ಹೊಸದಿಗಂತ ಡಿಜಿಟಲ್ ಡೆಸ್ಕ್:
ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ನಾಲ್ಕು ದಿನಗಳಿಂದ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ಗುಂಡಿನ ಚಕಮಕಿ ನಡೆಯುತ್ತಿದ್ದು, ಈ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿಯವರು ಗೃಹ ಸಚಿವ ಅಮಿತ್ ಶಾ ಮತ್ತು ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಅವರೊಂದಿಗೆ ಸಭೆ ನಡೆಸಿದ್ದಾರೆ.
ಕಾಶ್ಮೀರದಲ್ಲಿ ಭದ್ರತೆ ಸಂಬಂಧಿತ ಪರಿಸ್ಥಿತಿ ಮತ್ತು ಸಶಸ್ತ್ರ ಪಡೆಗಳು ಕೈಗೊಳ್ಳುತ್ತಿರುವ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳ ಸಂಪೂರ್ಣ ಅವಲೋಕನವನ್ನು ಈ ವೇಳೆ ಮಾಡಲಾಯಿತು. ಸಶಸ್ತ್ರ ಪಡೆಗಳ ಸಂಪೂರ್ಣ ಸಾಮರ್ಥ್ಯವನ್ನು ಭಯೋತ್ಪಾದನಾ ನಿಗ್ರಹಕ್ಕೆ ನಿಯೋಜಿಸಲು ಮೋದಿ ಅಧಿಕಾರಿಗಳಿಗೆ ಸೂಚಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಕಣಿವೆಯಲ್ಲಿ ಶಾಂತಿ ಸ್ಥಾಪನೆಯಾಗಬೇಕು. ಉಗ್ರರ ದಾಳಿಗಳನ್ನು ನಿಗ್ರಹಿಸಬೇಕು. ಗಡಿಯುದ್ದಕ್ಕೂ ಹೆಚ್ಚಿನ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಬೇಕು. ಸೂಕ್ಷ್ಮ ನೆಲೆಗಳಲ್ಲಿ ಹೆಚ್ಚಿನ ಭದ್ರತೆ ಕೈಗೊಳ್ಳಬೇಕು ಎಂದು ಸೂಚಿಸುವ ಜತೆಗೆ ಆಧುನಿಕ ತಂತ್ರಜ್ಞಾನದ ಬಳಕೆ, ಉಗ್ರರ ನಿಗ್ರಹಕ್ಕೆ ಇದುವರೆಗೆ ತೆಗೆದುಕೊಂಡ ಕ್ರಮಗಳ ಕುರಿತು ಕೂಡ ಮೋದಿ ಅವರು ಪರಿಶೀಲನೆ ನಡೆಸಿದರು ಎಂದು ತಿಳಿದುಬಂದಿದೆ.
ಜಮ್ಮು-ಕಾಶ್ಮೀರದ ರಿಯಾಸಿ ಜಿಲ್ಲೆಯಲ್ಲಿ ಜೂನ್ 9ರಂದು ನಡೆದ ಭಯೋತ್ಪಾದಕರ ಗುಂಡಿನ ದಾಳಿಯ ಸಂದರ್ಭದಲ್ಲಿ, ಪುಟ್ಟ ಕಂದಮ್ಮನೂ ಸೇರಿ 10 ಮಂದಿ ಮೃತಪಟ್ಟಿದ್ದಾರೆ. ಜಮ್ಮು-ಕಾಶ್ಮೀರದಲ್ಲಿರುವ ಶಿವ ಖೋರಿ ದೇವಸ್ಥಾನಕ್ಕೆ ಹಿಂದು ಯಾತ್ರಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಬಸ್ ಮೇಲೆ ಭಯೋತ್ಪಾದಕರು ದಾಳಿ ನಡೆಸಿದ್ದರು. ಪಾಕಿಸ್ತಾನದ ಲಷ್ಕರೆ ತಯ್ಬಾ ಉಗ್ರ ಸಂಘಟನೆಯು ದಾಳಿ ನಡೆಸಿದ್ದು, ಉಗ್ರನಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ. ಅಲ್ಲದೆ, ಉಗ್ರನ ಕುರಿತು ಸುಳಿವು ನೀಡಿದರೆ 20 ಲಕ್ಷ ರೂ. ಬಹುಮಾನ ಘೋಷಣೆ ಮಾಡಲಾಗಿದೆ.
ರಿಯಾಸಿಯಲ್ಲಿ ಉಗ್ರರ ದಾಳಿ ಸೇರಿ ಕಳೆದ ನಾಲ್ಕು ದಿನಗಳಲ್ಲಿ ಮೂರು ಕಡೆ ಉಗ್ರರು ದಾಳಿಗಳನ್ನು ನಡೆಸಿದ್ದಾರೆ. ಇದಾದ ನಂತರ ದೋಡಾದಲ್ಲಿ ಸೇನಾ ನೆಲೆಯ ಮೇಲೆ ಉಗ್ರರು ದಾಳಿ ನಡೆಸಿದ್ದು, ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ ನಡೆದಿತ್ತು. ಇದೇ ವೇಳೆ ಒಬ್ಬ ಯೋಧ ಹುತಾತ್ಮರಾಗಿದ್ದರು. ಅಲ್ಲದೆ, ಕಥುವಾದಲ್ಲಿಯೂ ಉಗ್ರರು ನಡೆಸಿದ ದಾಳಿಯಲ್ಲಿ ಒಬ್ಬ ನಾಗರಿಕ ಮೃತಪಟ್ಟಿದ್ದರು. ಇದರಿಂದಾಗಿ ಕಣಿವೆಯಲ್ಲಿ ಭದ್ರತೆ ಕುರಿತು ಜನರಲ್ಲಿ ಆತಂಕ ಹೆಚ್ಚಾಗಿದೆ.