June 8, 2026
Monday, June 8, 2026
spot_img

ನಟ ದರ್ಶನ್ ಗೆ ಜಾಮೀನು ನೀಡಲು ‘ಸುಪ್ರೀಂ’ ನಿರಾಕರಣೆ: ಇನ್ನೂ ಒಂದು ವರ್ಷ ಜೈಲೇ ಗತಿ!

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲಿನಲ್ಲಿರುವ ನಟ ದರ್ಶನ್ ಗೆ ಸುಪ್ರೀಂಕೋರ್ಟ್‌ನಲ್ಲಿ ಭಾರೀ ಹಿನ್ನಡೆಯಾಗಿದ್ದು, ಇನ್ನೂ ಒಂದು ವರ್ಷಗಳ ಕಾಲ ಜೈಲಿನಲ್ಲಿಯೇ ಕಳೆಯಬೇಕಾದ ಅನಿವಾರ್ಯತೆ ಎದುರಾಗಿದೆ.

ಸುಪ್ರೀಂಕೋರ್ಟ್ ನ ನ್ಯಾ. ಪರ್ದಿವಾಲಾ ಮತ್ತು ನ್ಯಾ. ವಿಜಯ್ ಬಿಷ್ನೋಯಿ ಅವರ ಪೀಠವು ಇಂದು ಜಾಮೀನು ಅರ್ಜಿಯ ವಿಚಾರಣೆ ನಡೆಸಿತು. ಈ ವೇಳೆ ಒಂದು ವರ್ಷದೊಳಗೆ ವಿಚಾರಣೆಯನ್ನು ಪೂರ್ಣಗೊಳಿಸುವಂತೆ ಸೂಚಿಸಿದೆ.

ಪ್ರಕರಣದಲ್ಲಿ ಒಟ್ಟು 272 ಸಾಕ್ಷಿಗಳಿದ್ದು, ಕೇವಲ 10 ಸಾಕ್ಷಿಗಳ ವಿಚಾರಣೆ ಮಾತ್ರ ನಡೆದಿದೆ ಎಂದು ತಿಳಿದ ನ್ಯಾಯಪೀಠವು ಅಸಮಾಧಾನ ವ್ಯಕ್ತಪಡಿಸಿತು. ವಿಚಾರಣೆ ತುಂಬಾ ನಿಧಾನಗತಿಯಲ್ಲಿ ಸಾಗುತ್ತಿದ್ದು, ಹೀಗೆ ಮುಂದುವರಿದರೆ ತುಂಬಾ ಸಮಯ ಬೇಕಾಗುತ್ತದೆ. ಹೀಗಾಗಿ ಮುಂದಿನ ವರ್ಷ ಮೇ 15ರ ಒಳಗಾಗಿ ಪ್ರಕರಣದ ಸಂಪೂರ್ಣ ವಿಚಾರಣೆಯನ್ನು ಮುಗಿಸಬೇಕು. ಈ ನಿಟ್ಟಿನಲ್ಲಿ ಪ್ರತಿದಿನ ವಿಚಾರಣೆ ನಡೆಸಬೇಕು ಎಂದು ಸೂಚನೆ ನೀಡಿದೆ.

ಒಂದು ವೇಳೆ ಒಂದು ವರ್ಷದ ಅವಧಿಯಲ್ಲಿ ವಿಚಾರಣೆ ಪೂರ್ಣವಾಗದಿದ್ದರೆ, ಅರ್ಜಿದಾರರು ಮತ್ತೆ ಜಾಮೀನಿಗಾಗಿ ಅರ್ಜಿ ಸಲ್ಲಿಸಬಹುದು ಎಂದ ಕೋರ್ಟ್, ದರ್ಶನ್ ಗೆ ಜೈಲಿನಲ್ಲಿ ಅಗತ್ಯವಿರುವ ಮೂಲ ಸೌಕರ್ಯಗಳನ್ನು ಒದಗಿಸುವಂತೆ ಜೈಲು ಅಧೀಕ್ಷಕರಿಗೆ ಸೂಚನೆ ನೀಡಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !