ಹೊಸ ದಿಗಂತ ವರದಿ, ಮಡಿಕೇರಿ:
ಕೆಲವು ಜಿಲ್ಲೆಗಳಲ್ಲಿ ಭ್ರೂಣ ಹತ್ಯೆ ಮಾಡುತ್ತಿರುವ ಬಗ್ಗೆ ಕೇಳಿ ಬರುತ್ತಿದ್ದು, ಭ್ರೂಣ ಹತ್ಯೆಯನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಕೊಡಗು ಜಿಲ್ಲೆಗೆ ಸಂಬಂಧಿಸಿದಂತೆ ವಿವಿಧ ಕಾರ್ಯಗಳ ಪ್ರಗತಿ ಹಾಗೂ ಅನುಷ್ಠಾನ ಸಂಬಂಧ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಸೋಮವಾರ ಅಪರಾಹ್ನ ನಡೆದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕೊಡಗು ಜಿಲ್ಲೆಯಲ್ಲಿ 29 ಸ್ಕ್ಯಾನಿಂಗ್ ಕೇಂದ್ರಗಳಿದ್ದು, ಸ್ಕ್ಯಾನಿಂಗ್ ಕೇಂದ್ರಗಳಿಗೆ ಆಗಾಗ ಭೇಟಿ ನೀಡಿ ತಪಾಸಣೆ ನಡೆಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.
ಕೊಡಗು ಜಿಲ್ಲೆಯಲ್ಲಿ ಕಳೆದ 21 ವರ್ಷದಲ್ಲಿ ಸ್ಕ್ಯಾನಿಂಗ್ ಕೇಂದ್ರಗಳ ಸಂಬಂಧ ಒಂದು ಪ್ರಕರಣವೂ ದಾಖಲಾಗಿಲ್ಲ. ಆ ನಿಟ್ಟಿನಲ್ಲಿ ಎಲ್ಲವೂ ಸರಿಯಿದೆಯೇ ಎಂಬ ಬಗ್ಗೆ ಆತ್ಮವಿಮರ್ಶೆ ಮಾಡಬೇಕಿದೆ ಎಂದು ಸಚಿವರು ಹೇಳಿದರು.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವೈದ್ಯಾಧಿಕಾರಿಗಳು ಸ್ಪ್ರಿಂಗ್ ಆಪರೇಷನ್ ಮೂಲಕ ಸ್ಕ್ಯಾನಿಂಗ್ ಕೇಂದ್ರಗಳ ಚಟುವಟಿಕೆ ಬಗ್ಗೆ ಹೆಚ್ಚಿನ ನಿಗಾವಹಿಸಬೇಕು. ಜೊತೆಗೆ ಸಾರ್ವಜನಿಕರಿಂದಲೂ ಅಭಿಪ್ರಾಯ ಪಡೆಯುವಂತಾಗಬೇಕು. ‘ಲಿಂಗ ಆಯ್ಕೆ ನಿಷೇಧ’ವನ್ನು ಕಟ್ಟುನಿಟ್ಟಾಗಿ ಜಾರಿ ಮಾಡಬೇಕು ಎಂದು ದಿನೇಶ್ ಗುಂಡೂರಾವ್ ಅವರು ನಿರ್ದೇಶನ ನೀಡಿದರು.
ಸ್ಕ್ಯಾನಿಂಗ್ ಕೇಂದ್ರಗಳು ಅಧಿಕೃತವಾಗಿ ನೋಂದಣಿಯಾಗಿರಬೇಕು. ಅನಧಿಕೃತ ಸ್ಕ್ಯಾನಿಂಗ್ ಕೇಂದ್ರಗಳು ನಡೆಯಬಾರದು ಎಂದು ಸಚಿವರು ಹೇಳಿದರು. ತಾಯಿ ಮತ್ತು ಶಿಶು ಮರಣ ತಡೆಯುವುದು, ಗರ್ಭಿಣಿಯರು ಮತ್ತು ಶಿಶು ಪಾಲನೆ ಸಂಬಂಧಿಸಿದಂತೆ ವಿಶೇಷ ಕಾಳಜಿ ವಹಿಸುವುದು ಮತ್ತಿತರ ಬಗ್ಗೆ ಗಮನಹರಿಸುವಂತೆ ಸಚಿವರು ಸೂಚಿಸಿದರು.
ಸಂಶಯ ಮೂಡುತ್ತಿದೆ: ಇದಕ್ಕೆ ಧ್ವನಿಗೂಡಿಸಿದ ವೀರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ, ಮುಖ್ಯಮಂತ್ರಿಯವ ಕಾನೂನು ಸಲಹೆಗಾರ ಎ.ಎಸ್.ಪೊನ್ನಣ್ಣ ಅವರು, ಸ್ಕ್ಯಾನಿಂಗ್ ಕೇಂದ್ರಗಳು ಹಾಗೂ ವೈದ್ಯಾಧಿಕಾರಿಗಳ ನಡುವೆ ಏನಾದರೂ ಸಂಬಂಧ ಇದೆಯೇ ಎಂಬ ಬಗ್ಗೆ ಸಂಶಯ ಉಂಟಾಗುತ್ತಿದೆ ಎಂದರು.
ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸತೀಶ್ ಕುಮಾರ್ ಅವರು, ಕೊಡಗು ಜಿಲ್ಲೆಯಲ್ಲಿ ಲಿಂಗಾನುಪಾತವು 978 ಇದೆ ಎಂದು ಮಾಹಿತಿ ನೀಡಿದರು. ಈ ಸಂದರ್ಭ ಮಾತನಾಡಿದ ಕುಟುಂಬ ಕಲ್ಯಾಣಾಧಿಕಾರಿ ಡಾ.ಆನಂದ್ ಅವರು 2011 ರ ಜನಗಣತಿ ಪ್ರಕಾರ 978 ಮಕ್ಕಳ ಲಿಂಗಾನುಪಾತ ಕಾಣಬಹುದಾಗಿದೆ ಎಂದು ವಿವರಿಸಿದರು.