ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಾಬರಿ ಮಸೀದಿ ಧ್ವಂಸವಾಗಿ 30 ವರ್ಷಗಳ ನಂತರ ಘಟನೆಯ ಎಲ್ಲಾ ಪ್ರಕರಣಗಳಿಗೂ ಸುಪ್ರೀಂಕೋರ್ಟ್ ಫುಲ್ ಸ್ಟಾಪ್ ಇಟ್ಟಿದೆ. 1992 ರ ಬಾಬರಿ ಮಸೀದಿ ಧ್ವಂಸದ ಎಲ್ಲಾ ಪ್ರಕರಣಗಳಿಗೆ ಸುಪ್ರೀಂ ಕೋರ್ಟ್ ಮಂಗಳವಾರ ತೆರೆ ಎಳೆದಿದೆ. ಉತ್ತರ ಪ್ರದೇಶ ಸರ್ಕಾರ ಮತ್ತು ಇತರ ಅಧಿಕಾರಿಗಳ ವಿರುದ್ಧ ಸಲ್ಲಿಸಲಾಗಿದ್ದ ಎಲ್ಲ ನ್ಯಾಯಾಂಗ ನಿಂದನೆ ಅರ್ಜಿಗಳನ್ನು ಸುಪ್ರೀಂ ಕೋರ್ಟ್ ರದ್ದು ಮಾಡಿದೆ. ಅಯೋಧ್ಯೆಯ ರಾಮಜನ್ಮಭೂಮಿ-ಬಾಬರಿ ಮಸೀದಿ ಭೂ ವಿವಾದದ ಕುರಿತು ಸುಪ್ರೀಂ ಕೋರ್ಟ್ 2019 ರ ತೀರ್ಪನ್ನು ಗಮನದಲ್ಲಿಟ್ಟುಕೊಂಡು, ನ್ಯಾಯಾಂಗ ನಿಂದನೆ ಪ್ರಕರಣಗಳನ್ನು ಮುಂದುವರಿಸಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ.
ಬಾಬರಿ ಮಸೀದಿ ಧ್ವಂಸ ಪ್ರಕರಣ ಡಿಸೆಂಬರ್ 6, 1992 ರಂದು ದಾಖಲಾಗಿತ್ತು. ಈ ಪ್ರಕರಣದಲ್ಲಿ 1,026 ಸಾಕ್ಷಿಗಳು ಮತ್ತು 49 ಆರೋಪಿಗಳನ್ನು ದಾಖಲಿಸಲಾಗಿದೆ. ಈ ಪೈಕಿ ಇದುವರೆಗೆ 17 ಮಂದಿ ಸಾವನ್ನಪ್ಪಿದ್ದಾರೆ. ಹಾಗಾಗಿ ಉಳಿದ 32 ಆರೋಪಿಗಳ ವಿರುದ್ಧ ನ್ಯಾಯಾಲಯ ತೀರ್ಪು ಪ್ರಕಟಿಸಿದೆ. ಅಯೋಧ್ಯೆಯಲ್ಲಿ ಬಾಬರಿ ಮಸೀದಿ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ಯುಪಿ ಮಾಜಿ ಸಿಎಂ, ಬಿಜೆಪಿ ಹಿರಿಯ ನಾಯಕ ಕಲ್ಯಾಣ್ ಮತ್ತು ಇತರರ ವಿರುದ್ಧ ದಾಖಲಾಗಿದ್ದ ನ್ಯಾಯಾಂಗ ನಿಂದನೆ ಪ್ರಕರಣವನ್ನು ಸುಪ್ರೀಂ ಕೋರ್ಟ್ ಮುಕ್ತಾಯಗೊಳಿಸಿದೆ.
ಅರ್ಜಿದಾರ ಕಲ್ಯಾಣ್ ಸಿಂಗ್ ಅವರ ಸಾವನ್ನು ಉಲ್ಲೇಖಿಸಿ, ಬಾಬರಿ ಮಸೀದಿ ಧ್ವಂಸ ಪ್ರಕರಣದಲ್ಲಿ ದಿವಂಗತ ನಾಯಕನ ವಿರುದ್ಧದ ನ್ಯಾಯಾಂಗ ನಿಂದನೆ ಪ್ರಕರಣವನ್ನು ಸುಪ್ರೀಂ ಕೋರ್ಟ್ ಎತ್ತಿಹಾಕಿದೆ. ಈಗಾಗಲೇ ಈ ವಿಷಯದ ಬಗ್ಗೆ ದೊಡ್ಡ ಪೀಠವು ತೀರ್ಪು ನೀಡಿದೆ ಈ ವಿಚಾರದ ಬಗ್ಗೆ ಚರ್ಚೆ ನಡೆಸಲು ಈಗ ಏನೂ ಉಳಿದಿಲ್ಲ ಎಂದು ನ್ಯಾಯಾಲಯ ಹೇಳಿದೆ.