ತಮಿಳುನಾಡಿನ ಕಳ್ಳಬಟ್ಟಿ ದುರಂತ: ಪ್ರಮುಖ ಆರೋಪಿ ಅರೆಸ್ಟ್‌

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ತಮಿಳುನಾಡಿನ ಕಲ್ಲಕುರಿಚಿ ಕಳ್ಳಬಟ್ಟಿ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ ಶನಿವಾರ 53ಕ್ಕೆ ಏರಿಕೆಯಾಗಿದೆ. ಇತ್ತ ಪ್ರಮುಖ ಶಂಕಿತನನ್ನು ಪೊಲೀಸರು ಬಂಧಿಸಿದ್ದಾರೆ.

ಕರುಣಾಪುರಂ ಗ್ರಾಮಕ್ಕೆ ಡಿಸ್ಟಿಲ್ಡ್ ಮದ್ಯವನ್ನು ಪೂರೈಸಿದವರು ಚಿನ್ನದೊರೈ ಎಂದು ಪೊಲೀಸರು ಹೇಳಿದ್ದಾರೆ.

ನಿನ್ನೆ ಸಂಜೆಯವರೆಗೂ 29 ಸಂತ್ರಸ್ತರ ಶವಗಳನ್ನು ಅವರ ಕುಟುಂಬಗಳಿಗೆ ಹಸ್ತಾಂತರಿಸಲಾಯಿತು. ಅವರ ಅಂತ್ಯಕ್ರಿಯೆ ಮಾಡಲಾಯಿತು ಎಂದು ಜಿಲ್ಲಾಧಿಕಾರಿ ಎಂ.ಎಸ್. ಪ್ರಶಾಂತ್ ತಿಳಿಸಿದ್ದಾರೆ. ಚಿಕಿತ್ಸೆ ಪಡೆಯುತ್ತಿದ್ದ ಮೂವರು ಪುರುಷರು ಚೇತರಿಸಿಕೊಂಡಿದ್ದಾರೆ. ಆದರೆ ಡಜನ್​ಗಟ್ಟಲೆ ಇತರರ ಸ್ಥಿತಿ ಇನ್ನೂ ಗಂಭೀರವಾಗಿದೆ ಎಂದು ಅವರು ಹೇಳಿದ್ದಾರೆ.

ನ್ಯಾಯಮೂರ್ತಿ ಬಿ. ಗೋಕುಲದಾಸ್ ಅವರನ್ನೊಳಗೊಂಡ ಏಕವ್ಯಕ್ತಿ ಆಯೋಗವು ಈ ಘಟನೆಯ ತನಿಖೆಯನ್ನು ಪ್ರಾರಂಭಿಸಿದೆ. ವರದಿ ಸಲ್ಲಿಸಲು 3 ತಿಂಗಳ ಕಾಲಾವಕಾಶ ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಹಲವು ಪೊಲೀಸ್ ಅಧಿಕಾರಿಗಳನ್ನು ಅಮಾನತು ಮಾಡಿದ್ದು, ಜಿಲ್ಲಾಧಿಕಾರಿಯನ್ನು ವರ್ಗಾವಣೆ ಮಾಡಿದೆ.

ಅಕ್ರಮ ಮದ್ಯ ಸೇವಿಸಿ ಮೃತಪಟ್ಟವರ ಕುಟುಂಬಗಳಿಗೆ ಸಿಎಂ ಸ್ಟಾಲಿನ್ 10 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ. ಹೆಚ್ಚುವರಿಯಾಗಿ, ಪ್ರಸ್ತುತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವವರಿಗೆ 50,000 ರೂ. ನೀಡಲಾಗುತ್ತದೆ. ಕಳ್ಳಭಟ್ಟಿ ದುರಂತದ ಬಗ್ಗೆ ಸಮಗ್ರ ತನಿಖೆಯನ್ನು ಖಚಿತಪಡಿಸಿಕೊಳ್ಳಲು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಸಿಬಿ-ಸಿಐಡಿ ತನಿಖೆಗೆ ಆದೇಶಿಸಿದ್ದಾರೆ.

ಈ ಘಟನೆಯ ನಂತರ ಕ್ರಿಮಿನಲ್ ಇತಿಹಾಸ ಹೊಂದಿರುವ ಮೂವರು ಆರೋಪಿಗಳನ್ನು ಸಹ ಬಂಧಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!