Thursday, February 29, 2024

ಗ್ಯಾರಂಟಿಗಳು ತಲುಪಿರುವ ಕುರಿತು ಸಮೀಕ್ಷೆ ನಡೆಸಿ : ವಿನಯ್ ತಿಮ್ಮಾಪುರ

ಹೊಸ ದಿಗಂತ ವರದಿ, ಚಿತ್ರದುರ್ಗ:

ಕಾಂಗ್ರೆಸ್ ಸರ್ಕಾರದ ಐದು ಗ್ಯಾರೆಂಟಿಗಳು ಪ್ರತಿ ಮನೆಗೆ ತಲುಪಿದೆಯೋ ಇಲ್ಲವೋ ಎನ್ನುವುದನ್ನು ಸಮೀಕ್ಷೆ ನಡೆಸಿ ಎಂದು ಯುವ ಕಾಂಗ್ರೆಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲಾ ಉಸ್ತುವಾರಿ ವಿನಯ್ ತಿಮ್ಮಾಪುರ ಯೂತ್ ಕಾಂಗ್ರೆಸ್ ಕಾರ್ಯಕರ್ತರಿಗೆ ಸೂಚಿಸಿದರು.

ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯಿಂದ ಕಾಂಗ್ರೆಸ್ ಕಚೇರಿಯಲ್ಲಿ ಗುರುವಾರ ನಡೆದ ಯುವ ಸಹಾಯ ಹಸ್ತ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ತಳಮಟ್ಟದಿಂದ ಯೂತ್ ಕಾಂಗ್ರೆಸ್‌ನ್ನು ಸಂಘಟಿಸಬೇಕಿದೆ. ದೇಶಕ್ಕೆ ಕಾಂಗ್ರೆಸ್ ಕೊಡುಗೆ ಅಪಾರ. ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್‌ರವರು ಸಂವಿಧಾನ ನೀಡಿರುವುದರಿಂದ ಎಲ್ಲರೂ ಸ್ವಾಭಿಮಾನದಿಂದ ಬದುಕುತ್ತಿದ್ದಾರೆ ಎಂದರು.

ದೇಶದಲ್ಲಿ ಜಾತಿ, ಧರ್ಮಗಳ ನಡುವೆ ಸಂಘರ್ಷ ಉಂಟಾಗುತ್ತಿದೆ. ಇದರಿಂದಾಗಿ ಯುವಕರಿಗೆ ಉದ್ಯೋಗವಿಲ್ಲದಂತಾಗಿದೆ. ಬೆಲೆ ಏರಿಕೆಯಿಂದ ಜನಸಾಮಾನ್ಯರು ತತ್ತರಿಸುತ್ತಿದ್ದಾರೆ. ಚಿತ್ರದುರ್ಗ ಲೋಕಸಭಾ ಕ್ಷೇತ್ರಕ್ಕೆ ನಾನು ಕೂಡ ಆಕಾಂಕ್ಷಿ. ಆದರೆ ಹೈಕಮಾಂಡ್ ಯಾರಿಗೆ ಟಿಕೇಟ್ ನೀಡುತ್ತದೋ ಅವರ ಪರವಾಗಿ ಯುವ ಕಾಂಗ್ರೆಸ್ ಕಾರ್ಯಕರ್ತರು ಪ್ರಾಮಾಣಿಕವಾಗಿ ಕೆಲಸ ಮಾಡುವಂತೆ ಮನವಿ ಮಾಡಿದರು.

