ಆತ್ಮಹತ್ಯೆ ಪ್ರಕರಣ: ಪತಿಯೇ ಪತ್ನಿಯನ್ನು ಹತ್ಯೆಗೈದಿರುವುದು ಮರಣೋತ್ತರ ಪರೀಕ್ಷೆಯಲ್ಲಿ ಸಾಬೀತು

ಹೊಸದಿಗಂತ , ಹಾಸನ:

ಪತಿಯೇ ಪತ್ನಿಯನ್ನು ಕೊಂದು ಆತ್ಮಹತ್ಯೆ ಎಂದು ಬಿಂಬಿಸಿದ್ದ ಪ್ರಕರಣವು ಮರಣೋತ್ತರ ಪರೀಕ್ಷೆ ವರದಿಯಲ್ಲಿ ಇದು ಹತ್ಯೆ ಎಂದು ಸಾಬೀತಾಗಿರುವ ಘಟನೆ ಹಾಸನ ಜಿಲ್ಲೆಯ ಅರಸೀಕೆರೆ ತಾಲ್ಲೂಕಿನ ಗೊಲ್ಲರಹಟ್ಟಿ ಗ್ರಾಮದಲ್ಲಿ ನಡೆದಿದೆ.

ಮಾ.14 ರಂದು ಮನೆಯಲ್ಲಿಯೇ ನೇಣುಬಿಗಿದುಕೊಂಡ ಸ್ಥಿತಿಯಲ್ಲಿ ಚೈತ್ರಾ ಶವ ಪತ್ತೆಯಾಗಿತ್ತು. ಮಾ.15 ರಂದು ಚೈತ್ರಾ ಅಂತ್ಯಕ್ರಿಯೆನೆರವೇರಿತ್ತು. ಕುಡಿತದ ದಾಸನಾಗಿದ್ದ ಚೈತ್ರಾ ಪತಿ ಶಂಕರಲಿಂಗಪ್ಪ ಮದ್ಯ ಸೇವಿಸಲು ಸಂಘಗಳಲ್ಲಿ, ಬ್ಯಾಂಕ್‌ಗಳಲ್ಲಿ ಸಾಲ ಮಾಡಿಕೊಂಡಿದ್ದನು. ಸಾಲ ತೀರಿಸುವ ವಿಚಾರಕ್ಕಾಗಿ ಪತಿ-ಪತ್ನಿ ನಡುವೆ ಜಗಳ ನಡೆಯುತ್ತಿತ್ತು. ಇದರಿಂದ ಬೇಸರ ಮಾಡಿಕೊಂಡು ನೇಣಿಗೆ ಶರಣಾಗಿದ್ದಾಳೆ ಎಂದು ಸಂಬಂಧಿಕರು ಭಾವಿಸಿದ್ದರು.

ಚೈತ್ರಾಳ ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದ ಚಿಕ್ಕಪ್ಪ ಜಯಣ್ಣ ಅರಸೀಕೆರೆ ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಪೋಲಿಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದರು. ಮರಣೋತ್ತರ ಪರೀಕ್ಷೆ ವರದಿಯಲ್ಲಿ ಚೈತ್ರಾಳನ್ನು ಉಸಿರುಗಟ್ಟಿಸಿ ಕೊಲೆ ಮಾಡಿರುವುದಾಗಿ ಬೆಳಕಿಗೆ ಬಂದಿದೆ.

ಪೊಲೀಸರು ಕೂಡಲೇ ಚೈತ್ರಾಳ ಪತಿ ಶಂಕರಲಿಂಗಪ್ಪ ಎಂಬಾತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ ವೇಳೆ ಕೊಲೆ ರಹಸ್ಯ ಬಯಲಾಗಿದೆ. ಹನ್ನೆರಡು ವರ್ಷಗಳ ಹಿಂದೆ ಚೈತ್ರಾಳನ್ನು ಶಂಕರಲಿಂಗಪ್ಪ ಮದುವೆಯಾಗಿದ್ದ. ಶಂಕರಲಿಂಗಪ್ಪ ಮಾ.14 ರ ಸಂಜೆ ಕಂಠಪೂರ್ತಿ ಕುಡಿದು ಬಂದು ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಪತ್ನಿ ಕುತ್ತಿಗೆ ಬಿಗಿದು ಉಸಿರುಗಟ್ಟಿಸಿ ಹತ್ಯೆಗೈದು, ಯಾರಿಗೂ ಗೊತ್ತಾಗಬಾರದೆಂದು ಆಕೆಯ ಸೀರೆಯಿಂದ ನೇಣು ಹಾಕಿ, ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಬಿಂಬಿಸಿದ್ದಾನೆ. ಅರಸೀಕೆರೆ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೋಲಿಸರು ಆರೋಪಿ ಶಂಕರಲಿಂಗಪ್ಪ ವಿರುದ್ಧ ಕ್ರಮ ಕೈಗೊಂಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!