ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯಪಾಲರು ಮುಡಾ ಹಗಣದಲ್ಲಿ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದನ್ನು ಪ್ರಶ್ನಿಸಿ ಸಿಎಂ ಸಿದ್ಧರಾಮಯ್ಯ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ಆಗಸ್ಟ್.31ಕ್ಕೆ ಮುಂದೂಡಿದೆ.
ಶನಿವಾರ ಬೆಳಗ್ಗೆ 10:30 ಕ್ಕೆ ವಿಚಾರಣೆಯನ್ನು ನಿಗದಿಪಡಿಸಲಾಗಿದೆ. ಆ ಮೂಲಕ ಹಿಂದಿನ ಮಧ್ಯಂತರ ಆದೇಶವನ್ನು ಹೈಕೋರ್ಟ್ ಮುಂದುವರಿಸಿದೆ. ವಿಚಾರಣೆ ಮುಂದೂಡುವಂತೆ ಜನಪ್ರತಿನಿಧಿಗಳ ಕೋರ್ಟ್‌ಗೆ ಸೂಚನೆ ನೀಡಿದೆ.
ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ವಿರುದ್ಧದ ಪ್ರಾಸಿಕ್ಯೂಷನ್ ಅನುಮತಿ ಪ್ರಶ್ನಿಸಿ ಹೈಕೋರ್ಟ್ ನಲ್ಲಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ನಾಗಪ್ರಸನ್ನ ಅವರನ್ನೊಳಗೊಂಡಂತ ನ್ಯಾಯಪೀಠದಲ್ಲಿ ನಡೆಸಲಾಯಿತು.ಈ ವೇಳೆ ರಾಜ್ಯಪಾಲರು ತರಾತುರಿಯಲ್ಲಿ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ಬಗ್ಗೆ ಸಿಎಂ ಪರ ವಕೀಲ ಅಭಿಷೇಕ್ ಮನು ಸಿಂಘ್ವಿ ಅವರು ಮನವರಿಕೆ ಮಾಡಿಕೊಟ್ಟರು.
ಇದಷ್ಟೇ ಅಲ್ಲದೇ ಶಶಿಕಲಾ ಜೊಲ್ಲೆ, ಹೆಚ್.ಡಿ ಕುಮಾರಸ್ವಾಮಿ ಸೇರಿದಂತೆ ವಿವಿಧ ರಾಜಕೀಯ ನಾಯಕರ ವಿರುದ್ಧದ ಪ್ರಾಸಿಕ್ಯೂಷನ್ ಗೆ ಅನುಮತಿ ಕೋರಿ ರಾಜ್ಯಪಾಲರಿಗೆ ಅರ್ಜಿ ಸಲ್ಲಿಸಿದ್ದರೂ ಈವರೆಗೆ ಯಾವುದೇ ಉತ್ತರ ನೀಡಿಲ್ಲ. ಆದರೇ ಸಿದ್ಧರಾಮಯ್ಯ ವಿರುದ್ಧದ ಮುಡಾ ಹಗರಣದಲ್ಲಿ ಅನುಮತಿ ಕೋರಿದ ಕೆಲವೇ ದಿನಗಳಲ್ಲಿ ನೀಡಲಾಗಿದೆ ಎಂಬುದಾಗಿ ವಾದಿಸಿದರು.
ಈ ವಾದವನ್ನು ಆಲಿಸಿದ ನಂತ್ರ ಹೈಕೋರ್ಟ್, ಪ್ರತಿವಾದಿಗಳ ವಾದವನ್ನು ಆಲಿಸುವುದಕ್ಕೆ ಸಮಯಾವಕಾಶ ಕೋರಿದ ಕಾರಣ ಆಗಸ್ಟ್.31ರ ಶನಿವಾರ ಬೆಳಿಗ್ಗೆ 10.30ಕ್ಕೆ ವಿಚಾರಣೆಯನ್ನು ಮುಂದೂಡಿದೆ.
ಅಲ್ಲದೇ ಈ ಹಿಂದಿನ ಸಿಎಂ ಸಿದ್ಧರಾಮಯ್ಯ ವಿರುದ್ಧದ ಮುಡಾ ಹಗರಣ ಸಂಬಂಧ ರಾಜ್ಯಪಾಲರು ನೀಡಿದ್ದ ಪ್ರಾಸಿಕ್ಯೂಷನ್ ಅನುಮತಿ ನೀಡಿದಂತ ವಿಚಾರದ ಮಧ್ಯಂತರ ಆದೇಶವನ್ನು ಮುಂದುವರೆಸಿ ಆದೇಶಿಸಿದೆ.