ಹೊಸದಿಗಂತ ಡಿಜಿಟಲ್ ಡೆಸ್ಕ್:
ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯ ಪಳಯಪೇಟೆಯಲ್ಲಿನ ಪಟಾಕಿ ಗೋದಾಮಿನಲ್ಲಿ ನಡೆದ ಭೀಕರ ಸ್ಫೋಟದಲ್ಲಿ ಕನಿಷ್ಠ 8 ಜನರು ಸಾವನ್ನಪ್ಪಿದ್ದು, ಹಲವರಿಗೆ ಸುಟ್ಟ ಗಾಯಗಳಾಗಿವೆ.
ಈವರೆಗೆ 20ಕ್ಕೂ ಹೆಚ್ಚು ಜನರನ್ನು ರಕ್ಷಿಸಿ ಕೃಷ್ಣಗಿರಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಕೃಷ್ಣಗಿರಿ ಜಿಲ್ಲಾಧಿಕಾರಿ ಸರಯು, ಎಸ್ಪಿ ಸರೋಜ್ ಕುಮಾರ್ ಹಾಗೂ ಸ್ಥಳೀಯ ಜನಪ್ರತಿನಿಧಿಗಳು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಪ್ರಾಥಮಿಕ ತನಿಖೆಯ ಪ್ರಕಾರ ‘ಗ್ಯಾಸ್ ಸಿಲಿಂಡರ್ ಸೋರಿಕೆಯಿಂದ ದುರಂತ ಸಂಭವಿಸಿದೆ’ ಎಂದು ಹೇಳಲಾಗುತ್ತಿದೆ.
ಕೃಷ್ಣಗಿರಿ ನಗರ ಪೊಲೀಸರು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ. ಪಟಾಕಿ ಗೋಡೌನ್ 2020ರಿಂದ ಕಾರ್ಯನಿರ್ವಹಿಸುತ್ತಿದೆ ಎಂದು ಹೇಳಲಾಗಿದೆ. ಅವಘಡದಲ್ಲಿ ಸಮೀಪದ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಇಬ್ಬರು ಅಮಾಯಕ ಪಾದಚಾರಿಗಳು ಸಹ ಪ್ರಾಣ ಕಳೆದುಕೊಂಡಿದ್ದಾರೆ.
ಪರಿಹಾರ ಘೋಷಿಸಿದ ಪ್ರಧಾನಿ ಮೋದಿ
ಅವಘಡದಲ್ಲಿ ಸಂಭವಿಸಿದ ಜೀವಹಾನಿಗೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದು, ಮೃತರ ಕುಟುಂಬಕ್ಕೆ ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ ತಲಾ 2 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ. ‘ತಮಿಳುನಾಡಿನ ಕೃಷ್ಣಗಿರಿಯ ಪಟಾಕಿಗೋದಾಮಿನಲ್ಲಿ ಸಂಭವಿಸಿದ ದುರಂತದಿಂದ ಅಮೂಲ್ಯವಾದ ಜೀವಹಾನಿಯಾಗಿದ್ದು, ತೀವ್ರ ದುಃಖವಾಗಿದೆ. ಈ ಅತ್ಯಂತ ಕಷ್ಟಕರ ಸಮಯದಲ್ಲಿ ನನ್ನ ಆಲೋಚನೆಗಳು ಮತ್ತು ಪ್ರಾರ್ಥನೆಗಳು ಸಂತ್ರಸ್ತರ ಕುಟುಂಬಗಳೊಂದಿಗೆ ಇವೆ’ ಎಂದು ತಿಳಿಸಿದ್ದಾರೆ.
ತಮಿಳುನಾಡಿಗೆ ಭೇಟಿ ನೀಡಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಕೂಡ ಮೃತರಿಗೆ ಸಂತಾಪ ಸೂಚಿಸಿದ್ದಾರೆ.
ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅವರು ಮೃತರ ಸಾವಿಗೆ ಸಂತಾಪ ವ್ಯಕ್ತಪಡಿಸಿದ್ದಾರೆ ಮತ್ತು ಮೃತರ ಕುಟುಂಬಗಳಿಗೆ ತಲಾ 3 ಲಕ್ಷ ರೂ. ಪರಿಹಾರವನ್ನು ಘೋಷಿಸಿದ್ದಾರೆ. ಗಾಯಾಳುಗಳಿಗೆ ಹಾಗೂ ಪ್ರಸ್ತುತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವವರಿಗೆ ತಲಾ ₹ 1 ಲಕ್ಷ ಹಾಗೂ ಸಣ್ಣಪುಟ್ಟ ಗಾಯಗಳಾಗಿರುವವರಿಗೆ ತಲಾ ₹ 50,000 ಪರಿಹಾರ ನೀಡುವುದಾಗಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.