ಹೊಸದಿಗಂತ ವರದಿ ಕಾರವಾರ:
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಆಡಳಿತ ವೈಫಲ್ಯ ದೇಶಾದ್ಯಂತ ಚರ್ಚೆಯ ವಿಷಯವಾಗಿದ್ದು ಕರ್ನಾಟಕದಲ್ಲಿ ಸರ್ಕಾರ ಏನು ನಡೆಸಿದೆ ಎಂದು ಜನರು ಪ್ರಶ್ನೆ ಮಾಡುವಂತಾಗಿದೆ, ಆಂತರಿಕ ಕಚ್ಚಾಟ, ಭ್ರಷ್ಟಾಚಾರ, ಹಗರಣಗಳಿಂದ ರಾಷ್ಟ್ರ ಮಟ್ಟದಲ್ಲಿ ರಾಜ್ಯ ಸರ್ಕಾರದ ಮಾನ ಹರಾಜಾಗುವಂತಾಗಿದೆ ಎಂದು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದರು.
ಭಾರತೀಯ ಜನತಾ ಪಕ್ಷ ಉತ್ತರ ಕನ್ನಡ ಜಿಲ್ಲಾ ಘಟಕದಿಂದ ರಾಜ್ಯ ಕಾಂಗ್ರೆಸ್ ಸರ್ಕಾರದ ಬೆಲೆ ಏರಿಕೆ ನೀತಿ ಮತ್ತು ಆಡಳಿತ ವೈಫಲ್ಯವನ್ನು ಖಂಡಿಸಿ ನಗರದಲ್ಲಿ ನಡೆಸಲಾದ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು ಗ್ಯಾರಂಟಿ ಯೋಜನೆಗಳ ಹೆಸರಿನಲ್ಲಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರ ಜೀವನಾವಶ್ಯಕ ವಸ್ತುಗಳ ಬೆಲೆಯನ್ನು ಸಿಕ್ಕಾಪಟ್ಟೆ ಏರಿಸುವ ಮೂಲಕ ರಾಜ್ಯದ ಜನರ ಮೇಲೆ ಆರ್ಥಿಕ ಹೊರೆ ಏರಿದೆ, ಜನಸಾಮಾನ್ಯರ ಅಗತ್ಯತೆಗಳಲ್ಲಿ ಒಂದಾಗಿರುವ ಹಾಲು ಮತ್ತು ಹಾಲಿನ ಉತ್ಪನ್ನಗಳ ಬೆಲೆ ಏರಿಕೆಯ ಜೊತೆಗೆ ಬಸ್ ಪ್ರಯಾಣ ದರ ಏರಿಸುವ ಮೂಲಕ ಸಂಕಷ್ಟದಲ್ಲಿರುವ ರಾಜ್ಯದ ಜನತೆಗೆ ಹಬ್ಬದ ಸಂದರ್ಭದಲ್ಲಿ ಶಾಕ್ ನೀಡಿದೆ ಎಂದಿದ್ದಾರೆ.
ಗ್ಯಾರಂಟಿ ಯೋಜನೆಯ ಹಣ ಫಲಾನುಭವಿಗಳಿಗೆ ಸಮರ್ಪಕವಾಗಿ ತಲುಪುತ್ತಿಲ್ಲ, ವಾಲ್ಮೀಕಿ ನಿಗಮದ ಹಗರಣ, ಕೆ.ಪಿ.ಎಸ್. ಸಿ ನೇಮಕಾತಿ ಅಕ್ರಮ ಸರ್ಕಾರದ ಭ್ರಷ್ಟ ವ್ಯವಸ್ಥೆಗೆ ಸಾಕ್ಷಿಯಾಗಿದೆ, ಗುತ್ತಿಗೆದಾರರಿಗೆ
ಬಿಲ್ ಬಾಕಿ ಇಡಲಾಗಿದೆ, ರಾಜ್ಯದಲ್ಲಿ ಕೊಲೆ,ಸುಲಿಗೆ ಅಕ್ರಮ ಚಟುವಟಿಕೆಗಳು ಹೆಚ್ಚಿದ್ದು ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಸರ್ಕಾರದ ಆಡಳಿತ ವೈಖರಿಯನ್ನು ಪ್ರಶ್ನೆ ಮಾಡುವಂತಾಗಿದೆ ಎಂದು ಹೇಳಿದರು.
ಮುಖ್ಯಮಂತ್ರಿಗಳೇ ನಿರ್ವಹಿಸುತ್ತಿರುವ ಆರ್ಥಿಕ ಇಲಾಖೆ ಸರ್ಕಾರದ ಬೊಕ್ಕಸದಲ್ಲಿ ಹಣ ಇಲ್ಲ ಯಾವುದೇ ಹೊಸ ಯೋಜನೆಗಳನ್ನು ಘೋಷಿಸಬೇಡಿ ಎಂದು ಸ್ಪಷ್ಟವಾಗಿ ಹೇಳಿದ್ದು, ರಾಜ್ಯ ಸರ್ಕಾರ ಮಂಗಳೂರಿನಲ್ಲಿ ವಿಶೇಷ ಅಧಿವೇಶನ ನಡೆಸಿ ಸಾವಿರಾರು ಕೋಟಿ ರೂಪಾಯಿಗಳ ಅನುದಾನ ಘೋಷಿಸಿರುವುದು ಹಾಸ್ಯಾಸ್ಪದ ಎಂದು ಸಂಸದ ಕಾಗೇರಿ ವ್ಯಂಗ್ಯವಾಡಿದರು.
ಬಿಜೆಪಿ ಜಿಲ್ಲಾಧ್ಯಕ್ಷ ಎನ್.ಎಸ್. ಹೆಗಡೆ ಮತ್ತು ಜಿಲ್ಲೆಯ ವಿವಿಧ ಮೋರ್ಛಾ, ಮಂಡಳಗಳ ಪದಾಧಿಕಾರಿಗಳು ಕಾರ್ಯಕರ್ತರು ಇದ್ದರು.



