June 29, 2026
Monday, June 29, 2026
spot_img

ಬೆಳಗಾವಿಯಲ್ಲಿ ಚಲಿಸುತ್ತಿದ್ದ ಸ್ವಿಫ್ಟ್ ಕಾರಿಗೆ ಬೆಂಕಿ: ಕ್ಷಣಾರ್ಧದಲ್ಲಿ ಭಸ್ಮ, ತಪ್ಪಿದ ದೊಡ್ಡ ದುರಂತ

ಹೊಸದಿಗಂತ ವರದಿ ಬೆಳಗಾವಿ:

ಕುಂದಾನಗರಿ ಬೆಳಗಾವಿಯ ರಾಮದೇವ್ ಹೋಟೆಲ್ ರಸ್ತೆಯಲ್ಲಿ ಚಲಿಸುತ್ತಿದ್ದ ಸ್ವಿಫ್ಟ್ ಕಾರಿನಲ್ಲಿ ದಿಢೀರ್ ಬೆಂಕಿ ಕಾಣಿಸಿಕೊಂಡು, ಕೆಲವೇ ನಿಮಿಷಗಳಲ್ಲಿ ಸಂಪೂರ್ಣ ಕಾರು ಸುಟ್ಟು ಕರಕಲಾದ ಘಟನೆ ನಡೆದಿದೆ.
ರಾಮದೇವ್ ಹೋಟೆಲ್ ಎದುರಿನ ಡಿ-ಮಾರ್ಟ್ ಕಾರ್ನರ್ ಕಡೆಗೆ ಸಾಗುವ ರಸ್ತೆಯಲ್ಲಿ ಈ ಅವಘಡ ಸಂಭವಿಸಿದೆ. ರಸ್ತೆ ಮಧ್ಯೆ ಸಾಗುತ್ತಿದ್ದ ವೇಳೆ ಕಾರಿನ ಎಂಜಿನ್ ಭಾಗದಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಕೇವಲ 10ರಿಂದ 15 ನಿಮಿಷಗಳಲ್ಲೇ ಕಾರು ಧಗಧಗನೆ ಹೊತ್ತಿ ಉರಿದು ಭಸ್ಮವಾಗಿದೆ.

ಕಾರು ಒಳಗಿನಿಂದ ಹೊಗೆ ಹಾಗೂ ಬೆಂಕಿ ಹೊರಬರುತ್ತಿರುವುದನ್ನು ಗಮನಿಸಿದ ಚಾಲಕ ಮತ್ತು ಪ್ರಯಾಣಿಕರು ಸಮಯಪ್ರಜ್ಞೆ ಮೆರೆದು ತಕ್ಷಣವೇ ವಾಹನವನ್ನು ರಸ್ತೆ ಬದಿಗೆ ನಿಲ್ಲಿಸಿ ಕೆಳಗಿಳಿದಿದ್ದಾರೆ. ಇದರಿಂದ ಸಂಭವಿಸಬಹುದಾಗಿದ್ದ ಭಾರೀ ಅನಾಹುತ ತಪ್ಪಿದ್ದು, ಕಾರಿನಲ್ಲಿದ್ದ ಎಲ್ಲರೂ ಯಾವುದೇ ಗಾಯಗಳಿಲ್ಲದೆ ಸುರಕ್ಷಿತವಾಗಿ ಪಾರಾಗಿದ್ದಾರೆ.

ಬೆಂಕಿಗೆ ಆಹುತಿಯಾದ ಮಾರುತಿ ಸುಝಕಿ ಕಾರು ಬೆಳಗಾವಿ ಪಾಸಿಂಗ್ ನೋಂದಣಿಯನ್ನು ಹೊಂದಿದೆ ಎಂದು ತಿಳಿದುಬಂದಿದೆ. ಪ್ರಾಥಮಿಕ ಮಾಹಿತಿಯ ಪ್ರಕಾರ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಕಾಣಿಸಿಕೊಂಡಿರಬಹುದು ಎಂದು ಶಂಕಿಸಲಾಗಿದ್ದು, ಘಟನೆಯ ನಿಖರ ಕಾರಣ ತನಿಖೆಯ ಬಳಿಕವೇ ತಿಳಿದುಬರಲಿದೆ.

ಘಟನೆಯ ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಸ್ಥಳೀಯ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಧಾವಿಸಿ ಬೆಂಕಿಯನ್ನು ನಂದಿಸಿದರು. ರಸ್ತೆ ಮಧ್ಯೆ ಕಾರು ಹೊತ್ತಿ ಉರಿದ ಪರಿಣಾಮ ಕೆಲಕಾಲ ಸಂಚಾರ ದಟ್ಟಣೆ ಉಂಟಾಗಿದ್ದು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಸ್ಥಳದಲ್ಲಿ ಜಮಾಯಿಸಿದ್ದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !