ಸುಪ್ರೀಂ ನಿರ್ದೇಶನದಂತೆ ಹಿಂದುಳಿದ ವರ್ಗಗಳಿಗೆ ರಾಜಕೀಯ ಮೀಸಲಾತಿ ನೀಡಲು ಪ್ರತ್ಯೇಕ ಆಯೋಗ ರಚನೆಗೆ ಆಗ್ರಹ

ಹೊಸದಿಗಂತ ಡಿಜಿಟಲ್ ಡೆಸ್ಕ್

ಬೆಂಗಳೂರು: ಸ್ಥಳೀಯ ಸಂಘ ಸಂಸ್ಥೆಗಳಲ್ಲಿ ಹಿಂದುಳಿದ ವರ್ಗಗಳಿಗೆ ರಾಜಕೀಯ ಮೀಸಲಾತಿ ನೀಡಲೇಬೇಕು. ಮುಂಬರುವ ಸ್ಥಳೀಯ ಸಂಸ್ಥೆ ಚುನಾವಣೆಗಳ ಮೊದಲು ಸರಕಾರ ಹಿಂದುಳಿದ ವರ್ಗಗಳಿಗೆ ರಾಜಕೀಯ ಮೀಸಲಾತಿಯನ್ನು ಜಾರಿಗೊಳಿಸಬೇಕು ಎಂದು ಕರ್ನಾಟಕ ರಾಜ್ಯ ಅತಿ ಹಿಂದುಳಿದ ವರ್ಗಗಳ ಜಾಗೃತ ವೇದಿಕೆಯ ಅಧ್ಯಕ್ಷ ಎಂ.ಸಿ. ವೇಣುಗೋಪಾಲ್ ಆಗ್ರಹಿಸಿದ್ದಾರೆ.

ಬೆಂಗಳೂರಿನ ಶಾಸಕರ ಭವನದ ಸಭಾಂಗಣದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈಗಾಗಲೇ ಒರಿಸ್ಸಾ ಮತ್ತು ತಮಿಳುನಾಡು ರಾಜ್ಯಗಳಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಹಿಂದುಳಿದ ವರ್ಗಗಳಿಗೆ ರಾಜಕೀಯ ಮೀಸಲಾತಿ ನೀಡದೇ ಚುನಾವಣೆಗಳನ್ನು ನಡೆಸಲಾಗಿದೆ. ಅದೇ ರೀತಿ ಕರ್ನಾಟಕದಲ್ಲಿ ಆಗಬಾರದು. ಚುನಾವಣೆಗೆ ಮುನ್ನವೇ ಮೀಸಲಾತಿಯನ್ನು ಜಾರಿಗೊಳಿಸಬೇಕು. ಹಿಂದುಳಿದ ವರ್ಗಗಳಿಗೆ ಆಗುತ್ತಿರುವ ಅನ್ಯಾಯವನ್ನು ಸರಿಪಡಿಸಬೇಕು ಹಾಗೂ ಸರ್ವೋಚ್ಚ ನ್ಯಾಯಾಲಯದ ನಿರ್ದೇಶನದಂತೆ ಹಿಂದುಳಿದ ವರ್ಗಗಳಿಗೆ ರಾಜಕೀಯ ಮೀಸಲಾತಿಯನ್ನು ನೀಡಲು ಪ್ರತ್ಯೇಕವಾದ ಆಯೋಗವನ್ನು ರಚಿಸಬೇಕು ಎಂದು ಒತ್ತಾಯಿಸಿದ್ದಾರೆ.

ಈಗಾಗಲೇ ಕರ್ನಾಟಕ ರಾಜ್ಯ ಅತಿ ಹಿಂದುಳಿದ ವರ್ಗಗಳ ಜಾಗೃತ ವೇದಿಕೆಯು ಪ್ರಮುಖ ಐದು ಬೇಡಿಕೆಗಳನ್ನು ಈಡೇರಿಸಬೇಕು ಎಂದು ಸರಕಾರ ಮತ್ತು ಸಂಬಂಧ ಪಟ್ಟ ಇಲಾಖೆಗಳಿಗೆ ಮನವಿ ಸಲ್ಲಿಸಿದೆ. ಮುಖ್ಯವಾಗಿ ಸ್ಥಳೀಯ ಸಂಘ ಸಂಸ್ಥೆಗಳಲ್ಲಿ ಹಿಂದುಳಿದ ವರ್ಗಗಳಿಗೆ ರಾಜಕೀಯ ಮೀಸಲಾತಿ, ಪಂಚಮಸಾಲಿ ಸಮುದಾಯವನ್ನು ಪ್ರವರ್ಗ-2ಎಗೆ ಸೇರಿಸಬಾರದು. ಎಚ್. ಕಾಂತರಾಜು ವರದಿಯನ್ನು ಜಾರಿಗೊಳಿಸಬೇಕು. ಸುಭಾಷ್ ಆಡಿ ಸಮಿತಿಯನ್ನು ರದ್ದುಗೊಳಿಸಬೇಕು, ಕೇಂದ್ರ ಸರಕಾರದ ಹಿಂದುಳಿದ ವರ್ಗಗಳ ಮೀಸಲಾತಿ ಪಟ್ಟಿಗೆ ಕರ್ನಾಟಕದ 73 ಜಾತಿ – ಉಪಜಾತಿಗಳನ್ನು ಸೇರಿಸಬೇಕು ಎಂಬುದರ ಬಗ್ಗೆ ಈಗಾಗಲೇ ಮುಖ್ಯಮಂತ್ರಿಗಳು, ರಾಜ್ಯಪಾಲರು, ಗ್ರಾಮೀಣಾಭಿವೃದ್ಧಿ ಸಚಿವರು, ಕರ್ನಾಟಕ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಿಗೆ ಮನವಿ ಸಲ್ಲಿಸಲಾಗಿದೆ ಎಂದ ಅವರು, ನಮ್ಮ ಬೇಡಿಕೆಗಳನ್ನು ಈಡೇರಿಸುವುದಾಗಿ ಭರವಸೆ ನೀಡಿದ್ದಾರೆ. ಆದರೆ ಇಲ್ಲಿಯವರೆಗೆ ಯಾವುದೇ ಸಮರ್ಪಕವಾದ ಉತ್ತರ ಸಿಕ್ಕಿಲ್ಲ. ಒಂದು ವೇಳೆ ನಮ್ಮ ಬೇಡಿಕೆಗಳನ್ನು ಈಡೇರಿಸದೇ ಇದ್ದರೆ ಮುಂದಿನ ದಿನಗಳಲ್ಲಿ ಕಾನೂನು ಹೋರಾಟ ನಡೆಸುವುದರ ಜೊತೆಗೆ ರಾಜ್ಯಾದ್ಯಂತ ಉಗ್ರ ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದರು.

ಇದೇ ವೇಳೆ ವಸತಿ ಸೌಲಭ್ಯದಿಂದ ವಂಚಿತರಾದ ಅತಿ ಹಿಂದುಳಿದ ವರ್ಗಗಳಿಗೆ ವಸತಿ ಸೌಕರ್ಯಗಳನ್ನು ಕಲ್ಪಿಸುವಂತೆ ವಸತಿ ಸಚಿವ ವಿ. ಸೋಮಣ್ಣ ಅವರಿಗೆ ಮನವಿ ಕೂಡ ಸಲ್ಲಿಸಲಾಗುವುದು ಎಂದು ಎಂ.ಸಿ. ವೇಣುಗೋಪಾಲ್ ತಿಳಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!