ಹೊಸದಿಗಂತ ಡಿಜಿಟಲ್ ಡೆಸ್ಕ್:
ನ್ಯೂಜಿಲೆಂಡ್ ವಿರುದ್ಧದ ಮುಂಬರುವ ಏಕದಿನ ಸರಣಿಗಾಗಿ ಬಿಸಿಸಿಐ 15 ಸದಸ್ಯರ ಬಲಿಷ್ಠ ತಂಡವನ್ನು ಘೋಷಿಸಿದೆ. ಯುವ ಆಟಗಾರ ಶುಭ್‌ಮನ್ ಗಿಲ್ ಈ ಸರಣಿಯಲ್ಲಿ ತಂಡವನ್ನು ಮುನ್ನಡೆಸಲಿದ್ದು, ಅನುಭವಿ ಆಟಗಾರರಾದ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ತಂಡಕ್ಕೆ ಮರಳಿರುವುದು ಆನೆಬಲ ತಂದಿದೆ.
ಆದರೆ, ಈ ಆಯ್ಕೆಯಲ್ಲಿ ಕೆಲವು ಅಚ್ಚರಿಯ ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದ್ದು, ಕಳೆದ ಸರಣಿಯಲ್ಲಿ ಮಿಂಚಿದ್ದ ಆಟಗಾರರಿಗೆ ಕೊಕ್ ನೀಡಲಾಗಿದೆ.
ಆಸ್ಟ್ರೇಲಿಯಾ ಪ್ರವಾಸದ ವೇಳೆ ಗಾಯಗೊಂಡು ದೀರ್ಘಕಾಲದ ವಿಶ್ರಾಂತಿಯಲ್ಲಿದ್ದ ಶ್ರೇಯಸ್ ಅಯ್ಯರ್ ಈಗ ಸಂಪೂರ್ಣ ಫಿಟ್ ಆಗಿದ್ದಾರೆ. ಎನ್‌ಸಿಎ ಫಿಟ್ನೆಸ್ ಪರೀಕ್ಷೆಯಲ್ಲಿ ಪಾಸಾಗಿರುವ ಅವರಿಗೆ ತಂಡದಲ್ಲಿ ಸ್ಥಾನ ನೀಡಲಾಗಿದೆ.
ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿಯಲ್ಲಿ ಶತಕ ಸಿಡಿಸಿ ಮಿಂಚಿದ್ದ ರುತುರಾಜ್ ಗಾಯಕ್ವಾಡ್ ಅವರನ್ನು ಕೈಬಿಟ್ಟಿರುವುದು ಅಭಿಮಾನಿಗಳಲ್ಲಿ ಅಚ್ಚರಿ ಮೂಡಿಸಿದೆ. ಮಧ್ಯಮ ಕ್ರಮಾಂಕದಲ್ಲಿ ಶ್ರೇಯಸ್ ಅಯ್ಯರ್ ಮರಳಿರುವ ಕಾರಣ ಗಾಯಕ್ವಾಡ್ ಅವರಿಗೆ ಸ್ಥಾನ ನೀಡಲಾಗಿಲ್ಲ ಎನ್ನಲಾಗಿದೆ.
ವಿಜಯ್ ಹಜಾರೆ ಟ್ರೋಫಿಯಲ್ಲಿ ಸಾಮಾನ್ಯ ಪ್ರದರ್ಶನ ನೀಡಿದ್ದರೂ ರಿಷಭ್ ಪಂತ್ ತಂಡಕ್ಕೆ ಆಯ್ಕೆಯಾಗಿದ್ದಾರೆ. ಆದರೆ, ತಂಡದ ಮೊದಲ ಆಯ್ಕೆಯ ವಿಕೆಟ್ ಕೀಪರ್ ಆಗಿ ಕೆ.ಎಲ್. ರಾಹುಲ್ ಇರುವುದರಿಂದ, ಪಂತ್‌ಗೆ ಆಡುವ ಹನ್ನೊಂದರ ಬಳಗದಲ್ಲಿ ಅವಕಾಶ ಸಿಗುವುದು ಕಷ್ಟ ಎನ್ನಲಾಗಿದೆ.


