ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಹಾರಾಷ್ಟ್ರದ ಥಾಣೆಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಕಂಟೈನರ್ ಟ್ರಕ್ ಜೀಪ್ ಗೆ ಡಿಕ್ಕಿ ಹೊಡೆದ ಪರಿಣಾಮ ಆರು ಮಂದಿ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ.
ಮಹಾರಾಷ್ಟ್ರದ ಥಾಣೆಯ ಭಿವಂಡಿ ನಾಸಿಕ್ ರಸ್ತೆಯ ಖಡ್ವಾಲಿ ಗ್ರಾಮದಲ್ಲಿ ವಿದ್ಯಾರ್ಥಿಗಳು ಮತ್ತು ಇತರರನ್ನು ಹೊತ್ತೊಯ್ಯುತ್ತಿದ್ದ ಜೀಪ್ ಎದುರಿನಿಂದ ಬಂದ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ 100 ಮೀಟರ್‌ವರೆಗೆ ಎಳೆದೊಯ್ದು ಪಲ್ಟಿಯಾಗಿದೆ ಎಂದು ಪೊಲೀಸ್ ನಿಯಂತ್ರಣ ಕೊಠಡಿಯ ಅಧಿಕಾರಿ ತಿಳಿಸಿದ್ದಾರೆ.
ಭಿವಂಡಿ ತಾಲೂಕಿನ ಪಾದ್ಘಾ ಪ್ರದೇಶದಲ್ಲಿ ಭಾರೀ ಮಳೆಯ ನಡುವೆ ಬೆಳಗ್ಗೆ 6.30ರ ಸುಮಾರಿಗೆ ಅಪಘಾತ ಸಂಭವಿಸಿದೆ . ನಾಲ್ವರು ಸ್ಥಳದಲ್ಲೇ ಮೃತಪಟ್ಟರೆ, ಇಬ್ಬರು ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ ಎಂದು ಜಿಲ್ಲಾ ವಿಪತ್ತು ನಿಯಂತ್ರಣ ಕೊಠಡಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಗಂಭೀರವಾಗಿ ಗಾಯಗೊಂಡ ಮೂವರು ಭಿವಂಡಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಇತರ ಮೂವರಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ಅವರು ಹೇಳಿದರು.