Saturday, February 4, 2023

Latest Posts

ಸುರತ್ಕಲ್‌ ಕೊಲೆ ಪ್ರಕರಣ | ಆರೋಪಿಗಳ ಶೀಘ್ರ ಬಂಧನ: ಸಿಎಂ ಬೊಮ್ಮಾಯಿ

ಹೊಸದಿಗಂತ ವರದಿ,ಮಂಗಳೂರು:

ಸುರತ್ಕಲ್‌ನಲ್ಲಿ ಶನಿವಾರ ನಡೆದ ಜಲೀಲ್ ಕೊಲೆ ಪ್ರಕರಣದ ತನಿಖೆಯನ್ನು ಪೊಲೀಸರು ಕೈಗೆತ್ತಿಕೊಂಡಿದ್ದು, ಘಟನೆಯ ಪ್ರತ್ಯಕ್ಷ ಸಾಕ್ಷಿಗಳ ಹೇಳಿಕೆ ಆಧಾರದಲ್ಲಿ ಆರೋಪಿಗಳನ್ನು ಶೀಘ್ರ ಬಂಧಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ಈ ಘಟನೆ ಆಗಬಾರದಿತ್ತು. ಕೊಲೆ ನಡೆದಿರುವುದು ದುರದೃಷ್ಟಕರ. ಪ್ರಕರಣದ ಬಗ್ಗೆ ಪೊಲೀಸರು ಸೂಕ್ತ ಕ್ರಮ ಕೈಗೊಂಡಿದ್ದಾರೆ. ತನಿಖೆ ಪ್ರಗತಿಯಲ್ಲಿದೆ. ಆರೋಪಿಗಳನ್ನು ಶೀಘ್ರ ಬಂಧಿಸಿ, ವಿಚಾರಣೆಗೆ ಒಳಪಡಿಸಲಾಗುವುದು. ಬಳಿಕ ಘಟನೆಯ ಕಾರಣ, ಹಿನ್ನೆಲೆ ತಿಳಿಯಲಿದೆ ಎಂದರು.

ದಕ್ಷಿಣ ಕನ್ನಡ ಜಿಲ್ಲೆ ಸಹಿತ ಕರಾವಳಿಯಾದ್ಯಂತ ಜನತೆ ಶಾಂತಿ ಕಾಪಾಡಿಕೊಳ್ಳಬೇಕು. ಯಾವುದೇ ಊಹಾಪೋಹಗಳಿಗೆ ಅವಕಾಶ ನೀಡಬಾರದು. ಪೊಲೀಸರು ಸ್ವತಂತ್ರವಾಗಿ ತನಿಖೆ ನಡೆಸುತ್ತಿದ್ದಾರೆ. ಈ ವೇಳೆ ಪೊಲೀಸರ ಮೇಲೆ ಯಾವುದೇ ಒತ್ತಡ ಹಾಕಬಾರದು ಎಂದು ಸಿಎಂ ಹೇಳಿದರು.

ಸಮಾಜದಲ್ಲಿ ಹಿಂಸೆ ಪ್ರಾರಂಭ ಮಾಡುವವರನ್ನು ಹತ್ತಿಕ್ಕುವ ಅವಶ್ಯಕತೆ ಇದೆ. ಹಿಂಸೆಗೆ ಪ್ರಚೋದನೆ ನೀಡುವವರನ್ನು ಹತ್ತಿಕ್ಕುವುದು ಸಮಾಜ ಹಾಗೂ ಸರಕಾರದ ಕರ್ತವ್ಯವಾಗಿದೆ. ಇಲ್ಲಿ ಕ್ರಿಯೆ ಪ್ರತಿಕ್ರಿಯೆ ಪ್ರಶ್ನೆ ಇಲ್ಲ. ಯಾರೇ ತಪ್ಪು ಮಾಡಿದ್ದರೂ ಅದು ತಪ್ಪೇ ಆಗಿದೆ. ಪೊಲೀಸರು ತನಿಖೆ ನಡೆಸುತ್ತಿದ್ದು, ತನಿಖೆಯಿಂದ ಸತ್ಯಾಸತ್ಯತೆ ಹೊರಬರುತ್ತದೆ ಎಂದು ಸಿಎಂ ಹೇಳಿದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!