ಬಿಜೆಪಿಗೆ ಹೀನಾಯ ಸೋಲು: ಸೋಲಿನ ಸಂಪೂರ್ಣ ಹೊಣೆ ಹೊತ್ತ ಬಿಜೆಪಿ ರಾಜ್ಯಾಧ್ಯಕ್ಷ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಗೆ ನಿರೀಕ್ಷೆಗೂ ಮೀರಿದ ಸೋಲು ಕಂಡಿದೆ. ಕಾಂಗ್ರೆಸ್ ಸ್ಪಷ್ಟಬಹುಮತದೊಂದಿಗೆ ಸರ್ಕಾರ ರಚಿಸಲಿದೆ. ʻರಾಜ್ಯದ ಅಸೆಂಬ್ಲಿ ಚುನಾವಣಾ ಫಲಿತಾಂಶ ಅನಿರೀಕ್ಷಿತವಾದದ್ದು, ಬಿಜೆಪಿಗೆ ಹಿನ್ನಡೆಯಾಗಿದೆ. ರಾಜ್ಯಾಧ್ಯಕ್ಷನಾಗಿ ಸೋಲಿನ ಹೊಣೆ ಹೊರುತ್ತೇನೆʼ ಎಂದು ಪಕ್ಷದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದರು.

ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಚೇರಿಯಲ್ಲಿ ಮಾತನಾಡಿದ ಅವರು, ರಾಜ್ಯದ ಒಳ್ಳೆಯ ವಿರೋಧ ಪಕ್ಷವಾಗಿ ಜವಾಬ್ದಾರಿಯಿಂದ ಕಾರ್ಯ ನಿರ್ವಹಿಸಲಿದ್ದೇವೆ. ಆಯ್ಕೆಯಾದ ನಮ್ಮ ಅಭ್ಯರ್ಥಿಗಳಿಗೆ ಅಭಿನಂದನೆಗಳು. ರಾಜ್ಯದ ಮತದಾರರಿಗೆ ಮತ್ತು ವಿಶೇಷವಾಗಿ ನಮ್ಮ ಕಾರ್ಯಕರ್ತರಿಗೆ ಕೃತಜ್ಞತೆಗಳನ್ನು ಸಲ್ಲಿಸಿದರು. ಅಹೋರಾತ್ರಿ ದುಡಿದು ಪಕ್ಷಕ್ಕಾಗಿ ಶ್ರಮಿಸಿದ್ದಾರೆ. ಅದಕ್ಕಾಗಿ ಕಾರ್ಯಕರ್ತರು ಮತ್ತು ಮುಖಂಡರಿಗೆ ಧನ್ಯವಾದಗಳು ಎಂದರು.

ನಮ್ಮ ಸರಕಾರ ಒಳ್ಳೆಯ ಕಾರ್ಯಗಳನ್ನು ಮಾಡಿದೆ. ಅಭಿವೃದ್ಧಿ ಕಾರ್ಯದಲ್ಲಿ ಯಡಿಯೂರಪ್ಪ- ಬಸವರಾಜ ಬೊಮ್ಮಾಯಿ ಅವರು ಉತ್ತಮ ಸಾಧನೆ ಮಾಡಿದ್ದಾರೆ. ಹೊಸ ಸರಕಾರದ ಒಳ್ಳೆಯ ಕಾರ್ಯಗಳಿಗೆ ಸಹಕಾರ ನೀಡಲಿದ್ದೇವೆ. ಜೊತೆಗೆ ಹಿನ್ನಡೆಗೆ ಕಾರಣವನ್ನು ವಿಶ್ಲೇಷಣೆ ಮಾಡುತ್ತೇವೆ ಎಂದು ಅವರು ಪ್ರಶ್ನೆಗೆ ಉತ್ತರವಾಗಿ ತಿಳಿಸಿದರು.

ಮೇ 10ರಂದು 224 ಕ್ಷೇತ್ರಗಳಿಗೆ ಮತದಾನ ನಡೆದಿತ್ತು. ಇಂದು ಬಂದ ಫಲಿತಾಂಶದಲ್ಲಿ ಬಿಜೆಪಿ-ಜೆಡಿಎಸ್‌ ಹೀನಾಯ ಸೋಲು ಕಂಡಿದ್ದು, ಕಾಂಗ್ರೆಸ್‌ ಸ್ಪಷ್ಟ ಬಹುಮತದೊಂದಿಗೆ ಸರ್ಕಾರ ರಚಿಸಲಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!