ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಾರುಕಟ್ಟೆಯಲ್ಲಿ ಬೆಲೆ ಕುಸಿತದಿಂದ ಕಂಗಾಲಾಗಿದ್ದ ರಾಜ್ಯದ ಕಡಲೆ ಬೆಳೆಗಾರರ ಹಿತರಕ್ಷಣೆಗಾಗಿ ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರ ವಿಶೇಷ ಆಸಕ್ತಿ ಹಾಗೂ ಮನವಿಯ ಮೇರೆಗೆ, ಕರ್ನಾಟಕದಿಂದ 1,01,340 ಮೆಟ್ರಿಕ್ ಟನ್ ಕಡಲೆಯನ್ನು ಬೆಂಬಲ ಬೆಲೆ ಯೋಜನೆಯಡಿ ಖರೀದಿಸಲು ಕೇಂದ್ರ ಕೃಷಿ ಸಚಿವಾಲಯ ಅನುಮೋದನೆ ನೀಡಿದೆ.
ರಾಜ್ಯದಲ್ಲಿ ಸುಮಾರು 9.24 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಕಡಲೆ ಬೆಳೆಯಲಾಗುತ್ತಿದ್ದು, ಪ್ರಸ್ತುತ ಮಾರುಕಟ್ಟೆ ದರವು ಸರ್ಕಾರ ನಿಗದಿಪಡಿಸಿದ ಬೆಂಬಲ ಬೆಲೆಗಿಂತಲೂ ಕುಸಿದಿದೆ. ಇದರಿಂದ ರೈತರು ಅನುಭವಿಸುತ್ತಿರುವ ಸಂಕಷ್ಟವನ್ನು ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರ ಗಮನಕ್ಕೆ ತಂದಿದ್ದ ಪ್ರಹ್ಲಾದ್ ಜೋಶಿ ಅವರು, ಕೂಡಲೇ ಖರೀದಿ ಪ್ರಕ್ರಿಯೆ ಆರಂಭಿಸುವಂತೆ ಪತ್ರ ಬರೆದಿದ್ದರು. ಈ ಮನವಿಗೆ ತಕ್ಷಣ ಸ್ಪಂದಿಸಿರುವ ಚೌಹಾಣ್ ಅವರು, ಖರೀದಿ ಪ್ರಕ್ರಿಯೆಗೆ ಅನುಮತಿ ನೀಡಿ ಜೋಶಿ ಅವರಿಗೆ ಪತ್ರ ಬರೆದಿದ್ದಾರೆ.
ನಿಗದಿತ ದರ: ಪ್ರತಿ ಕ್ವಿಂಟಲ್ ಕಡಲೆಗೆ ₹5,875 ಬೆಂಬಲ ಬೆಲೆ ನಿಗದಿಪಡಿಸಲಾಗಿದೆ.
ಒಟ್ಟು ಗುರಿ: ಹಿಂಗಾರು ಹಂಗಾಮಿನ ಒಟ್ಟು 1,01,340 ಮೆಟ್ರಿಕ್ ಟನ್ ಕಡಲೆ ಖರೀದಿ.
ಮಾರುಕಟ್ಟೆಯಲ್ಲಿನ ಬೆಲೆ ಏರಿಳಿತದಿಂದ ರೈತರಿಗೆ ಉಂಟಾಗುತ್ತಿದ್ದ ನಷ್ಟಕ್ಕೆ ಈ ನಿರ್ಧಾರದಿಂದ ಬ್ರೇಕ್ ಬೀಳಲಿದೆ. ಮುಂದಿನ ದಿನಗಳಲ್ಲಿ ಕಡಲೆ ಬೆಲೆ ಮತ್ತಷ್ಟು ಕುಸಿಯುವ ಆತಂಕವಿದ್ದ ಸಂದರ್ಭದಲ್ಲಿ ಕೇಂದ್ರದ ಈ ನಿರ್ಧಾರವು ರಾಜ್ಯದ ಲಕ್ಷಾಂತರ ರೈತರಿಗೆ ಆರ್ಥಿಕ ಭದ್ರತೆ ನೀಡಿದಂತಾಗಿದೆ.


