ಹೊಸದಿಗಂತ ಡಿಜಿಟಲ್ ಡೆಸ್ಕ್:
ಫ್ಲೈದುಬೈ ವಿಮಾನದಲ್ಲಿ ಸಹ ಪೈಲಟ್‌ನ ದಾಳಿಗೆ ಗಂಭೀರವಾಗಿ ಗಾಯಗೊಂಡಿದ್ದ ಭಾರತೀಯ ಪೈಲಟ್ ಕ್ಯಾಪ್ಟನ್ ಸ್ಮಿತ್ ಮಚ್ಚಾರ್ ಇದೀಗ ಅಪಾಯದಿಂದ ಹೊರಬಂದಿದ್ದಾರೆ. ಚಿಕಿತ್ಸೆ ಪಡೆಯುತ್ತಿದ್ದ ಅವರು ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿರುವುದಾಗಿ ಸ್ವತಃ ತಿಳಿಸಿದ್ದಾರೆ. ಈ ಮೂಲಕ ಅವರ ಆರೋಗ್ಯದ ಬಗ್ಗೆ ಆತಂಕದಲ್ಲಿದ್ದ ಕುಟುಂಬಸ್ಥರು, ಸ್ನೇಹಿತರು ಹಾಗೂ ಹಿತೈಷಿಗಳಿಗೆ ನೆಮ್ಮದಿ ದೊರೆತಂತಾಗಿದೆ.
ಎಕ್ಸ್ ನಲ್ಲಿ ಪೋಸ್ಟ್ ಮಾಡಿದ ಕ್ಯಾಪ್ಟನ್
ಗುರುವಾರ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಕ್ಯಾಪ್ಟನ್ ಸ್ಮಿತ್ ಮಚ್ಚಾರ್, ತಮ್ಮ ಆರೋಗ್ಯದ ಕುರಿತು ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. ಕಷ್ಟದ ಸಮಯದಲ್ಲಿ ತಮ್ಮ ಆರೋಗ್ಯಕ್ಕಾಗಿ ಪ್ರಾರ್ಥಿಸಿದ ಹಾಗೂ ಬೆಂಬಲ ನೀಡಿದ ಪ್ರತಿಯೊಬ್ಬರಿಗೂ ಅವರು ಕೃತಜ್ಞತೆ ಸಲ್ಲಿಸಿದ್ದಾರೆ. ತಮ್ಮ ಆರೋಗ್ಯ ಈಗ ಸ್ಥಿರವಾಗಿದ್ದು, ಅಪಾಯದಿಂದ ಹೊರಬಂದಿದ್ದೇನೆ. ಚೇತರಿಸಿಕೊಳ್ಳುತ್ತಿರುವುದಾಗಿ ಹೇಳಿದ್ದಾರೆ.
ಈ ಘಟನೆಯ ಬಳಿಕ ಸ್ಮಿತ್ ಮಚ್ಚಾರ್ ಅವರ ಧೈರ್ಯ ಮತ್ತು ಕರ್ತವ್ಯನಿಷ್ಠೆಯ ಕುರಿತು ವ್ಯಾಪಕವಾಗಿ ಚರ್ಚೆಯಾಗಿತ್ತು. ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಸೇರಿದಂತೆ ಹಲವರು ಅವರ ಪಾತ್ರವನ್ನು ಶ್ಲಾಘಿಸಿದ್ದರು.
ಇದೀಗ ತಮ್ಮ ಆರೋಗ್ಯ ಸ್ಥಿರವಾಗಿದೆ ಎಂದು ಸ್ವತಃ ಸ್ಮಿತ್ ಮಚ್ಚಾರ್ ಮಾಹಿತಿ ನೀಡಿರುವುದು ಅವರ ಅಭಿಮಾನಿಗಳು ಮತ್ತು ಹಿತೈಷಿಗಳಿಗೆ ಸಂತಸದ ಸುದ್ದಿಯಾಗಿದೆ. ಸಂಕಷ್ಟದ ನಡುವೆಯೂ ಕರ್ತವ್ಯ ನಿರ್ವಹಿಸಿದ ಪೈಲಟ್ ಇದೀಗ ಚೇತರಿಕೆಯ ಹಾದಿಯಲ್ಲಿದ್ದು, ಅವರ ಆರೋಗ್ಯ ಮತ್ತಷ್ಟು ಸುಧಾರಿಸಲಿ ಎಂಬ ಹಾರೈಕೆಗಳು ವ್ಯಕ್ತವಾಗುತ್ತಿವೆ.



