ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದ ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳಲ್ಲಿ ಬಹಿರಂಗ ಪ್ರಚಾರವು ಮತ್ತಷ್ಟು ಬಿರುಸು ಪಡೆದುಕೊಂಡಿದೆ.
ಇಂದು ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ಪಕ್ಷದ ಪ್ರಮುಖ ನಾಯಕರು ತಮ್ಮ ಅಭ್ಯರ್ಥಿಗಳ ಪರವಾಗಿ ಭರ್ಜರಿ ಮತಯಾಚನೆ ನಡೆಸಿದರು.
ದಾವಣಗೆರೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಮಲ್ಲಿಕಾರ್ಜುನ ಪರವಾಗಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಚಿವರಾದ ಡಾ. ಜಿ. ಪರಮೇಶ್ವರ್, ಡಾ. ಹೆಚ್.ಸಿ. ಮಹದೇವಪ್ಪ ಹಾಗೂ ಈಶ್ವರ್ ಖಂಡ್ರೆ ಸೇರಿದಂತೆ ಹಲವು ಮುಖಂಡರು ಬಹಿರಂಗ ಪ್ರಚಾರ ನಡೆಸಿದರು.
ಇನ್ನೊಂದೆಡೆ, ಬಿಜೆಪಿ ಅಭ್ಯರ್ಥಿ ಶ್ರೀನಿವಾಸ ದಾಸ ಕರಿಯಪ್ಪ ಅವರ ಪರವಾಗಿ ಕ್ಷೇತ್ರದ ವಿವಿಧೆಡೆ ವಿರೋಧಪಕ್ಷದ ನಾಯಕ ಆರ್. ಅಶೋಕ ಹಾಗೂ ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಮತಯಾಚಿಸಿದರು. ಬಾಗಲಕೋಟೆಯಲ್ಲಿಯೂ ಚುನಾವಣಾ ಕಳೆ ಕಳೆಗಟ್ಟಿದ್ದು, ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಪರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೇವನಮಟ್ಟಿ ಗ್ರಾಮದಲ್ಲಿ ಪ್ರಚಾರ ನಡೆಸಿದರು.
ಈ ವೇಳೆ ಮಾತನಾಡಿದ ಅವರು, 2028ರ ವಿಧಾನಸಭಾ ಚುನಾವಣೆಯಲ್ಲೂ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ಖಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಅದೇ ರೀತಿ, ಬಾಗಲಕೋಟೆಯ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಪರವಾಗಿ ಕೇಂದ್ರ ಸಚಿವ ವಿ. ಸೋಮಣ್ಣ, ಸಂಸದ ರಮೇಶ್ ಜಿಗಜಿಣಗಿ ಹಾಗೂ ಬಸನಗೌಡ ಪಾಟೀಲ್ ಯತ್ನಾಳ್ ಅವರು ಮತಯಾಚನೆ ಮಾಡಿ, ಬಿಜೆಪಿ ಅಭ್ಯರ್ಥಿಯನ್ನು ಗೆಲ್ಲಿಸುವಂತೆ ಮನವಿ ಮಾಡಿದರು.



