ಹೊಸದಿಗಂತ ಡಿಜಿಟಲ್ ಡೆಸ್ಕ್:
ಮೋದಿ ಉಪನಾಮ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಸೂರತ್ ಕೋರ್ಟ್ ವಿಧಿಸಿರುವ ಶಿಕ್ಷೆಗೆ ಶುಕ್ರವಾರ ಸುಪ್ರೀಂ ಕೋರ್ಟ್ ತಡೆ ನೀಡಿದ್ದು , ‘ಇದು ದ್ವೇಷದ ವಿರುದ್ಧ ಪ್ರೀತಿಯ ಗೆಲುವು, ಸತ್ಯಮೇವ ಜಯತೆ – ಜೈ ಹಿಂದ್’ ಎಂದು ಕಾಂಗ್ರೆಸ್ ಟ್ವೀಟ್ ಮಾಡಿದೆ.
ಇನ್ನು ರಾಹುಲ್ ಗಾಂಧಿ ಪ್ರಕರಣಕ್ಕೆ ಸುಪ್ರೀಂ ಕೋರ್ಟ್ ತಡೆ ನೀಡಿರುವುದನ್ನು ಸ್ವಾಗತಿಸುತ್ತೇವೆ. ನಮಗೆ ನ್ಯಾಯ ಸಿಕ್ಕಿದೆ, ಪ್ರಜಾಪ್ರಭುತ್ವಕ್ಕೆ ಗೆಲುವಾಗಿದ್ದು, ಸಂವಿಧಾನವನ್ನು ಎತ್ತಿಹಿಡಿಯಲಾಗಿದೆ. ಈ ಪ್ರಕರಣದಲ್ಲಿ ಬಿಜೆಪಿ ಪಿತೂರಿ ಸಂಪೂರ್ಣವಾಗಿ ಬಯಲಾಗಿದೆ. ಅವರಿಗೆ, ವಿರೋಧ ಪಕ್ಷಗಳ ನಾಯಕರನ್ನು ದುರುದ್ದೇಶಪೂರ್ವಕವಾಗಿ ಗುರಿಯಾಗಿಸುವುದನ್ನು ನಿಲ್ಲಿಸುವ ಸಮಯ ಬಂದಿದೆ ಎಂದು ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಟ್ವೀಟ್ ಮಾಡಿದ್ದಾರೆ.
ಮೋದಿ ಉಪನಾಮ ಬಗ್ಗೆ ತಾವು ನೀಡಿದ ಹೇಳಿಕೆಗೆ ಸಂಬಂಧ ಗುಜರಾತ್‌ನ ಸೂರತ್ ನ್ಯಾಯಾಲಯ ವಿಧಿಸಿರುವ ಶಿಕ್ಷೆಯನ್ನು ರದ್ದು ಮಾಡಲು ನಿರಾಕರಿಸಿದ್ದ ಗುಜರಾತ್ ಹೈಕೋರ್ಟ್ ತೀರ್ಪಿನ ವಿರುದ್ಧ ರಾಹುಲ್ ಗಾಂಧಿ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು.