ಇಶಾ ಫೌಂಡೇಶನ್ ವಿರುದ್ಧ ಪೊಲೀಸರ ಕ್ರಮಕ್ಕೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಸದ್ಗುರು ಜಗ್ಗಿ ವಾಸುದೇವ್ ಅವರ ಇಶಾ ಫೌಂಡೇಶನ್ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣಗಳ ಕುರಿತು ಯಾವುದೇ ಕ್ರಮ ಕೈಗೊಳ್ಳದಂತೆ ತಮಿಳುನಾಡು ಪೊಲೀಸರಿಗೆ ಸುಪ್ರೀಂ ಕೋರ್ಟ್ ಗುರುವಾರ ತಡೆಯಾಜ್ಞೆ ನೀಡಿದೆ.

ತನ್ನ ವಿರುದ್ಧ ದಾಖಲಾದ ಎಲ್ಲಾ ಪ್ರಕರಣಗಳ ವಿವರಗಳನ್ನು ಸಂಗ್ರಹಿಸುವಂತೆ ಕೊಯಮತ್ತೂರು ಪೊಲೀಸರಿಗೆ ನಿರ್ದೇಶನ ನೀಡಿದ ಮದ್ರಾಸ್ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಇಶಾ ಫೌಂಡೇಶನ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್‌, ಮುಂದೆ ಯಾವುದೇ ಕ್ರಮ ಕೈಗೊಳ್ಳದಂತೆ ತಮಿಳುನಾಡು ಪೊಲೀಸರಿಗೆ ಸೂಚಿಸಿದೆ.

ಜೊತೆಗೆ ಇಶಾ ಫೌಂಡೇಶನ್‌ನಲ್ಲಿರುವ ತಮ್ಮ ಇಬ್ಬರು ಪುತ್ರಿಯರನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲು ಪೊಲೀಸರಿಗೆ ನಿರ್ದೇಶನ ನೀಡುವಂತೆ ಕೋರಿ ಡಾ ಎಸ್ ಕಾಮರಾಜ್ ಅವರು ಸಲ್ಲಿಸಿದ್ದ ಹೇಬಿಯಸ್ ಕಾರ್ಪಸ್ ಅರ್ಜಿಯನ್ನು ತನಗೆ ವರ್ಗಾಯಿಸುವಂತೆ ಸುಪ್ರೀಂ ಕೋರ್ಟ್, ಮದ್ರಾಸ್ ಹೈಕೋರ್ಟ್ ಗೆ ಸೂಚಿಸಿದೆ.

ಸುಪ್ರೀಂ ಕೋರ್ಟ್​​ನ ಮುಖ್ಯ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್ ನೇತೃತ್ವದ ತ್ರಿಸದಸ್ಯ ಪೀಠವು ಮದ್ರಾಸ್ ಹೈಕೋರ್ಟ್​ ಆದೇಶಕ್ಕೆ ತಡೆ ನೀಡಿ ಆದೇಶ ಹೊರಡಿಸಿದೆ.

ಮದ್ರಾಸ್ ಹೈಕೋರ್ಟ್ ನೀಡಿದ ನಿರ್ದೇಶನಗಳನ್ನು ಅನುಸರಿಸಿ ತಮಿಳುನಾಡು ಪೊಲೀಸರು ಇಶಾ ಫೌಂಡೇಶನ್‌ ಮೇಲೆ ದಾಳಿ ನಡೆಸಿದ್ದರು.

ಇಶಾ ಫೌಂಡೇಶನ್ ಪರವಾಗಿ ವಾದ ಮಂಡಿಸಿದ ಹಿರಿಯ ವಕೀಲ ಮುಕುಲ್ ರೋಹಟಗಿ, ಹೈಕೋರ್ಟ್ ಆದೇಶಕ್ಕೆ ತಡೆ ಕೋರಿದರು ಮತ್ತು ಸುಮಾರು 500 ಪೊಲೀಸ್ ಅಧಿಕಾರಿಗಳು ಪ್ರತಿಷ್ಠಾನದ ಆಶ್ರಮದ ಮೇಲೆ ದಾಳಿ ನಡೆಸಿದ್ದಾರೆ ಮತ್ತು ಪ್ರತಿ ಮೂಲೆಮೂಲೆಯಲ್ಲೂ ಶೋಧ ನಡೆಸುತ್ತಿದ್ದಾರೆ ಎಂದು ಹೇಳಿದರು.

 

- Advertisement - Skool Shine
Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!