ಹೊಸದಿಗಂತ ವರದಿ ಬೆಳಗಾವಿ:
ಕಬ್ಬಿನ ದರ ನಿಗದಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬೆಳಗಾವಿ ಜಿಲ್ಲೆಯಲ್ಲಿ ರೈತರ ಹೋರಾಟ ತೀವ್ರಗೊಂಡಿದೆ. ಮಂಗಳವಾರ ಜಿಲ್ಲೆಯ ಹತ್ತರಗಿ ಹಾಗೂ ಹಿರೇಬಾಗೇವಾಡಿ ಟೋಲ್ಗೇಟ್ಗಳ ಬಳಿ ರೈತರು ಪ್ರತಿಭಟನೆ ನಡೆಸಿ, ಪುಣೆ–ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರ ತಡೆದರು ಆಕ್ರೋಶ ಹೋರ ಹಾಕಿದರು.

ಹತ್ತರಗಿ ಟೋಲ್ಗೇಟ್ ಬಳಿ ರೈತರು ಟ್ರ್ಯಾಕ್ಟರ್ಗಳನ್ನು ಹೆದ್ದಾರಿಯಲ್ಲಿ ಅಡ್ಡಲಾಗಿ ನಿಲ್ಲಿಸಿ ಸಂಚಾರಕ್ಕೆ ಅಡ್ಡಿಪಡಿಸಿದರು. ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದ ಪ್ರತಿಭಟನಾಕಾರರು, ಕೇಂದ್ರ ಸಚಿವ ಪ್ರಹ್ಲಾದ ಜೋಶಿ ವಿರುದ್ಧವೂ ಆಕ್ರೋಶ ವ್ಯಕ್ತಪಡಿಸಿದರು. ಕೆಲ ರೈತರು ರಸ್ತೆಯ ಮೇಲೆಯೇ ಮಲಗಿ ಸರ್ಕಾರದ ವಿರುದ್ಧ ಅಸಮಾಧಾನ ಹೊರಹಾಕಿದರು.

ಇನ್ನು, ಹಿರೇಬಾಗೇವಾಡಿ ಟೋಲ್ಗೇಟ್ ಬಳಿಯೂ ರೈತರ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿತು. ಕಬ್ಬಿಗೆ ಸೂಕ್ತ ಬೆಲೆ ನಿಗದಿಪಡಿಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿದ ರೈತರು, ಪೊರಕೆ ಹಿಡಿದು ಪ್ರತಿಭಟನೆ ನಡೆಸಿದರು. ಎರಡೂ ಕಡೆ ರಸ್ತೆ ತಡೆ ನಡೆದಿದ್ದರಿಂದ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರ ಅಸ್ತವ್ಯಸ್ತಗೊಂಡು ಪ್ರಯಾಣಿಕರು ಹಾಗೂ ವಾಹನ ಸವಾರರು ಪರದಾಡುವಂತಾಯಿತು.
ಸಂಚಾರಕ್ಕೆ ಅವಕಾಶ ನೀಡಿ: ಎಸ್ಪಿ ಮನವಿ:
ಹತ್ತರಗಿ ಟೋಲ್ಗೇಟ್ಗೆ ಭೇಟಿ ನೀಡಿ ಪರಿಸ್ಥಿತಿ ಪರಿಶೀಲಿಸಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ರಾಮರಾಜನ್, ರೈತರ ನ್ಯಾಯಯುತ ಬೇಡಿಕೆಗಳಿಗೆ ಪೊಲೀಸರ ಸಹಕಾರವಿದೆ. ಆದರೆ, ಹೆದ್ದಾರಿ ಸಂಚಾರ ಸ್ಥಗಿತದಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ. ಆದ್ದರಿಂದ ಪ್ರತಿಭಟನೆಯನ್ನು ಶೀಘ್ರ ಅಂತ್ಯಗೊಳಿಸಿ ವಾಹನಗಳ ಸುಗಮ ಸಂಚಾರಕ್ಕೆ ಅವಕಾಶ ಕಲ್ಪಿಸಬೇಕು ಎಂದು ಮನವಿ ಮಾಡಿದರು.

ಹಿಂದಿನ ರೈತರ ಹೋರಾಟದ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದಿತ್ತು. ಈ ಬಾರಿ ಅಂತಹ ಅಹಿತಕರ ಘಟನೆಗಳು ಮರುಕಳಿಸದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ. ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಪೊಲೀಸರು ಸನ್ನದ್ಧರಾಗಿದ್ದು, ರೈತರು ಸಹಕರಿಸುವ ವಿಶ್ವಾಸವಿದೆ ಎಂದು ತಿಳಿಸಿದರು.
ಇದನ್ನೂ ಓದಿ:
ಬೇಡಿಕೆ ಈಡೇರಿಕೆಗೆ ಪಟ್ಟು:
ಕಬ್ಬಿಗೆ ಸೂಕ್ತ ಬೆಲೆ ನಿಗದಿಪಡಿಸುವುದು ಹಾಗೂ ರೈತರ ವಿವಿಧ ಬೇಡಿಕೆಗಳನ್ನು ಈಡೇರಿಸುವವರೆಗೆ ಹೋರಾಟ ಮುಂದುವರಿಸುವ ನಿಲುವನ್ನು ಪ್ರತಿಭಟನಾಕಾರರು ವ್ಯಕ್ತಪಡಿಸಿದ್ದಾರೆ. ರೈತರ ಬೇಡಿಕೆಗಳಿಗೆ ಸರ್ಕಾರ ಯಾವ ರೀತಿ ಸ್ಪಂದಿಸಲಿದೆ ಎಂಬುದು ಕುತೂಹಲ ಮೂಡಿಸಿದೆ.



