ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೋಲ್ಕತ್ತಾದ ವೈದ್ಯೆಯ ಅತ್ಯಾಚಾರ, ಕೊಲೆ ಆರೋಪಿಗೆ ಮರಣದಂಡನೆ ವಿಧಿಸುವಂತೆ ಕೋರಿ ಬಂಗಾಳ ಸರ್ಕಾರ ಕೋಲ್ಕತ್ತಾ ಹೈಕೋರ್ಟ್ಗೆ ಮನವಿ ಮಾಡಿದೆ.
ಸಂಜಯ್ ರಾಯ್‌ಗೆ ಜೀವಾವಧಿ ಶಿಕ್ಷೆ ವಿಧಿಸಿದ ಸೀಲ್ದಾ ನ್ಯಾಯಾಲಯದ ತೀರ್ಪಿನ ವಿರುದ್ಧ ಅಡ್ವೊಕೇಟ್ ಜನರಲ್ ಕಿಶೋರ್ ದತ್ತಾ ಅವರು ವಿಭಾಗೀಯ ಪೀಠದ ನ್ಯಾಯಮೂರ್ತಿ ದೇಬಂಗ್ಶು ಬಸಾಕ್ ಅವರ ಬಳಿ ಮನವಿ ಮಾಡಿದರು. ಪ್ರಕರಣ ದಾಖಲಿಸಲು ಅವಕಾಶ ನೀಡಲಾಗಿದೆ.
ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಕೋಲ್ಕತ್ತಾ ನ್ಯಾಯಾಲಯವು ಅಪರಾಧಿಗೆ ಜೀವಾವಧಿ ಶಿಕ್ಷೆಯನ್ನು ನೀಡಿದ ಬಗ್ಗೆ ಅತೃಪ್ತಿ ವ್ಯಕ್ತಪಡಿಸಿದ್ದರು. ತನಿಖೆಯನ್ನು ರಾಜ್ಯ ಪೊಲೀಸರಿಂದ ಬಲವಂತವಾಗಿ ತೆಗೆದುಕೊಳ್ಳಲಾಗಿದೆ ಎಂದು ಪ್ರತಿಪಾದಿಸಿದರು.
ಸರ್ಕಾರಿ ಆಸ್ಪತ್ರೆಯಲ್ಲಿ ಕರ್ತವ್ಯ ನಿರತ ವೈದ್ಯೆಯ ಅತ್ಯಾಚಾರ-ಕೊಲೆ ಪ್ರಕರಣದ ತನಿಖೆಗಾಗಿ ಕೇಂದ್ರೀಯ ತನಿಖಾ ದಳ (ಸಿಬಿಐ) ಅನ್ನು ಟೀಕಿಸಿದರು. ಮೊದಲ ದಿನದಿಂದಲೇ ನಾವೆಲ್ಲರು ಮರಣದಂಡನೆಗೆ ಒತ್ತಾಯಿಸಿದ್ದೆವು, ಆದರೆ ನ್ಯಾಯಾಲಯವು ಜೀವಾವಧಿ ಶಿಕ್ಷೆ ವಿಧಿಸಿದೆ. ನಾವು ಇನ್ನೂ ನಮ್ಮ ಬೇಡಿಕೆಗೆ ಬದ್ಧರಾಗಿದ್ದೇವೆ ಎಂದಿದ್ದಾರೆ..
ಆರ್ಜಿಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಸ್ನಾತಕೋತ್ತರ ತರಬೇತಿ ಪಡೆಯುತ್ತಿದ್ದ ವೈದ್ಯೆಯನ್ನು ಅತ್ಯಾಚಾರ ಮಾಡಿ ಕೊಲೆ ಮಾಡಿದ್ದ ಪ್ರಕರಣದಲ್ಲಿ ಸಂಜಯ್ ರಾಯ್ನನ್ನು ಅಪರಾಧಿ ಎಂದು ಘೋಷಿಸಲಾಗಿತ್ತು.ನಂತರ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಅನಿರ್ಬನ್ ದಾಸ್ ಅವರ ಅಧ್ಯಕ್ಷತೆಯಲ್ಲಿ ಸೀಲ್ದಾ ನ್ಯಾಯಾಲಯವು ಸೋಮವಾರ ಜೀವಾವಧಿ ಶಿಕ್ಷೆ ವಿಧಿಸಿತು.