ಹೊಸದಿಗಂತ ಡಿಜಿಟಲ್ ಡೆಸ್ಕ್:
ಸೋಮವಾರ ರಾತ್ರಿ ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ ಎನ್‌ಕೌಂಟರ್ ನಡೆದಿದೆ. ಕಾಶ್ಮೀರದ ಕುಲ್ಗಾಮ್ ಜಿಲ್ಲೆಯ ಹುರಾ ಗ್ರಾಮದಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಓರ್ವ ಭಯೋತ್ಪಾದಕನನ್ನು ಹತ್ಯೆ ಮಾಡಲಾಗಿದೆ. ಈ ಗುಂಡಿನ ಚಕಮಕಿಯಲ್ಲಿ ಒಬ್ಬ ಪೊಲೀಸ್ ಗಾಯಗೊಂಡಿದ್ದು, ಗಾಯಗೊಂಡ ಪೊಲೀಸನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಎನ್‌ಕೌಂಟರ್ ಸ್ಥಳದಲ್ಲಿ ಸಾವನ್ನಪ್ಪಿದ ಭಯೋತ್ಪಾದಕನಿಂದ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಂಡಿದ್ದಾರೆ.
ಕುಲ್ಗಾಮ್ ಜಿಲ್ಲೆಯಲ್ಲಿ ಭಯೋತ್ಪಾದಕರು ಅಡಗಿರುವ ಮಾಹಿತಿ ಮೇರೆಗೆ ಪೊಲೀಸರು ಮತ್ತು ಭದ್ರತಾ ಪಡೆಗಳು ಜಂಟಿಯಾಗಿ ಶೋಧ ನಡೆಸಿದ್ದವು. ಮಂಗಳವಾರವೂ ಉಗ್ರರಿಗಾಗಿ ಶೋಧ ಮುಂದುವರಿದಿದೆ ಎಂದು ಜಮ್ಮು ಮತ್ತು ಕಾಶ್ಮೀರ ಪೊಲೀಸರು ಟ್ವೀಟ್ ಮಾಡಿದ್ದಾರೆ. ಮೃತ ಉಗ್ರ ಯಾವ ಗುಂಪಿಗೆ ಸೇರಿದವರು ಎಂಬುದು ಇನ್ನೂ ತಿಳಿದುಬಂದಿಲ್ಲ.
ಪಾಕಿಸ್ತಾನದಿಂದ ನುಸುಳಲು ಭಯೋತ್ಪಾದಕರು ಯತ್ನಿಸುತ್ತಿರುವ ಹಿನ್ನಲೆಯಲ್ಲಿ ಕುಲ್ಗಾಮ್ ಜಿಲ್ಲೆಯಲ್ಲಿ ಈ ಎನ್ ಕೌಂಟರ್ ನಡೆದಿದೆ. ಇತ್ತೀಚೆಗೆ ಕುಪ್ವಾರಾ ಜಿಲ್ಲೆಯ ಕಾಲಾ ಜಂಗಲ್‌ನಲ್ಲಿ ಭಾರತಕ್ಕೆ ನುಸುಳುತ್ತಿದ್ದಾಗ ಐವರು ಪಾಕಿಸ್ತಾನಿ ಭಯೋತ್ಪಾದಕರು ಒಳನುಸುಳುವಿಕೆ ಪ್ರಯತ್ನದಲ್ಲಿ ಕೊಲ್ಲಲ್ಪಟ್ಟರು. ಜಮ್ಮು ಮತ್ತು ಕಾಶ್ಮೀರದ ಗಡಿಯಲ್ಲಿ ಪಾಕಿಸ್ತಾನದ ಕಡೆಯಿಂದ ನುಸುಳುವಿಕೆ ಪ್ರಯತ್ನಗಳು ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಭದ್ರತಾ ಪಡೆಗಳು ಅಲರ್ಟ್ ಆಗಿವೆ.