ವಯನಾಡಿನಲ್ಲಿ ಭೀಕರ ಭೂಕುಸಿತ: ಕನ್ನಡಿಗರಿಗೆ ನೆರವು ನೀಡಲು ಸರಕಾರದಿಂದ ಸಹಾಯವಾಣಿ ಓಪನ್!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕೇರಳದ ವಯನಾಡಿನಲ್ಲಿ ಭೀಕರ ಭೂಕುಸಿತ ಸಂಭವಿಸಿದ್ದು, ಸಾವು ನೋವಿನ ಸಂಖ್ಯೆ ಕ್ಷಣಕ್ಷಣಕ್ಕೂ ಏರುತ್ತಿದೆ. ಹೀಗಾಗಿ ಕರ್ನಾಟಕದಲ್ಲೂ ಕಟ್ಟೆಚ್ಚರ ವಹಿಸಲು ಜಿಲ್ಲಾಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚಿಸಿದ್ದಾರೆ. ಇನ್ನು ಕೆಲಸ ಕಾರ್ಯಗಳಿಗಾಗಿ ಕರ್ನಾಟಕದಿಂದ ಹಲವು ಕನ್ನಡಿಗರು ಕೇರಳಕ್ಕೆ ತೆರಳಿ, ಅಲ್ಲಿ ಸಂಕಷ್ಟಕ್ಕೆ ಸಿಲುಕಿರುವ ಸಾಧ್ಯತೆ ಇರುವುದರಿಂದ ನೆರವಿಗಾಗಿ ರಾಜ್ಯ ಸರ್ಕಾರ ಸಹಾಯವಾಣಿ ತೆರೆದಿದೆ.

ಅಧಿಕಾರಿಗಳು ಪ್ರವಾಹ ಪರಿಸ್ಥಿತಿಯನ್ನು ಸಮರೋಪಾದಿಯಲ್ಲಿ ನಿರ್ವಹಿಸುವಂತೆ, ರಕ್ಷಣೆ ಹಾಗೂ ಪರಿಹಾರ ಕಾರ್ಯಚರಣೆಗಳನ್ನು ಕೈಗೊಳ್ಳುವಂತೆ ಹಾಗೂ ಪ್ರವಾಹ ಪೀಡಿತರಿಗೆ ಅಗತ್ಯಕ್ಕನುಸಾರವಾಗಿ ಕಾಳಜಿ ಕೇಂದ್ರಗಳನ್ನು ತೆರೆದು ಎಲ್ಲ ಸೌಲಭ್ಯಗಳನ್ನು ಕಲ್ಪಿಸುವಂತೆ ಸಿಎಂ ಸೂಚಿಸಿದ್ದಾರೆ. ಎಲ್ಲ ಜಿಲ್ಲೆಗಳಲ್ಲಿ ನಿಯಂತ್ರಣ ಕೊಠಡಿ ತೆರೆದು ದಿನದ 24 ಗಂಟೆಯೂ ಕಾರ್ಯ ನಿರ್ವಹಿಸಲು ವ್ಯವಸ್ಥೆ ಮಾಡಬೇಕು. ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿಯೇ ಲಭ್ಯರಿದ್ದು ಎಚ್ಚರ ವಹಿಸುವಂತೆ ಸೂಚಿಸಿದ್ದಾರೆ.

ಚಾಮರಾಜನಗರ ಜಿಲ್ಲಾಧಿಕಾರಿ ಕಚೇರಿ ಸಹಾಯವಾಣಿ
ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕು ಹಾಗೂ ಸುತ್ತಲಿನ ಪ್ರದೇಶಗಳ ಅಸಂಘಟಿತ ಕಾರ್ಮಿಕರು ಅಲ್ಲಿಗೆ ನಿಯಮಿತವಾಗಿ ಕೆಲಸಕ್ಕಾಗಿ ತೆರಳಿರುವ ಸಾಧ್ಯತೆ ಇರುವುದರಿಂದ, ಅಂತಹವರು ಕಣ್ಮರೆಯಾಗಿದ್ದರೆ ಮಾಹಿತಿ ನೀಡಲು ಚಾಮರಾಜನಗರ ಜಿಲ್ಲಾಡಳಿತವು 24/7 ಸಹಾಯವಾಣಿ ಸ್ಥಾಪಿಸಿದೆ.

ಸಹಾಯವಾಣಿ ಸಂಖ್ಯೆಗಳು- 08226-223161, 223163, 223160 ಅಥವಾ ವಾಟ್ಸಪ್ ಸಂಖ್ಯೆ 9740942902 ಮೂಲಕ ಸಾರ್ವಜನಿಕರು ಸಂಪರ್ಕಿಸಲು ಕೋರಿದೆ.

ಮಾರ್ಗ ಸ್ಥಗಿತ
ಗುಂಡ್ಲುಪೇಟೆ ಮಾರ್ಗವಾಗಿ ಸಾಗುವ ಬೆಂಗಳೂರು-ವಯನಾಡ್ ರಾಷ್ಟ್ರೀಯ ಹೆದ್ದಾರಿ 766 ರ ಮಾರ್ಗದಲ್ಲಿ ಸಂಚಾರ ಮುಂಜಾಗ್ರತಾ ಕ್ರಮವಾಗಿ ನಿರ್ಬಂಧಿಸಲಾಗಿದ್ದು, ಪರ್ಯಾಯವಾಗಿ ಗುಂಡ್ಲುಪೇಟೆ-ಬಂಡೀಪುರ-ಗುಡಲೂರ ಮಾರ್ಗದಲ್ಲಿ ತೆರಳಲು ಸೂಚಿಸಲಾಗಿದೆ.

ಮೈಸೂರು ಜಿಲ್ಲಾಡಳಿತರಿಂದ ಅಗತ್ಯ ಕ್ರಮ
ಮೈಸೂರು ಜಿಲ್ಲಾಡಳಿತವು ಕೂಡ ಹೆಗ್ಗಡದೇವನಕೋಟೆ ತಾಲ್ಲೂಕು ಆಸ್ಪತ್ರೆ ಹಾಗೂ ಮೈಸೂರಿನ ಕೆ.ಆರ್.ಆಸ್ಪತ್ರೆಯಲ್ಲಿ ವೈದ್ಯಕೀಯ ಚಿಕಿತ್ಸೆಗೆ ಎಲ್ಲ ಸಿದ್ಧತೆಗಳನ್ನು ಮಾಡಿಕೊಂಡಿದ್ದು, ವೈದ್ಯರನ್ನು ನಿಯೋಜಿಸಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ಕರೆತರಲು ಸಾಕಷ್ಟು ಬಸ್, ವಾಹನಗಳನ್ನು ಅಣಿಗೊಳಿಸಲಾಗಿದೆ. ಪಾರ್ಥಿವ ಶರೀರಗಳ ಸಂರಕ್ಷಣೆಗೆ ಶೈತ್ಯಾಗಾರದ ಘಟಕಗಳನ್ನು ಒದಗಿಸುವ ಸರಬರಾಜುದಾರನ್ನು ಗುರುತಿಸಲಾಗಿದೆ.ಮೈಸೂರು ಜಿಲ್ಲಾಡಳಿತ ಸಹಾಯವಾಣಿ ಸಂಖ್ಯೆ: 0821-24223800

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!