Friday, October 31, 2025

ಜಮ್ಮು ಕಾಶ್ಮೀರಕ್ಕೆ ಮರಳಿ ರಾಜ್ಯದ ಸ್ಥಾನಮಾನ: ಸುಪ್ರೀಂ ಕೋರ್ಟ್ಆ ಗಸ್ಟ್ 8 ರಂದು ಅರ್ಜಿ ವಿಚಾರಣೆ

ಹೊಸದಿಗಂತ ಡಿಜಿಟಲ್ ಡೆಸ್ಕ್: 

ಸುಪ್ರೀಂ ಕೋರ್ಟ್ ಆಗಸ್ಟ್ 8ರಂದು ಜಮ್ಮು ಕಾಶ್ಮೀರಕ್ಕೆ ಮರಳಿ ರಾಜ್ಯದ ಸ್ಥಾನಮಾನ ದೊರಕಿಸಿಕೊಡುವಂತೆ ಕೋರಿರುವ ಅರ್ಜಿಗಳ ವಿಚಾರಣೆಯನ್ನು ನಡೆಸಲಿದೆ.

ಹಿರಿಯ ವಕೀಲ ಗೋಪಾಲ್ ಶಂಕರನಾರಾಯಣನ್ ಅವರು ಇಂದು ಸಿಜೆಐ ಬಿಆರ್ ಗವಾಯಿ ಅವರ ನೇತೃತ್ವದ ಪೀಠದೆದುರು ಪ್ರಕರಣವನ್ನು ಪ್ರಸ್ತಾಪಿಸಿದ್ದು ಅರ್ಜಿಯನ್ನು ವಿಚಾರಣೆಗೆ ಪಟ್ಟಿ ಮಾಡಲು ಸುಪ್ರೀಂ ಕೋರ್ಟ್ ಸಮ್ಮತಿಸಿದೆ.

ರಾಜ್ಯದ ಸ್ಥಾನಮಾನ ಮರುಸ್ಥಾಪಿಸದೇ ಇರುವುದರಿಂದ ಕಾಶ್ಮೀರದ ಜನರ ಹಕ್ಕುಗಳ ಮೇಲೆ ಗಂಭೀರ ಪರಿಣಾಮ ಉಂಟಾಗುತ್ತಿದೆ ಎಂದು ಕಾಲೇಜು ಅಧ್ಯಾಪಕ ಜಹೂರ್ ಅಹ್ಮದ್ ಭಟ್ ಅರ್ಜಿ ಸಲ್ಲಿಸಿದ್ದರು. ಕಳೆದ ವರ್ಷ ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಈ ಅರ್ಜಿಯನ್ನು ಸಲ್ಲಿಸಲಾಗಿತ್ತು.

ಕಾಂಗ್ರೆಸ್ ಮತ್ತು ವಿಧಾನಸಭೆಯ ಕೆಲವು ಸ್ವತಂತ್ರ ಸದಸ್ಯರ ಬೆಂಬಲದೊಂದಿಗೆ ನ್ಯಾಷನಲ್‌ ಕಾನ್ಫರೆನ್ಸ್‌ ನೇತೃತ್ವದ ಸರ್ಕಾರ ಪ್ರಸ್ತುತ ಕಾಶ್ಮೀರದಲ್ಲಿ ಅಧಿಕಾರ ನಡೆಸುತ್ತಿದೆ. ರಾಜ್ಯಕ್ಕೆ ವಿಶೇಷ ಸ್ಥಾನಮಾನ ನೀಡಿದ್ದ ಸಂವಿಧಾನದ 370ನೇ ವಿಧಿ ಕೆಲ ವರ್ಷಗಳ ಹಿಂದೆ ರದ್ದಾಗಿ ಜಮ್ಮು ಮತ್ತು ಕಾಶ್ಮೀರ ರಾಜ್ಯವನ್ನು ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ರೂಪಿಸಲಾಗಿತ್ತು. ಅದೇ ರಾಜ್ಯದಿಂದ ಲಡಾಖ್‌ ಪ್ರದೇಶವನ್ನು ಮತ್ತೊಂದು ಕೇಂದ್ರಾಡಳಿತ ಪ್ರದೇಶ ಎಂದು ಘೋಷಿಸಲಾಗಿತ್ತು.

ಆರ್ಟಿಕಲ್ 370 ರದ್ದತಿ ಎತ್ತಿಹಿಡಿದು ಡಿಸೆಂಬರ್ 2023ರಲ್ಲಿ ತಾನು ನೀಡಿದ್ದ ತೀರ್ಪನ್ನು ಮರುಪರಿಶೀಲಿಸಲು ಕೋರಿದ್ದ ಅರ್ಜಿಗಳನ್ನು ಸುಪ್ರೀಂ ಕೋರ್ಟ್‌ ಮೇ 2024ರಲ್ಲಿ ವಜಾಗೊಳಿಸಿತ್ತು.

ಜಮ್ಮು ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನ ತಾತ್ಕಾಲಿಕವಾದುದಾಗಿತ್ತು. ಈ ಪ್ರದೇಶಕ್ಕೆ ಮರಳಿ ರಾಜ್ಯದ ಸ್ಥಾನಮಾನ ನೀಡಲಾಗುವುದು ಎಂದಿದ್ದ ಭಾರತದ ಸಾಲಿಸಿಟರ್ ಜನರಲ್ (ಎಸ್‌ಜಿ) ತುಷಾರ್ ಮೆಹ್ತಾ ಅವರ ಹೇಳಿಕೆಯನ್ನು ನ್ಯಾಯಾಲಯ ಆಗ ದಾಖಲಿಸಿಕೊಂಡಿತ್ತು.

error: Content is protected !!