ಹೊಸದಿಗಂತ ಡಿಜಿಟಲ್ ಡೆಸ್ಕ್:
ಹಿಮಾಚಲ ಪ್ರದೇಶದ ಚಂಬಾ ಜಿಲ್ಲೆಯಲ್ಲಿ ಭೀಕರ ಬಸ್ ಅಪಘಾತ ಸಂಭವಿಸಿದೆ. ಬೈರಾಗರ್‌ನಿಂದ ಚಂಬಾಗೆ ತೆರಳುತ್ತಿದ್ದ ಖಾಸಗಿ ಬಸ್ ಚಲುಂಜ್ ಮೋರ್ ಬಳಿ ನಿಯಂತ್ರಣ ತಪ್ಪಿ ರಸ್ತೆಯಿಂದ ಕೆಳಗೆ ಉರುಳಿ ಸುಮಾರು 100 ಅಡಿ ಆಳಕ್ಕೆ ಬಿದ್ದಿದೆ. ಘಟನೆಯಲ್ಲಿ ಚಾಲಕ ಮತ್ತು ಕಂಡಕ್ಟರ್ ಸೇರಿದಂತೆ 7 ಮಂದಿ ಮೃತಪಟ್ಟಿದ್ದು, 11 ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳ ಪೈಕಿ 6 ಜನರ ಸ್ಥಿತಿ ಗಂಭೀರವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಶನಿವಾರ ಖಾಸಗಿ ಬಸ್ ಬೈರಾಗರ್‌ನಿಂದ ಚಂಬಾ ಕಡೆಗೆ ತೆರಳುತ್ತಿತ್ತು. ಬೈರಾಗರ್–ಟಿಸ್ಸಾ ಮಾರ್ಗದ ದೇವಿಕೋಥಿ ಪ್ರದೇಶದ ಚಲುಂಜ್ ಮೋರ್ ಬಳಿ ಬಸ್ ನಿಯಂತ್ರಣ ಕಳೆದುಕೊಂಡು ರಸ್ತೆಯಿಂದ ಕೆಳಗೆ ಉರುಳಿದೆ.
ಸ್ಥಳೀಯರಿಂದ ರಕ್ಷಣಾ ಕಾರ್ಯ
ಅಪಘಾತದ ಬಳಿಕ ಗಾಯಾಳುಗಳ ಚೀರಾಟ ಕೇಳಿದ ಸ್ಥಳೀಯರು ಕೂಡಲೇ ಘಟನಾ ಸ್ಥಳಕ್ಕೆ ಧಾವಿಸಿದ್ದಾರೆ. ಬಳಿಕ ಪೊಲೀಸರಿಗೆ ಮಾಹಿತಿ ನೀಡಲಾಗಿದ್ದು, ಪೊಲೀಸ್ ಸಿಬ್ಬಂದಿ, ಅಗ್ನಿಶಾಮಕ ದಳ ಹಾಗೂ ಎನ್‌ಡಿಆರ್‌ಎಫ್ ತಂಡಗಳು ಸ್ಥಳಕ್ಕೆ ಆಗಮಿಸಿವೆ.
ಇದನ್ನೂ ಓದಿ:
ರಕ್ಷಣಾ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಬಸ್‌ನೊಳಗೆ ಹಾಗೂ ಅದರ ಸುತ್ತ ಸಿಲುಕಿದ್ದವರನ್ನು ಹೊರತೆಗೆದಿದ್ದಾರೆ. ಗಾಯಗೊಂಡವರನ್ನು ತಕ್ಷಣ ಸಮೀಪದ ಆಸ್ಪತ್ರೆಗಳಿಗೆ ಕರೆದೊಯ್ದು ಚಿಕಿತ್ಸೆ ನೀಡಲಾಗುತ್ತಿದೆ.
18 ಮಂದಿ ಪ್ರಯಾಣಿಸುತ್ತಿದ್ದರು
ಅಪಘಾತ ಸಂಭವಿಸಿದ ವೇಳೆ ಬಸ್‌ನಲ್ಲಿ ಒಟ್ಟು 18 ಮಂದಿ ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ. ಮೃತಪಟ್ಟವರಲ್ಲಿ ಬಸ್ ಚಾಲಕ ಮತ್ತು ಕಂಡಕ್ಟರ್ ಕೂಡ ಸೇರಿದ್ದಾರೆ. ಮೃತರ ಗುರುತು ಹಾಗೂ ಅಪಘಾತದ ಕುರಿತು ಹೆಚ್ಚಿನ ವಿವರಗಳನ್ನು ಅಧಿಕಾರಿಗಳು ಇನ್ನಷ್ಟೇ ಬಹಿರಂಗಪಡಿಸಬೇಕಿದೆ.
ಅಪಘಾತಕ್ಕೆ ನಿಖರ ಕಾರಣ ಏನು ಎಂಬುದನ್ನು ಪತ್ತೆಹಚ್ಚಲು ಸಂಬಂಧಪಟ್ಟ ಅಧಿಕಾರಿಗಳು ತನಿಖೆ ಆರಂಭಿಸಿದ್ದಾರೆ.
ಸಿಎಂ ಸುಖು ಸಂತಾಪ
ಘಟನೆಗೆ ಹಿಮಾಚಲ ಪ್ರದೇಶ ಮುಖ್ಯಮಂತ್ರಿ ಸುಖವಿಂದರ್ ಸಿಂಗ್ ಸುಖು ಸಂತಾಪ ಸೂಚಿಸಿದ್ದಾರೆ. ಮೃತರ ಕುಟುಂಬಗಳಿಗೆ ದುಃಖ ವ್ಯಕ್ತಪಡಿಸಿರುವ ಅವರು, ಗಾಯಾಳುಗಳಿಗೆ ಅಗತ್ಯ ವೈದ್ಯಕೀಯ ನೆರವು ಒದಗಿಸುವಂತೆ ಜಿಲ್ಲಾಡಳಿತಕ್ಕೆ ಸೂಚಿಸಿದ್ದಾರೆ.



