ಇಂಗ್ಲೆಂಡ್ ವಿರುದ್ಧ ಟೀಮ್ ಇಂಡಿಯಾಕ್ಕೆ ಜಯ: ಹ್ಯಾಟ್ರಿಕ್ ಗೆಲುವಿನೊಂದಿಗೆ ಸರಣಿ ಕೈ ವಶ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಇಂಗ್ಲೆಂಡ್ ಎದುರು ಟೀಂ ಇಂಡಿಯಾ 5 ವಿಕೆಟ್ ಭರ್ಜರಿ ಜಯ ಸಾಧಿಸಿದೆ. 192 ರನ್‌ಗಳ ಸ್ಪರ್ಧಾತ್ಮಕ ಗುರಿ ಬೆನ್ನತ್ತಿದ ಟೀಂ ಇಂಡಿಯಾ, ಒಂದೂವರೆ ದಿನ ಬಾಕಿ ಇರುವಂತೆಯೇ ಗೆಲುವಿನ ನಗೆ ಬೀರಿದೆ.

ನಾಯಕ ರೋಹಿತ್ ಶರ್ಮಾ, ಶುಭ್‌ಮನ್ ಗಿಲ್ ಆಕರ್ಷಕ ಅರ್ಧಶತಕ ಜೈಸ್ವಾಲ್, ಜುರೆಲ್ ಜವಾಬ್ದಾರಿಯುತ ಬ್ಯಾಟಿಂಗ್‌ಗೆ ಬೆನ್‌ ಸ್ಟೋಕ್ಸ್ ಪಡೆ ಶರಣಾಗಿದೆ.

ಟೀಂ ಇಂಡಿಯಾ ಮೂರನೇ ದಿನದಾಟದಂತ್ಯದ ವೇಳೆಗೆ ವಿಕೆಟ್ ನಷ್ಟವಿಲ್ಲದೇ 40 ರನ್ ಗಳಿಸಿತ್ತು. ಇನ್ನೂ ಗೆಲ್ಲಲು 152 ರನ್‌ಗಳ ಅಗತ್ಯವಿತ್ತು. ಮೊದಲ ವಿಕೆಟ್‌ಗೆ ಯಶಸ್ವಿ ಜೈಸ್ವಾಲ್ ಹಾಗೂ ರೋಹಿತ್ ಶರ್ಮಾ ಮೊದಲ ವಿಕೆಟ್‌ಗೆ 84 ರನ್‌ಗಳ ಜತೆಯಾಟವಾಡುವ ಮೂಲಕ ಉತ್ತಮ ಆರಂಭ ಒದಗಿಸಿಕೊಟ್ಟರು. ಜೈಸ್ವಾಲ್ 44 ಎಸೆತಗಳನ್ನು ಎದುರಿಸಿ 5 ಬೌಂಡರಿ ಸಹಿತ 37 ರನ್ ಬಾರಿಸಿ ಜೋ ರೂಟ್‌ಗೆ ವಿಕೆಟ್ ಒಪ್ಪಿಸಿದರು.

ರೋಹಿತ್ ಶರ್ಮಾ ಜವಾಬ್ದಾರಿಯುತ ಬ್ಯಾಟಿಂಗ್ ನಡೆಸುವ ಮೂಲಕ ನಾಯಕನ ಆಟ ಆಡುವಲ್ಲಿ ಯಶಸ್ವಿಯಾದರು. ಹಿಟ್‌ಮ್ಯಾನ್ ಖ್ಯಾತಿಯ ರೋಹಿತ್ ಶರ್ಮಾ 81 ಎಸೆತಗಳನ್ನು ಎದುರಿಸಿ 5 ಬೌಂಡರಿ ಹಾಗೂ 1 ಸಿಕ್ಸರ್ ಸಹಿತ 55 ರನ್ ಗಳಿಸಿ ವಿಕೆಟ್ ಒಪ್ಪಿಸಿದರು.

ಇದಾದ ಬಳಿಕ ರಜತ್ ಪಾಟೀದಾರ್ ಶೂನ್ಯ ಸುತ್ತಿ ಪೆವಿಲಿಯನ್ ಸೇರಿದರೆ, ಜಡೇಜಾ ಬ್ಯಾಟಿಂಗ್ 4 ರನ್‌ಗಳಿಗೆ ಸೀಮಿತವಾಯಿತು. ಇನ್ನು ಸರ್ಫರಾಜ್ ಖಾನ್ ಕೂಡಾ ಶೂನ್ಯ ಸುತ್ತಿ ನಿರಾಸೆ ಅನುಭವಿಸಿದರು.

ಒಂದು ಹಂತದಲ್ಲಿ 120 ರನ್‌ಗಳಿಗೆ 5 ವಿಕೆಟ್ ಕಳೆದುಕೊಂಡು ಕಂಗಾಲಾಗಿದ್ದ ಭಾರತ ತಂಡಕ್ಕೆ ಆರನೇ ವಿಕೆಟ್‌ಗೆ ಶುಭ್‌ಮನ್ ಗಿಲ್ ಹಾಗೂ ಧೃವ್ ಜುರೆಲ್ ಮುರಿಯದ 72 ರನ್‌ಗಳ ಜತೆಯಾಟವಾಡುವ ಮೂಲಕ ತಂಡವನ್ನು ಗೆಲುವಿನ ದಡ ಸೇರಿಸಿದರು.

ಶುಭ್‌ಮನ್ ಗಿಲ್ 124 ಎಸೆತಗಳನ್ನು ಎದುರಿಸಿ 2 ಸಿಕ್ಸರ್ ಸಹಿತ ಅಜೇಯ 52 ರನ್ ಬಾರಿಸಿದರೆ, ವಿಕೆಟ್ ಕೀಪರ್ ಬ್ಯಾಟರ್ ಧೃವ್ ಜುರೆಲ್ ಅಜೇಯ 39 ರನ್ ಬಾರಿಸಿ ತಂಡವನ್ನು ಗೆಲುವಿನ ದಡ ಸೇರಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!