ರಾಜ್ಯ ಸರ್ಕಾರ, ಡಿಕೆ ಶಿವಕುಮಾರ್​ಗೆ ಸುಪ್ರೀಂಕೋರ್ಟ್​ ನೋಟಿಸ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಅಕ್ರಮ ಆಸ್ತಿ ಗಳಿಕೆ ಆರೋಪಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಸಿಬಿಐ ತನಿಖೆಗೆ ನೀಡಿದ್ದ ಅನುಮತಿಯನ್ನು ಹಿಂಪಡೆದಿದ್ದ ಕಾಂಗ್ರೆಸ್ ಸರ್ಕಾರದ ಕ್ರಮವನ್ನು ಪ್ರಶ್ನಿಸಿ ಸಿಬಿಐ ಸಲ್ಲಿಸಿದ್ದ ಅರ್ಜಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಹಾಗೂ ಶಿವಕುಮಾರ್‌ಗೆ ಸುಪ್ರೀಂಕೋರ್ಟ್ ಶುಕ್ರವಾರ ಪ್ರತಿಕ್ರಿಯೆ ಕೋರಿ ನೋಟಿಸ್ ಜಾರಿ ಮಾಡಿದೆ.

ನ್ಯಾಯಮೂರ್ತಿಗಳಾದ ಸೂರ್ಯಕಾಂತ್ ಮತ್ತು ಉಜ್ಜಲ್ ಭುಯಾನ್ ಅವರಿದ್ದ ಪೀಠವು ಸೋಮವಾರ ಅರ್ಜಿಯ ವಿಚಾರಣೆ ನಡೆಸಿ ನೋಟಿಸ್ ಜಾರಿ ಮಾಡಿ ಆದೇಶಿಸಿದೆ.

ಅಕ್ರಮ ಆಸ್ತಿ ಗಳಿಕೆಗೆ ಸಂಬಂಧಿಸಿದಂತೆ ತನಿಖೆ ನಡೆಸುವಂತೆ 2019ರಲ್ಲಿ ಆಡಳಿತದಲ್ಲಿದ್ದ ಬಿಜೆಪಿ ಸರ್ಕಾರ ಸಿಬಿಐ ತನಿಖೆಗೆ ಅನುಮತಿ ನೀಡಿತ್ತು. 2023ರ ನ. 23ರಂದು ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಸಿಬಿಐಗೆ ನೀಡಿದ್ದ ತನಿಖಾ ಅನುಮತಿಯನ್ನು ಹಿಂಪಡೆದಿತ್ತು.

ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ಸಿಬಿಐ ಹಾಗೂ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಅವರು ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು. ಆದರೆ ಕರ್ನಾಟಕ ಹೈಕೋರ್ಟ್ ಈ ಅರ್ಜಿಗಳನ್ನು ತಮ್ಮ ವ್ಯಾಪ್ತಿಗೆ ಬರಲ್ಲ ಎಂದು ವಜಾಗೊಳಿಸಿತ್ತು. ನಂತರ ಯತ್ನಾಳ್, ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್‌ಗೆ ಮೇಲ್ಮನವಿ ಅರ್ಜಿ ಸಲ್ಲಿಸಿದ್ದರು. ಈ ಸಂಬಂಧ ಸೆ. 17ರಂದು ಇದೇ ಪೀಠವು ರಾಜ್ಯ ಸರ್ಕಾರ ಹಾಗೂ ಡಿ.ಕೆ. ಶಿವಕುಮಾರ್‌ಗೆ ನೋಟಿಸ್ ಜಾರಿ ಮಾಡಿತ್ತು.

 

- Advertisement - Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!