ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
……………………………………………………………………
ಹೊಸದಿಗಂತ ಆನ್ ಲೈನ್ ಡೆಸ್ಕ್:
ರಾಷ್ಟ್ರ ರಾಜಧಾನಿಗೆ ಆಮ್ಲಜನಕ ಪೂರೈಕೆ ವಿಚಾರವಾಗಿ ನ್ಯಾಯಾಂಗ ನಿಂದನೆ ನೋಟಿಸ್ ನೀಡಿರುವ ದೆಹಲಿ ಹೈಕೋರ್ಟ್ ನಡೆಯನ್ನು ಪ್ರಶ್ನಿಸಿ ಕೇಂದ್ರ ಸರ್ಕಾರ ಸಲ್ಲಿಸಿದ ಅರ್ಜಿಯನ್ನು ಕೈಗೆತ್ತಿಕೊಳ್ಳಲು ಸುಪ್ರೀಂಕೋರ್ಟ್ ಒಪ್ಪಿಗೆ ನೀಡಿದೆ.
ಈ ಸಂಬಂಧ ಸ್ವಯಂ ಪ್ರೇರಿತ ಪ್ರಕರಣಗಳ ವಿಚಾರಣೆ ನಡೆಸುವ ನ್ಯಾಯಮೂರ್ತಿ ಜೆ.ಚಂದ್ರಚೂಡ್ ಅವರು ಬುಧವಾರ ಲಭ್ಯವಿಲ್ಲದ ಕಾರಣ ಕೇಂದ್ರದ ಪರ ಸಾಲಿಟರ್ ಜನರಲ್ ತುಷಾರ್ ಮೆಹ್ತಾ ಅವರು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಎನ್.ವಿ.ರಮಣ ನೇತೃತ್ವದ ಪೀಠದ ಮೊರೆ ಹೋದರು.
ಆದರೆ ಈ ಪ್ರಕರಣವನ್ನು ಜೆ.ಚಂದ್ರಚೂಡ್ ನೇತೃತ್ವದ ಪೀಠವೇ ವಿಚಾರಣೆ ನಡೆಸಬೇಕು ಎಂದು ನ್ಯಾಯಮೂರ್ತಿ ಎನ್.ವಿ ರಮಣ ಅವರು ಸೂಚಿಸಿದರು.
ಕೇಂದ್ರ ಸರ್ಕಾರವು ಮೇ 3ರೊಳಗೆ ದೆಹಲಿಯಲ್ಲಿ ಆಮ್ಲಜನಕ ಕೊರತೆಯಿಂದ ಉಂಟಾಗಿರುವ ಪರಿಸ್ಥಿತಿಯನ್ನು ನಿಭಾಯಿಸಬೇಕು ಎಂದು ಏಪ್ರಿಲ್ 30ರಂದು ಸುಪ್ರೀಂಕೋರ್ಟ್ ನಿರ್ದೇಶನ ನೀಡಿತ್ತು. ಆದರೆ ಈ ನಿರ್ದೇಶನವನ್ನು ಕೇಂದ್ರ ಪಾಲಿಸಲಿಲ್ಲ ಎಂಬ ಕಾರಣಕ್ಕೆ ದೆಹಲಿ ಹೈಕೋರ್ಟ್ ನ್ಯಾಯಾಂಗ ನಿಂದನೆ ನೋಟಿಸ್ ಜಾರಿ ಮಾಡಿತ್ತು.