದಿ, ವಿಜಯಪುರ:

ವಿಧಾನಸಭಾ ಚುನಾವಣೆ ನಾಮಪತ್ರ ಸಲ್ಲಿಕೆಗೆ ಕೇವಲ ಮೂರು ದಿನ ಬಾಕಿ ಉಳಿದಿದ್ದು, ಸೋಮವಾರ ಹಲವು ಘಟಾನುಘಟಿ ಅಭ್ಯರ್ಥಿಗಳು ತಮ್ಮ ಅಪಾರ ಬೆಂಬಲಿಗರೊಂದಿಗೆ ತೆರಳಿ, ಚುನಾವಣಾ ಅಧಿಕಾರಿಗೆ ನಾಮಪತ್ರ ಸಲ್ಲಿಸಿದರು.
ಜಿಲ್ಲೆಯ ಬಬಲೇಶ್ವರ ಮತಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ವಿಜುಗೌಡ ಪಾಟೀಲ ತಮ್ಮ ಬೆಂಬಲಿಗರೊಂದಿಗೆ ಸರಳವಾಗಿ ನಾಮಪತ್ರ ಸಲ್ಲಿಸಿದರು.
ವಿಜುಗೌಡ ಪಾಟೀಲ ಬಬಲೇಶ್ವರದ ಗುರುಪಾದೇಶ್ವರ, ಶಾಂತವೀರ ಮಹಾಸ್ವಾಮಿಗಳ ಗದ್ದುಗೆಗಳಿಗೆ ವಿಶೇಷ ಪೂಜೆ ಸಲ್ಲಿಸಿ, ಬಬಲೇಶ್ವರದ ನೀರಾವರಿ ಇಲಾಖೆ ಕಚೇರಿಗೆ ತೆರಳಿ, ಚುನಾವಣಾಧಿಕಾರಿಗೆ ನಾಮಪತ್ರ ಸಲ್ಲಿಸಿದರು.
ಇನ್ನು ಬಬಲೇಶ್ವರ ಮತಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಶಾಸಕ ಎಂ.ಬಿ. ಪಾಟೀಲ, ಇಲ್ಲಿನ ಗುರುಪಾದೇಶ್ವರ ಬಹನ್ಮಠಕ್ಕೆ ತೆರಳಿ ಪೂಜೆ ಸಲ್ಲಿಸಿ ನಾಮಪತ್ರ ಸಲ್ಲಿಸಿದರು.
ನಾಮಪತ್ರ ಸಲ್ಲಿಕೆಗೆ ಮಧ್ಯಾಹ್ನ 3 ಗಂಟೆಯ ಗಡುವು ಇದ್ದಿದ್ದರಿಂದ ಯಾತ್ರೆಯಲ್ಲಿ ಪಾಲ್ಗೊಳ್ಳದೆ, ನೇರವಾಗಿ ಚುನಾವಣೆ ಅಧಿಕಾರಿಗಳ ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಸಿದರು.
ಇಂಡಿ ಮತಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ, ಶಾಸಕ ಯಶವಂತರಾಯಗೌಡ ಪಾಟೀಲ ಪಟ್ಟಣದ ಬೀರಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಿ, ನಾಮಪತ್ರ ಸಲ್ಲಿಸಿದರು.
ಲಿಂಬೆ ನಾಡಿನ ಶಾಸಕ ಯಶವಂತರಾಯಗೌಡ ಪಾಟೀಲ ತಮ್ಮ ಅಪಾರ ಬೆಂಬಲಿಗರೊಂದಿಗೆ ಮೆರವಣಿಗೆ ಮೂಲಕ ಪಟ್ಟಣದ ಮಿನಿ ವಿಧಾನಸೌಧದಲ್ಲಿನ ಚುನಾವಣೆ ಅಧಿಕಾರಿ ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಸಿದರು. ಮೆರವಣಿಗೆಯುದ್ದಕ್ಕೂ ಶಾಸಕ ಯಶವಂತರಾಯಗೌಡ ಪಾಟೀಲ ಕೈಯಲ್ಲಿ ಲಿಂಬೆ ಹಣ್ಣು ಹಿಡಿದಿರುವುದು ಗಮನ ಸೆಳೆಯಿತು.
ಇನ್ನು ನಾಗಠಾಣ ಮೀಸಲು ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ವಿಠ್ಠಲ ಕಟಕಧೋಂಡ, ಜೆಡಿಎಸ್ ಅಭ್ಯರ್ಥಿಯಾಗಿ ದೇವಾನಂದ ಚವ್ಹಾಣ ಕುಟುಂಬ ಸಮೇತ ಆಗಮಿಸಿ, ನಗರದ ಜಿಪಂ ಕಚೇರಿ ಬಳಿಯ ಚುನಾವಣಾ ಅಧಿಕಾರಿಗೆ ನಾಮಪತ್ರ ಸಲ್ಲಿಸಿದರು.
ವಿಜಯಪುರ ನಗರ ಮತಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಬ್ದುಲ್ ಹಮೀದ್ ಮುಶ್ರೀಫ್, ಮುದ್ದೇಬಿಹಾಳ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಎ.ಎಸ್. ಪಾಟೀಲ ನಡಹಳ್ಳಿ, ಕಾಂಗ್ರೆಸ್ ಅಭ್ಯರ್ಥಿಯಾಗಿ ಸಿ.ಎಸ್. ನಾಡಗೌಡ, ಬಸವನಬಾಗೇವಾಡಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಎಸ್.ಕೆ. ಬೆಳ್ಳುಬ್ಬಿ ಸೇರಿದಂತೆ ಹಲವು ಪಕ್ಷದ ಮುಖಂಡರು ನಾಮಪತ್ರ ಸಲ್ಲಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!