ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಬಲ ಬೆಲೆ ನಿಗದಿಗೆ ಆಗ್ರಹಿಸಿ ಕಬ್ಬು ಬೆಳೆಗಾರರು ನಡೆಸುತ್ತಿರುವ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು, ಇಂದು 8ನೇ ದಿನಕ್ಕೆ ಕಾಲಿಟ್ಟಿದೆ.
ಪ್ರತಿ ಟನ್ ಕಬ್ಬಿಗೆ 3,500 ರೂಪಾಯಿ ನಿಗದಿಮಾಡಬೇಕೆಂದು ಪಟ್ಟು ಹಿಡಿದಿರುವ ಕಬ್ಬು ಬೆಳೆಗಾರರು, ಬೆಳಗಾವಿ ಜಿಲ್ಲೆ ಮೂಡಲಗಿ ತಾಲೂಕಿನ ಗುರ್ಲಾಪುರದಲ್ಲಿ ಕಳೆದ ಒಂದು ವಾರದಿಂದ ಪ್ರತಿಭಟನೆ ನಡೆಸುತ್ತಿದ್ದು, ಇಂದು 8 ನೇ ದಿನಕ್ಕೆ ಕಾಲಿಟ್ಟಿದೆ.
ಬೆಳಗಾವಿ ಜಿಲ್ಲೆಯ ಅಥಣಿ, ರಾಯಬಾಗ, ಬೆಳಗಾವಿ ಸೇರಿದಂತೆ ಎಲ್ಲಾ ಕಡೆಯೂ ಹೋರಾಟ ನಡೆಯುತ್ತಿದೆ. ರೈತರ ಕಿಚ್ಚು ಹೆಚ್ಚಾಗುತ್ತಿದ್ದಂತೆಯೇ ಎಚ್ಚೆತ್ತುಕೊಂಡಿರುವ ಸರ್ಕಾರ, ಹಿರಿಯ ಸಚಿವ ಹೆಚ್.ಕೆ ಪಾಟೀಲ್‌ರನ್ನು ನಿನ್ನೆ ಸಂಧಾನಕ್ಕೆ ಕಳುಹಿಸಿದ್ದು ಮಾತುಕತೆ ವಿಫಲವಾಗಿದೆ.
ಸಂಧಾನ ವಿಫಲ ಆಗುತ್ತಿದ್ದಂತೆಯೇ ಸಚಿವರು ಕಾರು ಹತ್ತಿ ವಾಪಸ್ ಆಗುತ್ತಿದ್ದಾಗ ಅವರ ಕಾರಿನ ಮುಂದೆ ಮಲಗಿ, ಕಾರಿಗೆ ಗುದ್ದಿ ರೈತರು ಆಕ್ರೋಶ ಹೊರಹಾಕಿದ್ದಾರೆ. ಬೇಕೇ ಬೇಕು ನ್ಯಾಯ ಬೇಕು ಎಂದು ಸರ್ಕಾರದ ವಿರುದ್ಧ ಘೋಷಣೆ ಕೂಗಿದ್ದಾರೆ. ಸಚಿವರ ಕಾರಿಗೆ ಮುತ್ತಿಗೆ ಹಾಕಿದ ರೈತರನ್ನು ಪೊಲೀಸರು ಎಳೆದು ಹಾಕುತ್ತಿದ್ದಂತೆಯೇ ತಳ್ಳಾಟ, ನೂಕಾಟವಾಯಿತು.

