ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೋಲಾರದ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ವಿದ್ಯಾರ್ಥಿಗಳನ್ನು ಶೌಚ ಗುಂಡಿಗೆ ಇಳಿಸಿ ಸ್ವಚ್ಛತೆ ಮಾಡಿಸಿದ ಪ್ರಕರಣ ಸಂಬಂಧ ಇನ್ನಿಬ್ಬರು ಆರೋಪಿಗಳ ಬಂಧನಕ್ಕೆ ವಿಳಂಬವಾಗುತ್ತಿರುವುದಕ್ಕೆ ಸಿಎಂ ಸಿದ್ದರಾಮಯ್ಯ ಗರಂ ಆಗಿದ್ದು, ಪೊಲೀಸ್ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
ಕೋಲಾರ ಜಿಲ್ಲಾ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಶೌಚ ಗುಂಡಿಗೆ ಮಕ್ಕಳನ್ನು ಇಳಿಸಿ ಶುಚಿಗೊಳಿಸಿದ ಪ್ರಕರಣದಲ್ಲಿ ಮೂವರನ್ನು ಮಾತ್ರ ಜೈಲಿಗೆ ಕಳುಹಿಸಲಾಗಿದೆ. ತಲೆಮರೆಸಿಕೊಂಡಿರುವ ಇನ್ನೂ ಇಬ್ಬರು ಆರೋಪಿಗಳನ್ನು ಏಕೆ ಬಂಧಿಸಿಲ್ಲ ಎಂದು ಪೊಲೀಸ್ ಅಧಿಕಾರಿಗಳನ್ನು ಪ್ರಶ್ನಿಸಿದರು.
ಇನ್ನೆರಡು ದಿನಗಳಲ್ಲಿ ಉಳಿದಿಬ್ಬರು ಆರೋಪಿಗಳನ್ನು ಬಂಧಿಸಬೇಕು ಎಂದು ತಾಕೀತು ಮಾಡಿದರು.
ಈ ಘಟನೆ ಇಡೀ ರಾಜ್ಯಕ್ಕೆ ಮತ್ತು ಜಿಲ್ಲೆಗೆ ಒಂದು ಪಾಠ. ಯಾವುದೇ ಕಾರಣಕ್ಕೂ ಇಂತಹ ಘಟನೆ ಮರುಕಳಿಸಬಾರದು ಎಂದು ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆ ನೀಡಿದರು.