ಹೊಸದಿಗಂತ ಡಿಜಿಟಲ್ ಡೆಸ್ಕ್:
ಕರ್ನಲ್ ಸೋಫಿಯಾ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ವಿಜಯ್ ಶಾರನ್ನು ಸುಪ್ರೀಂ ಕೋರ್ಟ್ ತರಾಟೆಗೆ ತೆಗೆದುಕೊಂಡಿದೆ.
ಹೇಳಿಕೆ ಸಂಬಂಧ ವಿಚಾರಣೆ ನಡೆಸಿದ್ದ ಜಬ್ಬಲ್ಪುರ ಹೈಕೋರ್ಟ್ ಸಚಿವ ವಿಜಯ್ ಶಾ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಆದೇಶಿಸಿತ್ತು. ಈ ಆದೇಶದ ಬೆನ್ನಲ್ಲೇ ವಿಜಯ್ ಶಾ, ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದರು. ಈ ಕುರಿತು ವಿಚಾರಣೆ ನಡೆಸಿದ ಕೋರ್ಟ್ ಕಳವಳ ವ್ಯಕ್ತಪಡಿಸಿದ್ದು, ಈ ರೀತಿ ಹೇಳಿಕೆಗಳನ್ನು ನೀಡುವಾಗ ಎಚ್ಚರವಿರಲಿ ಎಂದಿದೆ.
ಭಾಷಣದಲ್ಲಿ, ಭಯೋತ್ಪಾದಕರು ನಮ್ಮ ಸಹೋದರಿಯರು ಮತ್ತು ಹೆಣ್ಣುಮಕ್ಕಳ ಸಿಂದೂರವನ್ನು ಅಳಿಸಿದ್ದರು. ಆ ಉಗ್ರರಿಗೆ ಪಾಠ ಕಲಿಸಲು ಅವರ ಸಹೋದರಿಯನ್ನು ನಾವು ಕಳುಹಿಸಿದ್ದೇವೆ ಎಂದು ಹೇಳಿದ್ದರು. ಭಾಷಣದಲ್ಲಿ ವಿಜಯ್ ಶಾ ಮುಸ್ಲಿಂ ಸಮುದಾಯಕ್ಕೆ ಸೇರಿದ ಉಗ್ರರನ್ನು ಸದೆ ಬಡಿಯಲು ಮುಸ್ಲಿಂ ಸಮುದಾಯಕ್ಕೆ ಸೇರಿದ ಕರ್ನಲ್ ಸೋಫಿಯಾ ಖುರೇಷಿ ಅವರ ಹೆಸರನ್ನು ಸ್ಪಷ್ಟವಾಗಿ ಹೇಳದೇ ಇದ್ದರೂ ಅವರನ್ನು ಉಲ್ಲೇಖಿಸಿಯೇ ಭಾಷಣ ಮಾಡಿದ್ದು ವ್ಯಾಪಕ ಟೀಕೆಗೆ ಗುರಿಯಾಗಿತ್ತು. ಬಳಿಕ ಜಬ್ಬಲ್ಪುರ ಹೈಕೋರ್ಟ್ ಇದನ್ನು ಅಶ್ಲೀಲ ಭಾಷೆ ಎಂದು ಪರಿಗಣಿಸಿತ್ತು.