ಜಿಲ್ಲಾ ಯುವ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಕಾರೇಹಳ್ಳಿ ಉಲ್ಲಾಸ್ ಮಾತನಾಡಿ, ನಲವತ್ತು ಪರ್ಸೆಂಟ್ ಕಮೀಷನ್ ಸರ್ಕಾರವನ್ನು ರಾಜ್ಯದ ಜನ ತೊಲಗಿಸಿ ಕಾಂಗ್ರೆಸ್ ಪಕ್ಷಕ್ಕೆ ಅಧಿಕಾರ ನೀಡಿದ್ದಾರೆ. ವಿಧಾನಸಭೆ ಚುನಾವಣೆ ಪೂರ್ವದಲ್ಲಿಯೇ ಸಿದ್ದರಾಮಯ್ಯನವರು ಪ್ರಣಾಳಿಕೆಯಲ್ಲಿ ಹೊರಡಿಸಿದಂತ ಐದು ಗ್ಯಾರೆಂಟಿಗಳನ್ನು ನೀಡಿದ್ದಾರೆ. ಇದರಿಂದ ಬಡವರಿಗೆ ದೀನ ದಲಿತರಿಗೆ ಅನುಕೂಲವಾಗಿದೆ ಎಂದರು.

ಇನ್ನೇನು ಮೂರ‍್ನಾಲ್ಕು ತಿಂಗಳುಗಳಲ್ಲಿ ಪಾರ್ಲಿಮೆಂಟ್ ಚುನಾವಣೆ ಎದುರಾಗಲಿದೆ. ಕಾಂಗ್ರೆಸ್ ಗ್ಯಾರೆಂಟಿ ಯೋಜನೆಗಳು ಪ್ರತಿ ಮನೆಗೆ ತಲುಪಿದೆಯೋ ಇಲ್ಲವೋ ಎನ್ನುವುದನ್ನು ವಿಚಾರಿಸಿ ಪಕ್ಷದ ಕಾರ್ಯಕ್ರಮಗಳನ್ನು ಫಲಾನುಭವಿಗಳಿಗೆ ಮುಟ್ಟಿಸುವ ಜವಾಬ್ದಾರಿ ಯೂತ್ ಕಾಂಗ್ರೆಸ್ ಕಾರ್ಯಕರ್ತರುಗಳ ಮೇಲಿದೆ ಎಂದು ಹೇಳಿದರು.

ಸೇವಾದಳದ ರಾಜ್ಯ ಉಪಾಧ್ಯಕ್ಷ ಪ್ರಕಾಶ್ ಮಾತನಾಡಿದರು.

ಜಿಲ್ಲಾ ಯುವ ಕಾಂಗ್ರೆಸ್ ಉಪಾಧ್ಯಕ್ಷ ವಸೀಂ ಮಾತನಾಡಿ, ಯುವ ಕಾಂಗ್ರೆಸ್ ಕಾರ್ಯಕರ್ತರು ಕಾಂಗ್ರೆಸ್ ಸರ್ಕಾರದ ಐದು ಗ್ಯಾರೆಂಟಿಗಳನ್ನು ಪ್ರತಿ ಮನೆ ಮನೆಗೆ ಮುಟ್ಟಿಸಬೇಕು. ವಾರ್ಡ್, ಬೂತ್‌ಗಳಲ್ಲಿ ಕಾರ್ಯಕರ್ತರು ಪಕ್ಷದ ಯೋಜನೆಗಳ ಬಗ್ಗೆ ತಿಳಿಸಿ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಗೆಲುವು ತಂದು ಕೊಡುವ ಹೊಣೆಗಾರಿಕೆ ನಿಮ್ಮ ಹೆಗಲ ಮೇಲಿದೆ ಎಂದು ತಿಳಿಸಿದರು.
ಯೂತ್ ಕಾಂಗ್ರೆಸ್ ಗ್ರಾಮಾಂತರ ಬ್ಲಾಕ್ ಅಧ್ಯಕ್ಷ ತಿಪ್ಪೇಸ್ವಾಮಿ, ಅಫೀಜ್, ಕಾಂಗ್ರೆಸ್ ಮೀನುಗಾರಿಕೆ ವಿಭಾಗದ ಅಧ್ಯಕ್ಷ ಶಶಿಕಿರಣ್ ವೇದಿಕೆಯಲ್ಲಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!