ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಾಣಿ–ಮೈಸೂರು ರಾಷ್ಟ್ರೀಯ ಹೆದ್ದಾರಿಯ ಅರಂತೋಡು ಗ್ರಾಮದ ಕೂಳಿಚ್ಚಾಲು ಸಮೀಪ ಬುಧವಾರ ರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಅಪ್ರಾಪ್ತ ವಯಸ್ಕ ಬಾಲಕ ಗಂಭೀರವಾಗಿ ಗಾಯಗೊಂಡಿದ್ದಾನೆ. ಅಪಘಾತದ ತೀವ್ರತೆಗೆ ಬಾಲಕ ಕಾರಿನ ಅಡಿಭಾಗದಲ್ಲಿ ಸಿಲುಕಿಕೊಂಡಿದ್ದು, ಸಾರ್ವಜನಿಕರು ಹಾಗೂ ಆಂಬುಲೆನ್ಸ್ ಸಿಬ್ಬಂದಿಯ ಸಮಯೋಚಿತ ಕಾರ್ಯಾಚರಣೆಯಿಂದ ಆತನನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಇದನ್ನೂ ಓದಿ:
ಘಟನೆಯ ಮಾಹಿತಿ ದೊರೆಯುತ್ತಿದ್ದಂತೆ ತುರ್ತು ಸಂದರ್ಭಗಳಲ್ಲಿ ಕಾರ್ಯನಿರ್ವಹಿಸುವ ಆಂಬುಲೆನ್ಸ್ ಚಾಲಕರು ಮತ್ತು ಮಾಲೀಕರ ವಾಟ್ಸಾಪ್ ಗುಂಪಿನ ಮೂಲಕ ಸಂದೇಶ ರವಾನಿಸಲಾಯಿತು. ಕೂಡಲೇ ಸ್ಥಳಕ್ಕಾಗಮಿಸಿದ ಸಾರ್ವಜನಿಕರು ಹಾಗೂ ಆಂಬುಲೆನ್ಸ್ ಸಿಬ್ಬಂದಿ ಜಂಟಿಯಾಗಿ ಕಾರ್ಯಾಚರಣೆ ನಡೆಸಿ ಕಾರಿನಡಿ ಸಿಲುಕಿದ್ದ ಬಾಲಕನನ್ನು ಹೊರತೆಗೆದರು. ಗಂಭೀರವಾಗಿ ಗಾಯಗೊಂಡಿದ್ದ ಬಾಲಕನನ್ನು ತಕ್ಷಣ ಸುಳ್ಯದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಆರೋಗ್ಯ ಸ್ಥಿತಿ ಆತಂಕಕಾರಿ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ. ಅಪಘಾತಕ್ಕೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಘಟನೆಯ ಕುರಿತು ಪೊಲೀಸರು ಪರಿಶೀಲನೆ ನಡೆಸುತ್ತಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.



