ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜೇಂದ್ರಪುರ ಗೇಟ್ ಬಳಿ ರಾಜ್ಯ ಹೆದ್ದಾರಿ 33ರಲ್ಲಿ ಚಲಿಸುತ್ತಿದ್ದ ಕಾರಿನ ಟೈಯರ್ ಇದ್ದಕ್ಕಿದ್ದಂತೆ ಸ್ಪೋಟಗೊಂಡು ಮರಕ್ಕೆ ಡಿಕ್ಕಿ ಹೊಡೆದು ಓರ್ವ ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ.
ತುಮಕೂರು ಜಿಲ್ಲೆ ಕುಣಿಗಲ್ ತಾಲೂಕಿನ ರಾಜೇಂದ್ರಪುರ ಗೇಟ್ ಬಳಿ ಅಪಘಾತ ಸಂಭವಿಸಿದೆ. ತುಮಕೂರಿನಲ್ಲಿ ಮದುವೆ ಮುಗಿಸಿ ಕಾರಿನಲ್ಲಿ ಮಂಡ್ಯಕ್ಕೆ ತೆರಳುತ್ತಿದ್ದ ಆಕರ್ಷ್ (28) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಅಪಘಾತದ ಪರಿಣಾಮವಾಗಿ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಗೊಂಡ ಮೂವರನ್ನು ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ.
ಆಕರ್ಷ್ ಅವರ ದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ಕಳುಹಿಸಲಾಗಿದೆ. ಹುಲಿಯೂರುದುರ್ಗ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.