ಹೊಸದಿಗಂತ ಡಿಜಿಟಲ್ ಡೆಸ್ಕ್:
ಆಮ್ ಆದ್ಮಿ ಪಕ್ಷದ ರಾಜ್ಯಸಭಾ ಸದಸ್ಯೆ ಸ್ವಾತಿ ಮಾಲಿವಾಲ್ ಮೇಲಿನ ಹಲ್ಲೆ ಆರೋಪಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ಸಿಎಂ ಅರವಿಂದ ಕೇಜ್ರಿವಾಲ್ ಅವರ ಆಪ್ತ ಕಾರ್ಯದರ್ಶಿ ಬಿಭವ್ ಕುಮಾರ್ ಅವರು ನಿರೀಕ್ಷಣಾ ಜಾಮೀನು ಕೋರಿ ಇಂದು (ಶನಿವಾರ) ಕೋರ್ಟ್ ಮೆಟ್ಟಿಲೇರಿದ್ದಾರೆ.
ದೆಹಲಿಯ ತೀಸ್ ಹಜಾರಿ ನ್ಯಾಯಾಲಯದಲ್ಲಿ ಇಂದೇ ಬಿಭವ್ ಕುಮಾರ್ ಅವರ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ನಡೆಯಲಿದೆ.
ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ನಿವಾಸಕ್ಕೆ ತೆರಳಿದ್ದಾಗ, ಅವರ ಕಾರ್ಯದರ್ಶಿಯಾಗಿರುವ ಬಿಭವ್ ಕುಮಾರ್ ತಮ್ಮ ಜೊತೆಗೆ ಅನುಚಿತವಾಗಿ ವರ್ತಿಸಿದ್ದು, ದೈಹಿಕವಾಗಿ ಹಲ್ಲೆ ನಡೆಸಿದ್ದರು ಎಂದು ಸಂಸದೆ ಸ್ವಾತಿ ಮಾಲಿವಾಲ್ ಅವರು ಆರೋಪಿಸಿದ್ದರು.
ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್‌ಐಆರ್ ದಾಖಲಿಸಿಕೊಂಡಿರುವ ದೆಹಲಿ ಪೊಲೀಸರು, ಬಿಭವ್ ಕುಮಾರ್ ಅವರನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದ್ದಾರೆ. ಹೆಚ್ಚುವರಿ ಪೊಲೀಸ್ ಆಯುಕ್ತ ಪಿ.ಎಸ್.ಕುಶ್ವಾಹಾ ನೇತೃತ್ವದ ದೆಹಲಿ ಪೊಲೀಸರ ತಂಡವು ಗುರುವಾರ ಮಾಲಿವಾಲ್ ಅವರ ನಿವಾಸಕ್ಕೆ ಭೇಟಿ ನೀಡಿ ಮಾಲಿವಾಲ್ ಅವರಿಂದ ಮಾಹಿತಿ ಕಲೆಹಾಕಿತ್ತು.