Thursday, January 29, 2026
Thursday, January 29, 2026
spot_img

UGC ಹೊರಡಿಸಿದ ಹೊಸ ನಿಯಮಾವಳಿಗೆ ಸುಪ್ರೀಂ ಕೋರ್ಟ್‌ ತಡೆ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಜಾತಿ ಆಧಾರಿತ ತಾರತಮ್ಯ ತಡೆಯುವುದಕ್ಕಾಗಿ ವಿಶ್ವವಿದ್ಯಾಲಯ ಧನಸಹಾಯ ಆಯೋಗ (UGC) ಹೊರಡಿಸಿರುವ ನಿಯಮಾವಳಿಗಳಿಗೆ ಸುಪ್ರೀಂ ಕೋರ್ಟ್‌ ತಾತ್ಕಾಲಿಕ ತಡೆ ನೀಡಿದೆ.

ನಿಯಮಾವಳಿ ವಿರುದ್ಧ ಸಾಮಾನ್ಯ ವರ್ಗದ ವಿದ್ಯಾರ್ಥಿಗಳಿಂದ ವ್ಯಾಪಕ ಪ್ರತಿಭಟನೆ ನಡೆಸಿದ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್‌ ಈ ಕ್ರಮ ಕೈಗೊಂಡಿದೆ.

ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್, ನ್ಯಾಯಮೂರ್ತಿ ಜೊಯಮಲ್ಯ ಬಾಗ್ಚಿ ಅವರಿದ್ದ ಪೀಠವು, ಇದು ಸಂಪೂರ್ಣ ಅಸ್ಪಷ್ಟತೆಯಿಂದ ಕೂಡಿದೆ ಎಂದು ಹೇಳಿದೆ.

ವಿಶ್ವವಿದ್ಯಾನಿಲಯಗಳ ವ್ಯಾಪ್ತಿಯ ಕಾಲೇಜು ಕ್ಯಾಂಪಸ್‌ಗಳಲ್ಲಿ ಜಾತಿ ಆಧಾರಿತ ತಾರತಮ್ಯ ತಡೆಯುವುದಕ್ಕಾಗಿ ವಿಶ್ವವಿದ್ಯಾನಿಲಯ ಧನಸಹಾಯ ಆಯೋಗ ಹೊರಡಿಸಿರುವ ನಿಯಮಾವಳಿಯಲ್ಲಿ ದೂರು ನೀಡಲು ಸಾಮಾನ್ಯ ವರ್ಗದ ವಿದ್ಯಾರ್ಥಿಗಳಿಗೆ ಅವಕಾಶ ನೀಡದೆ ಇರುವುದನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್‌ ವಿಚಾರಣೆ ನಡೆಸಿತು.

ನಿಯಮಗಳನ್ನು ದುರುಪಯೋಗಪಡಿಸಿಕೊಳ್ಳಬಹುದು ಎಂದು ಆತಂಕ ವ್ಯಕ್ತಪಡಿಸಿ ಕೇಂದ್ರ ಮತ್ತು ಯುಜಿಸಿಗೆ ನೋಟಿಸ್ ಸಹ ನೀಡಿದೆ. ಪ್ರಕರಣದ ಮುಂದಿನ ವಿಚಾರಣೆಯನ್ನು ಮಾರ್ಚ್ 19ಕ್ಕೆ ನಿಗದಿಪಡಿಸಿದೆ.

ನಿಯಮಾವಳಿ ಏನು ಹೇಳುತ್ತೆ?

ಧರ್ಮ, ಜಾತಿ, ಲಿಂಗ, ಜನ್ಮಸ್ಥಳ, ಅಂಗವೈಕಲ್ಯತೆ ಅಥವಾ ಇವುಗಳ ಆಧಾರದ ಮೇಲೆ ನಡೆಯುವ ಭೇದಭಾವವನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡುವುದು, ವಿಶೇಷವಾಗಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳು, ಸಾಮಾಜಿಕ ಮತ್ತು ಶೈಕ್ಷಣಿಕವಾಗಿ ಹಿಂದುಳಿದ ವರ್ಗಗಳು, ಆರ್ಥಿಕವಾಗಿ ಹಿಂದುಳಿದ ವರ್ಗಗಳು, ಅಂಗವೈಕಲ್ಯ ಹೊಂದಿರುವವರು ಅಥವಾ ಇವರಲ್ಲಿ ಯಾರ ಮೇಲಾದರೂ ನಡೆಯುವ ಭೇದಭಾವವನ್ನು ತೊಡೆದುಹಾಕಿ, ಉನ್ನತ ಶಿಕ್ಷಣ ಸಂಸ್ಥೆಗಳ ಎಲ್ಲರ ನಡುವೆ ಸಂಪೂರ್ಣ ಸಮಾನತೆಯನ್ನು ಜಾರಿಗೆ ತರುವ ಗುರಿ ಹೊಂದಲಾಗಿದೆ ಎಂದು ತಿಳಿಸಲಾಗಿದೆ.

ಹಿಂದುಳಿದ ವರ್ಗಗಳಿಗಾಗಿ ರೂಪಿಸಲಾದ ನೀತಿಗಳು ಮತ್ತು ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುವ ಸಲುವಾಗಿ, ಉನ್ನತ ಶಿಕ್ಷಣ ಸಂಸ್ಥೆಗಳು ಸಮಾನ ಅವಕಾಶ ಕೇಂದ್ರಗಳು ಹಾಗೂ ಸಮಾನತಾ ಸಮಿತಿಗಳನ್ನು ಸ್ಥಾಪಿಸಬೇಕು ಮತ್ತು ಭೇದಭಾವ ಸಂಬಂಧಿತ ದೂರುಗಳನ್ನು ಪರಿಶೀಲಿಸಬೇಕು ಎಂದು ಸೂಚಿಸಲಾಗಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !